ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟರ ಮೇಲಿನ ದೌರ್ಜನ್ಯ: 6,500 ಪ್ರಕರಣ ಬಾಕಿ: ಎ. ನಾರಾಯಣಸ್ವಾಮಿ

Last Updated 11 ಫೆಬ್ರುವರಿ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ 6,500 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ವಿಶೇಷ ನ್ಯಾಯಾಲಯ ಇಲ್ಲದೇ ಇರುವುದರಿಂದ ವಿಚಾರಣೆ ವಿಳಂಬವಾಗುತ್ತಿದೆ ಎಂದುಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳು ಹಾಗೂ ಮ್ಯಾನ್‌ಹೋಲ್‌ಗಳನ್ನು ಸ್ಚಚ್ಛಗೊಳಿಸುವಾಗ ಕಾರ್ಮಿಕರ ಸಾವು ಸಂಭವಿಸಿದ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ಶುಕ್ರವಾರ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಚಾರಣೆಗೆ ರಾಜ್ಯದಲ್ಲಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ಅಗತ್ಯವಿದೆ. ವಿಚಾರಣೆ ಪೂರ್ಣಗೊಂಡಿರುವ ಪ್ರಕರಣಗಳಲ್ಲೂ ಶೇಕಡ 3ರಷ್ಟು ಆರೋಪಿಗಳಿಗೆ ಮಾತ್ರ ಶಿಕ್ಷೆಯಾಗುತ್ತಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ವಿಶೇಷ ನ್ಯಾಯಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

90 ಕಾರ್ಮಿಕರ ಸಾವು: ರಾಜ್ಯದಲ್ಲಿ 1995ರಿಂದ ಈವರೆಗೆ ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ 95 ಕಾರ್ಮಿಕರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲೇ 40 ಮಂದಿ ಮೃತರಾಗಿದ್ದಾರೆ ಎಂದು ವಿವರ ನೀಡಿದರು.

ಮ್ಯಾನ್‌ಹೋಲ್‌ ಸ್ವಚ್ಛತಾ ಕಾರ್ಮಿಕರ ಸಾವಿನ ಪ್ರಕರಣದಲ್ಲಿ ಗುತ್ತಿಗೆದಾರರ ವಿರುದ್ಧ ಮೊಕದ್ದಮೆ ದಾಖಲಿಸಿರುವುದು ಮತ್ತು ಮುಂದಿನ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದರು.

‘ಈಶ್ವರಪ್ಪ ಕನಸನ್ನು ಹೇಗೆ ಒಪ್ಪಲಿ?’

‘ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುವುದು ಸಚಿವ ಕೆ.ಎಸ್‌. ಈಶ್ವರ‍ಪ್ಪ ಕನಸು. ಅವರ ಕನಸನ್ನು ನಾನು ಹೇಗೆ ಒಪ್ಪಲಿ’ ಎಂದು ಎ. ನಾರಾಯಣ ಸ್ವಾಮಿ ಪ್ರಶ್ನಿಸಿದರು.

ಈ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ರಾಷ್ಟ್ರ ಧ್ವಜಕ್ಕೆ ಗೌರವ ಕೊಡುತ್ತೇನೆ. ಹಿಜಾಬ್‌ ವಿವಾದದ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನ್ಯಾಯಾಲಯದ ಆದೇಶ ಪಾಲಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT