ಬುಧವಾರ, ಮೇ 18, 2022
28 °C

2–ಎ ಪಟ್ಟಿಗೆ ಪಂಚಮಸಾಲಿ ಸೇರ್ಪಡೆಗೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಿಂದುಳಿದ ವರ್ಗಗಳ ಪ್ರವರ್ಗ 2–ಎ ಪಟ್ಟಿಗೆ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಸೇರಿಸಬೇಕೆಂಬ ಬೇಡಿಕೆಯನ್ನು ಮಾನ್ಯ ಮಾಡಬಾರದು ಎಂದು ಒತ್ತಾಯಿಸಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟವು ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಲಿಖಿತ ಮನವಿ ಸಲ್ಲಿಸಿದೆ.

ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಮಾರ್ಚ್‌ 3ರಂದು ವಿಚಾರಣೆ ನಡೆಸಿದ್ದರು. ಲಿಖಿತ ಮನವಿ ಸಲ್ಲಿಸಲು ಕಾಲಾವಕಾಶ ನೀಡುವಂತೆ ಒಕ್ಕೂಟವು ಮಾಡಿದ್ದ ಮನವಿಯನ್ನು ಆಯೋಗ ಒಪ್ಪಿತ್ತು. ಆಯೋಗದ ಅಧ್ಯಕ್ಷರನ್ನು ಬುಧವಾರ ಭೇಟಿಮಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್‌. ವೆಂಕಟರಾಮಯ್ಯ, ಲಿಖಿತ ಮನವಿ ಸಲ್ಲಿಸಿದರು.

‘ಹಿಂದುಳಿದ ವರ್ಗಗಳ ಪ್ರವರ್ಗ 2–ಎ ಪಟ್ಟಿ 2002ರಿಂದಲೂ ಚಾಲ್ತಿಯಲ್ಲಿದೆ. ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಈ ಪಟ್ಟಿಗೆ ಸೇರಿಸಬೇಕೆಂಬ ಅರ್ಜಿಯನ್ನು ಪ್ರೊ. ರವಿವರ್ಮಕುಮಾರ್‌ ನೇತೃತ್ವದ ಆಯೋಗ ತಿರಸ್ಕರಿಸಿತ್ತು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಪ್ರಬಲವಾಗಿರುವ ಪಂಚಮಸಾಲಿ ಸಮುದಾಯವನ್ನು 2–ಎ ಪಟ್ಟಿಗೆ ಸೇರಿಸುವುದರಿಂದ ಈ ಪಟ್ಟಿಯಲ್ಲಿರುವ 102 ಜಾತಿಗಳ ಜನರಿಗೆ ಅನ್ಯಾಯವಾಗುತ್ತದೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪಂಚಮಸಾಲಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿ ಕುರಿತು ಅಧ್ಯಯನ ನಡೆಸದೇ ಆ ಜಾತಿಯನ್ನು ಹಿಂದುಳಿದ ವರ್ಗಗಳ 2–ಎ ಪಟ್ಟಿಗೆ ಸೇರಿಸುವುದು ಸರಿಯಲ್ಲ. ಪಂಚಮಸಾಲಿ ಸಮುದಾಯವನ್ನು ಈಗಾಗಲೇ 2–ಎ ಪಟ್ಟಿಯಲ್ಲಿರುವ ಯಾವುದೇ ಜಾತಿಗಳ ಜತೆಗೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಸ್ಪರ್ಧೆಯೂ ಅಸಾಧ್ಯ. ಆದ್ದರಿಂದ ಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.