ಶನಿವಾರ, ಅಕ್ಟೋಬರ್ 31, 2020
26 °C
ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆಗೆ ಮುಖ್ಯಮಂತ್ರಿ ಒಪ್ಪಿಗೆ

ಸರ್ಕಾರದ ವಿರುದ್ಧ ಆಯನೂರು ಧರಣಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗೌರವ ಧನ ಪಾವತಿಸದ ಧೋರಣೆ ಖಂಡಿಸಿ  ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್‌ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಮಂಗಳವಾರ ವಿಧಾನ ಪರಿಷತ್‌ನಲ್ಲಿ ಸಭಾಪತಿ ಪೀಠದ ಎದುರು ಧರಣಿ ನಡೆಸಿದರು.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಆಯನೂರು ಮಂಜುನಾಥ್‌, ‘ಅತಿಥಿ ಉಪನ್ಯಾಸಕರನ್ನು ಮಾರ್ಚ್‌ ಆರಂಭದಲ್ಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿತ್ತು ಎಂದು ಉನ್ನತ ಶಿಕ್ಷಣ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಅಂತಹ ಯಾವುದೇ ಆದೇಶವನ್ನೂ ಈವರೆಗೆ ನೀಡಿಲ್ಲ. ಅತಿಥಿ ಉಪನ್ಯಾಸಕರಿಗೆ ಗೌರವ ಧನ ಪಾವತಿಸುವಂತೆ ಕೇಂದ್ರ ಸರ್ಕಾರ ನೀಡಿರುವ ಸೂಚನೆಯನ್ನೂ ಪಾಲಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಆರ್ಥಿಕ ಮುಗ್ಗಟ್ಟಿನಿಂದ ಹಲವು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಅತಿಥಿ ಉಪನ್ಯಾಸಕರಿಗೆ ಬಾಕಿ ಇರುವ ಗೌರವ ಧನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.

ಸಚಿವರಿಂದ ಬುಧವಾರ ಉತ್ತರ ಕೊಡಿಸುವುದಾಗಿ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು. ಅದನ್ನು ಒಪ್ಪದ ಆಯನೂರು, ಸಭಾಪತಿಯವರ ಪೀಠದ ಎದುರು ಧರಣಿ ಆರಂಭಿಸಿದರು. ಪ್ರತಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸದಸ್ಯರೂ ಧರಣಿಗೆ ಇಳಿದರು. ಪರಿಸ್ಥಿತಿ ನಿಯಂತ್ರಿಸಲು ಸಭಾಪತಿ ಕಲಾಪ ಮುಂದೂಡಿದರು.

ತಕ್ಷಣ ಪಾವತಿಯ ಭರವಸೆ: ಮತ್ತೆ ಕಲಾಪ ಆರಂಭವಾದಾಗ ಸದನಕ್ಕೆ ಬಂದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ‘ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 14,447 ಅತಿಥಿ ಉಪನ್ಯಾಸಕರಿಗೆ ಮಾರ್ಚ್‌ವರೆಗೂ ಗೌರವ ಧನ ಪಾವತಿಯಾಗಿದೆ. ಏಪ್ರಿಲ್‌ನಿಂದ ಆಗಸ್ಟ್‌ವರೆಗಿನ ಮೊತ್ತವನ್ನು ತಕ್ಷಣ ಪಾವತಿಸಲಾಗುವುದು. ಈ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು