ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು: ತುರ್ತು ವಿಚಾರಣೆಗೆ ನಕಾರ

Last Updated 15 ಮಾರ್ಚ್ 2023, 5:04 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋ‍ಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಲೋಕಾಯುಕ್ತ ಸಂಸ್ಥೆ ಸುಪ್ರೀಂಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದೆ.

ಲೋಕಾಯುಕ್ತದ ಪರವಾಗಿ ಹಾಜರಾದ ಹಿರಿಯ ವಕೀಲ ಬಸವಪ್ರಭು ಪಾಟೀಲ ಅವರು ತುರ್ತು ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದರು.

ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್‌ನ ತರಾತುರಿ ಆದೇಶ ತಪ್ಪು ಸಂದೇಶವನ್ನು ರವಾನಿಸಿದೆ ಎಂದು ಅವರು ಹೇಳಿದರು. ಪ್ರಕರಣದ ವಿಚಾರಣೆಯನ್ನು ಶುಕ್ರವಾರ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಮುಖ್ಯ ನ್ಯಾಯಮೂರ್ತಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಮಂಗಳವಾರ ಹಲವು ಪ್ರಕರಣಗಳ ವಿಚಾರಣೆ ನಡೆಸಬೇಕಿತ್ತು.

ಈ ವೇಳೆ ಪಾಟೀಲ ಅವರ ಕೋರಿಕೆಯ ಮೇರೆಗೆ ಮುಖ್ಯ ನ್ಯಾಯ ಮೂರ್ತಿ ಅವರು, ಈ ವಿಷಯವನ್ನು ನ್ಯಾಯಮೂರ್ತಿ ಸಂಜಯ್‌ ಕಿಶನ್‌ ಕೌಲ್‌ ಪೀಠದ ಮುಂದೆ ಉಲ್ಲೇಖಿಸಲು ಅನುಮತಿ ನೀಡಿದರು.

ಬಳಿಕ ಈ ವಿಚಾರವು ನ್ಯಾಯ ಮೂರ್ತಿ ಸಂಜಯ್‌ ಕಿಶನ್‌ ಕೌಲ್‌ ಪೀಠದ ಮುಂದೆ ಬಂತು. ಈ ಪ್ರಕರಣವನ್ನು ತುರ್ತಾಗಿ ಪಟ್ಟಿ ಮಾಡುವ ಅಗತ್ಯ ಏನಿದೆ ಎಂದು ನ್ಯಾಯಮೂರ್ತಿ ಪ್ರಶ್ನಿಸಿದರು.

ಬಸವಪ್ರಭು ಪಾಟೀಲ, ‘ಆರೋಪಿ ಶಾಸಕರಾಗಿದ್ದು, ಅವರ ಮನೆಯಿಂದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ಆಗ ಪೀಠ, ’ಇದು ಜಾಮೀನು ರದ್ದತಿಗೆ ಸಂಬಂಧಿಸಿದ ವಿಷಯ. ಹೈಕೋರ್ಟ್‌ ಈಗಾಗಲೇ ಪ್ರಕರಣದ ವಿಚಾರಣೆ ನಡೆಸಿದೆ. ವಿಷಯವನ್ನು ಸರಿಯಾದ ಸಮಯದಲ್ಲಿ ಪಟ್ಟಿ ಮಾಡಲಾಗುವುದು’ ಎಂದು ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT