ಆರೋಗ್ಯ ಸಂಜೀವಿನಿ ಶೀಘ್ರ ಜಾರಿ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ರೂಪಿಸಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು–2022 ಉದ್ಘಾಟಿಸಿ ಅವರು ಮಾತನಾಡಿದರು.
‘ನೌಕರರ ಆರೋಗ್ಯ ರಕ್ಷಣೆಗಾಗಿ ರೂಪಿಸಿರುವ ಆರೋಗ್ಯ ಸಂಜೀವಿನಿ ಯೋಜನೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ಯೋಜನೆಯ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆಗಳೂ ನಡೆದಿವೆ’ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಒತ್ತಾಸೆಯಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಪ್ರಸಕ್ತ ವರ್ಷವೇ ಏಳನೇ ವೇತನ ಆಯೋಗ ರಚಿಸಲು ತೀರ್ಮಾನಿಸಲಾಗಿದೆ. ಸರ್ಕಾರಿ ನೌಕರರು ಕೂಡ ಜನಸಾಮಾನ್ಯರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಅರ್ಹ ಜನರಿಗೆ ತಲುಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ಬಿ.ಎಸ್. ಯಡಿಯೂರಪ್ಪ, ಸಚಿವರಾದ ಆರ್. ಅಶೋಕ, ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಕೆ.ಸಿ. ನಾರಾಯಣ ಗೌಡ, ಮುನಿರತ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.