ಶುಕ್ರವಾರ, ಮಾರ್ಚ್ 31, 2023
32 °C
ತಂದೆಯ ಆದಾಯ, ಜಾತಿ ಪರಿಗಣನೆ: ಹೊಸ ಪಟ್ಟಿಗೆ ನಿರ್ದೇಶನ

ಶಿಕ್ಷಕರ ನೇಮಕ: ಆಯ್ಕೆ ಪಟ್ಟಿ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 15 ಸಾವಿರ ಪದವೀಧರ ಶಿಕ್ಷಕರನ್ನು ನೇಮಕ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಪಡಿಸಿರುವ ಹೈಕೋರ್ಟ್‌, ಹೊಸ ಪಟ್ಟಿ ಸಿದ್ಧಪಡಿಸುವಂತೆ ನಿರ್ದೇಶನ ನೀಡಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪತಿಯ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಪರಿಗಣಿಸಿ ಶಿಕ್ಷಕರ ಆಯ್ಕೆ ಪ್ರಕ್ರಿಯೆ ನಡೆಸಿದ್ದ ಶಿಕ್ಷಣ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಅಕ್ಷತಾ ಚೌಗಲಾ ಸೇರಿದಂತೆ 90ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳು ರಿಟ್‌ ಅರ್ಜಿಗಳನ್ನು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಗಳನ್ನು ಮಾನ್ಯ ಮಾಡಿ ಸೋಮವಾರ ಆದೇಶಿಸಿದೆ. 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 1:1ರ ಅನುಪಾತದಂತೆ ಸಿದ್ಧಪಡಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿದೆ. ಪತಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರದ ಬದಲು ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನೂ ಪರಿಗಣಿಸಿ ಹೊಸದಾಗಿ ಪಟ್ಟಿ ಸಿದ್ಧಪಡಿಸಬೇಕು ಎಂದೂ ಸೂಚಿಸಿದೆ.

ಅರ್ಜಿದಾರರ ವಾದವೇನು?: ವಿಚಾರಣೆ ವೇಳೆ ವಾದ ಮಂಡಿಸಿದ್ದ ಅರ್ಜಿದಾರರ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ, ’1:1ರ ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅರ್ಜಿದಾರರಿಗಿಂತ ಕಡಿಮೆ ಅಂಕ ಪಡೆದಿರುವ ಅಭ್ಯರ್ಥಿಗಳ ಹೆಸರುಗಳಿವೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರನ್ನು (ಡಿಡಿಪಿಐ) ವಿಚಾರಿಸಿದಾಗ ವಿವಾಹಿತ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ ಅಥವಾ ಜಾತಿ ಪ್ರಮಾಣ ಪತ್ರದ ಬದಲಿಗೆ ತಂದೆಯ ಆದಾಯ ಅಥವಾ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿರುವುದರಿಂದ ಅರ್ಜಿದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

‘ತಂದೆಯ ಆದಾಯ, ಜಾತಿ ಬದಲು ಪತಿ ಆದಾಯ, ಜಾತಿಯನ್ನು ಪರಿಗಣಿಸಿದ್ದರಿಂದಾಗಿ ಅರ್ಜಿದಾರರನ್ನು ಸಾಮಾನ್ಯ ವರ್ಗಕ್ಕೆ ಸೇರಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ, ಸಾಮಾನ್ಯ ಅಭ್ಯರ್ಥಿಗಳ ವರ್ಗಕ್ಕೆ ಸೇರ್ಪಡೆ ಮಾಡಿರುವ ಈ ಕ್ರಮ ಸರಿಯಲ್ಲ. ಅಂತೆಯೇ, ಪತಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಕೋರುವುದು ಕಾನೂನಿಗೆ ವಿರುದ್ಧವಾದ ನಡೆ’ ಎಂದು ಆಕ್ಷೇಪಿಸಿದ್ದರು. ‌‘ಅರ್ಜಿದಾರರ ಪತಿಯ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಪರಿಗಣಿಸಿ, 2022ರ ನವೆಂಬರ್ 18ರಂದು ಪ್ರಕಟಿಸಿರುವ 1:1ರ ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಬೇಕು‘ ಎಂದು ಕೋರಿದ್ದರು.

ಪ್ರಕರಣವೇನು?: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಕ್ಕೆ ಶಿಕ್ಷಣ ಇಲಾಖೆ 2022ರ ಫೆಬ್ರುವರಿ 22ರಂದು ಅಧಿಸೂಚನೆ ಹೊರಡಿಸಿತ್ತು. ಇದರ ಅನುಸಾರ ಪ್ರಕರಣದ ಅರ್ಜಿದಾರ ಅಭ್ಯರ್ಥಿಗಳು, ಲಿಖಿತ ಪರೀಕ್ಷೆಗೆ ಹಾಜರಾಗಿ ಉತ್ತಮ ಅಂಕಗಳೊಂದಿಗೆ ರ್‍ಯಾಂಕ್ ಗಳಿಸಿದ್ದರು. 1:2ರ ಅನುಪಾತದ ಅನುಸಾರ ತಾತ್ಕಾಲಿಕ ಪಟ್ಟಿಯಲ್ಲಿ ದಾಖಲೆಗಳ ಪರಿಶೀಲನೆಗೆ ಅರ್ಹತೆ ಪಡೆದಿದ್ದರು.

ದಾಖಲೆಗಳನ್ನು ಪರಿಶೀಲಿಸಿದ್ದ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, 2022ರ ನವೆಂಬರ್ 18ರಂದು ಪ್ರಕಟಿಸಲಾದ 1:1ರ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅರ್ಜಿದಾರರು ಸ್ಥಾನ ಪಡೆದಿರಲಿಲ್ಲ. ಈ ಪಟ್ಟಿಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ನೇಮಕಾತಿ ಕುರಿತ ತಕರಾರು ಏನು?

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ (6ರಿಂದ 8ನೇ ತರಗತಿ) ಖಾಲಿ ಇರುವ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ 2022ರ ಮಾರ್ಚ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆ ಹೊರಡಿಸಿತ್ತು.

ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂಬ ಕಾರಣಕ್ಕಾಗಿ ವಿವಾಹಿತ ಮಹಿಳೆಯರನ್ನು ಅಂತಿಮ ಆಯ್ಕೆ ಪಟ್ಟಿಯಿಂದ ಕೈಬಿಡಲಾಗಿತ್ತು. 

ಈ ಕುರಿತು ’ಪ್ರಜಾವಾಣಿ’ ನ.22ರ (2022) ಸಂಚಿಕೆಯಲ್ಲಿ ‘ಶಿಕ್ಷಕಿಯಾಗುವ ಕನಸು ಕಿತ್ತುಕೊಂಡ ಮದುವೆ’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. 


Caption

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು