ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲವಾರು ಕ್ಷೇತ್ರಗಳಲ್ಲಿ ಕರ್ನಾಟಕ ರಾಜ್ಯ ನಂ.1: ಸಿಎಂ ಬಸವರಾಜ ಬೊಮ್ಮಾಯಿ

Last Updated 15 ಆಗಸ್ಟ್ 2022, 4:54 IST
ಅಕ್ಷರ ಗಾತ್ರ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್ಯವನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಷಣ ಮಾಡಿದ್ದಾರೆ.

‘ನಾಡಿನ ಸಮಸ್ತ ಜನತೆಗೆ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಶುಭಾಶಯಗಳು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ ಶಾಂತಿಯ, ಸಹಬಾಳ್ವೆಯ, ಸಮಾನತೆಯ, ಸಮೃದ್ಧಿಯ, ಏಕತೆಯ ಕರ್ನಾಟಕದಿಂದ ನವ ಭಾರತವನ್ನು ನಿರ್ಮಿಸಲು ಶ್ರಮಿಸೋಣ’ ಎಂದು ಸಿಎಂ ಬೊಮ್ಮಾಯಿ ಕರೆ ನೀಡಿದರು.

‘ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಎಲ್ಲರಿಗೂ ನನ್ನ ನಮನಗಳನ್ನು ಸಲ್ಲಿಸುತ್ತೇನೆ. ಈ ಸ್ವಾತಂತ್ರ್ಯ ದಿನವನ್ನು ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನಗೈದ ಹಲವಾರು ಅನಾಮಧೇಯ ಹೋರಾಟಗಾರರಿಗೆ ಈ ದಿನವನ್ನು ಅರ್ಪಿಸುತ್ತೇನೆ’ ಎಂದು ಸಿಎಂ ಬೊಮ್ಮಾಯಿ ಹೇಳಿದರು.

‘1857ರಲ್ಲಿ ನಡೆದ ಘಟನೆಯನ್ನು ನಾವು ಪ್ರಥಮ ಸ್ವಾತಂತ್ರ್ಯ ದಂಗೆ ಎಂದು ಕರೆಯುತ್ತೇವೆ. ಆದರೇ ಅದಕ್ಕೂ ಮುಂಚೆ 1824ರಲ್ಲಿಯೇ ಕನ್ನಡತಿ ಕಿತ್ತೂರು ರಾಣಿ ಚೆನ್ನಮ್ಮ, ಅವರ ಬಂಟ ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸೋಲಿನ ರುಚಿ ತೋರಿಸಿದ ಮೊದಲಿಗರಾಗಿದ್ದರು’ ಎಂದು ಸಿಎಂ ಬೊಮ್ಮಾಯಿ ಸ್ಮರಿಸಿದರು.

‘ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೋಟ್ಯಂತರ ಜನರು ಪಾಲ್ಗೊಂಡಿದ್ದರು. ಬದ್ಧತೆ ಹೋರಾಟದಿಂದ ಅತಿಶಕ್ತ ಬ್ರಿಟಿಷ್ ಸಾಮ್ರಾಜ್ಯವನ್ನು ಮಣಿಸಬಹುದು ಎಂಬುದನ್ನು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸಾಧಿಸಿ ತೋರಿಸಿದರು. ಬಹುತೇಕ ಹೋರಾಟಗಾರರು ಅನಾಮಧೇಯರಾಗಿಯೇ ಉಳಿದರು. ಅಂಥ ಅನಾಮಧೇಯ ಹೋರಾಟಗಾರರಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಮರ್ಪಿಸುತ್ತಿದ್ದೇನೆ’ ಎಂದು ಹೇಳಿದರು.

‘ಈ ದೇಶವನ್ನು ಕಟ್ಟಲು ನಮ್ಮ ಸುದೈವವೆಂಬಂತೆ ಪ್ರಧಾನಿ ಮೋದಿ ಅವರ ನಾಯಕತ್ವ ದೊರೆತಿದೆ. ಎಂಟು ವರ್ಷಗಳಲ್ಲಿ ಹಲವಾರು ಅಡೆತಡೆಗಳನ್ನು ಎದುರಿಸಿದರೂ, ದೇಶ ಹಲವಾರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಾ, ಇಡೀ ಜಗತ್ತಿಗೆ ಮಾದರಿಯಾಗಿದ್ದೇವೆ’ ಎಂದರು.

‘ಕರ್ನಾಟಕ ದೇಶದಲ್ಲಿಯೇ ವಿಶಿಷ್ಟವಾದ ರಾಜ್ಯವಾಗಿದೆ. ಎಲ್ಲ ತರಹದ ಸಂಪನ್ಮೂಲಗಳು ಹೇರಳವಾಗಿವೆ. ಹಲವಾರು ಕ್ಷೇತ್ರಗಳಲ್ಲಿ ಕರ್ನಾಟಕ ರಾಜ್ಯ ನಂಬರ್ 1 ಆಗಿದೆ. ದೇಶದ ಜಿ.ಡಿ.ಪಿ ಯಲ್ಲಿ ಶೇ.9ರಷ್ಟು ಕೊಡುಗೆ ನಮ್ಮದಾಗಿದೆ’ ಎಂದು ಬೊಮ್ಮಾಯಿ ತಿಳಿಸಿದರು.

‘ಈ ದೇಶವನ್ನು ಕಟ್ಟಲು ಕೂಲಿ ಕಾರ್ಮಿಕರಿಂದ ಹಿಡಿದು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳ ತನಕ ಎಲ್ಲರೂ ತಮ್ಮ ತಮ್ಮ ಕೊಡುಗೆ ನೀಡಿ, ದೇಶವನ್ನು ಕಟ್ಟಿದ್ದಾರೆ’ ಎಂದು ಸಿಎಂ ಬೊಮ್ಮಾಯಿ ಸ್ಮರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT