ಸೋಮವಾರ, ಆಗಸ್ಟ್ 8, 2022
24 °C
ಅಕ್ಟೋಬರ್‌ಗೆ ಶೈಕ್ಷಣಿಕ ವರ್ಷಾರಂಭ: ಅಶ್ವತ್ಥನಾರಾಯಣ

ಈ ಬಾರಿಯೇ 4 ವರ್ಷದ ಪದವಿ: ಡಿಸಿಎಂ ಅಶ್ವತ್ಥನಾರಾಯಣ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಶಿಫಾರಸಿನಂತೆ ಈ ಶೈಕ್ಷಣಿಕ ವರ್ಷದಿಂದಲೇ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ನಾಲ್ಕು ವರ್ಷದ ಪದವಿ ಕೋರ್ಸುಗಳನ್ನು ಆರಂಭಿಸುವಂತೆ ಕುಲಪತಿಗಳಿಗೆ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಸಲಹೆ ನೀಡಿದ್ದಾರೆ.

2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಯ ಬಗ್ಗೆ ರಾಜ್ಯದಎಲ್ಲ ಕುಲಪತಿಗಳ ಜತೆ ಮಂಗಳವಾರ ಅವರು ವರ್ಚುಯಲ್‌ ಸಭೆ ನಡೆಸಿದರು.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಅಕ್ಟೋಬರ್‌ ಮೊದಲ ವಾರದಲ್ಲಿ ಈ ವರ್ಷದ ಶೈಕ್ಷಣಿಕ ವರ್ಷದ ಚಟುವಟಿಕೆ ಆರಂಭವಾಗುತ್ತವೆ. ಮೊದಲ ವರ್ಷದಪದವಿಗೆ ಅಕ್ಟೋಬರ್‌ ಮೊದಲ ವಾರದಿಂದಲೇ ದಾಖಲಾತಿ ಆರಂಭ ಮಾಡುವಂತೆ ಕುಲಪತಿಗಳಿಗೆ ತಿಳಿಸಲಾಗಿದೆ’ ಎಂದರು.

‘ಕೋವಿಡ್‌ ಕಾರಣಕ್ಕೆ ಪ್ರಸಕ್ತ ವರ್ಷದಲ್ಲಿ ಪಿಯುಸಿ ವಿದ್ಯಾರ್ಥಿಗಳೆಲ್ಲರೂ ಪಾಸಾಗಿದ್ದಾರೆ. ವಿವಿಧ ಕೋರ್ಸುಗಳಿಗೆ ಬೇಡಿಕೆ ಬರುತ್ತಿದೆ. ನಾಲ್ಕು ವರ್ಷದ ಪದವಿ ತರಗತಿಗಳನ್ನು ಆರಂಭಿಸುವ ಮೂಲಕ ವಿಶ್ವವಿದ್ಯಾಲಯಗಳು ಪದವಿ ವ್ಯಾಸಂಗದ ಅಭಿಲಾಶೆಯುಳ್ಳ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಕುಲಪತಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.

ಬಿ.ಎಸ್ಸಿಗೆ ಸಿಇಟಿ ಇಲ್ಲ:

ಬಿ.ಎಸ್ಸಿಗೆ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮೂಲಕ ಪ್ರವೇಶ ನೀಡುವ ಚಿಂತನೆಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ವಿಜ್ಞಾನ ಬೋಧನೆ ಮತ್ತು ಕಲಿಕೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪದವಿ ವಿಜ್ಞಾನ ಪ್ರವೇಶಕ್ಕೂ ಸಿಇಟಿ ತರುವ ಯೋಚನೆ ಇತ್ತು. ಆದರೆ, ಸದ್ಯಕ್ಕೆ ಕೈಬಿಡಲಾಗಿದೆ ಎಂದರು.

ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಈ ವರ್ಷದಿಂದಲೇ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಪ್ರತ್ಯೇಕ ಡಿಜಿಟಲ್‌ ಪೋರ್ಟಲ್‌ ಸಿದ್ಧವಾಗುತ್ತಿದೆ. ಅದನ್ನು ಇ- ಆಡಳಿತ ಇಲಾಖೆ ಅಭಿವೃದ್ಧಿಪಡಿಸುತ್ತಿದೆ. ಇದೇ 25 ರಿಂದ ಪ್ರಾಯೋಗಿಕವಾಗಿ ಬಳಸಲು ಸರ್ಕಾರ ಅನುಮತಿ ನೀಡಿದೆ. ಜುಲೈ 15ಕ್ಕೆ ಲೋಕಾರ್ಪಣೆ ಆಗಲಿದೆ. ದಾಖಲಾತಿಗೆ ನಿಗದಿ ಮಾಡಿರುವ ದಿನಾಂಕಕ್ಕೆ ಮೊದಲೇ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಈ ಪೋರ್ಟಲ್‌ ಬಳಕೆಗೆ ಸಿದ್ಧವಾಗಿರಬೇಕು ಎಂದು ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಜುಲೈ 15ರಿಂದ ದ್ವಿತೀಯ ಪಿಯುಸಿ ದಾಖಲಾತಿ:

ಬೆಂಗಳೂರು: 2021–22ನೇ ಸಾಲಿಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳ ಶೈಕ್ಷಣಿಕ ಚಟುವಟಿಕೆ ಆರಂಭಿಸುವ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಒಂದು ವಾರದ ಬಳಿಕ ಪ್ರಥಮ ಪಿಯುಸಿ ದಾಖಲಾತಿ ಆರಂಭವಾಗಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದಾಖಲಾತಿಗೆ ದಂಡ ಶುಲ್ಕವಿಲ್ಲದೆ ಜುಲೈ 15ರಿಂದ ಆಗಸ್ಟ್‌ 13ವರೆಗೆ, ₹ 670 ದಂಡ ಸಹಿತ ಆಗಸ್ಟ್ 16ರಿಂದ 27ರವರೆಗೆ ಹಾಗೂ ₹ 2,890 ದಂಡ ಸಹಿತ ಆಗಸ್ಟ್‌ 30ರಿಂದ ಸೆ. 9ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 15ರಿಂದ ಆನ್‌ಲೈನ್‌ ತರಗತಿ ಆರಂಭವಾಗಲಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ 2019–20 ಹಾಗೂ 2020–21ನೇ ನೇ ಸಾಲಿನಲ್ಲಿ ನಿಗದಿಪಡಿಸಿದ ಶುಲ್ಕ ಸಂಗ್ರಹಿಸಬೇಕು ಎಂದೂ ಇಲಾಖೆ ಸ್ಪಷ್ಟಪಡಿಸಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು