ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಲ್ಲಿ ನಡೆದದ್ದು ಕಾಂಗ್ರೆಸ್‌ ಗಲಾಟೆ: ರಮೇಶ ಜಾರಕಿಹೊಳಿ

Last Updated 15 ಆಗಸ್ಟ್ 2020, 6:11 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ನಡೆದದ್ದು ಕಾಂಗ್ರೆಸ್ ಗಲಾಟೆ. ಅದಕ್ಕೂ ನಮ್ಮ ಸರ್ಕಾರ ಅಥವಾ ಬಿಜೆಪಿಗೆ ಸಂಬಂಧವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಲಭೆ ಬಗ್ಗೆ ಕಾಂಗ್ರೆಸ್‌ನವರು ಸತ್ಯಶೋಧನಾ ಸಮಿತಿ ರಚಿಸಿದ್ದಾರೆ. ನೋಡೋಣ ಅದೇನು ವರದಿ ಕೊಡುತ್ತಾರೋ?’ ಎಂದರು.

‘ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಂಭಾವಿತ. ಅವರಿಗೆ ಅನ್ಯಾಯ ಆಗಬಾರದು. ರಕ್ಷಣೆ ನೀಡಲು ಸರ್ಕಾರ ಬದ್ಧವಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಕರಣವನ್ನು ನಿಭಾಯಿಸುತ್ತಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮವಾಗಲಿದೆ’ ಎಂದು ತಿಳಿಸಿದರು.

‘ರಾಜ್ಯದ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದೊಂದಿಗೆ ಸಮನ್ವಯ ಮಾಡುತ್ತಿದ್ದೇವೆ. ಈ ಬಾರಿ ನೆರೆಯಿಂದ ಹೆಚ್ಚಿನ ಹಾನಿ ಆಗದಂತೆ ನೋಡಿಕೊಳ್ಳಲಾಗುವುದು’ ಎಂದರು.

‘ಇನ್ನೆರಡು ತಿಂಗಳು ನಾವೆಲ್ಲರೂ ಕೊರೊನಾದ ವಿರುದ್ಧ ಹೋರಾಡಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಈ ಸೋಂಕು ನಿವಾರಣೆಯಾದ ನಂತರ ಜಿಲ್ಲೆಯ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಲಾಗುವುದು. ಬೆಳಗಾವಿಯಲ್ಲಿ ಹುಬ್ಬಳ್ಳಿ ಮಾದರಿ ಕ್ರೀಡಾಂಗಣ ನಿರ್ಮಿಸಲು ಯೋಜಿಸಲಾಗಿದೆ’ ಎಂದು ಪ್ರತಿಕ್ರಿಯಿಸಿದರು.

‘ಹೋದ ವರ್ಷ ನೆರೆ ಹಾಗೂ ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಒಂದಷ್ಟು ಮಂದಿಗೆ ದಾಖಲೆಗಳ ಕೊರತೆಯಿಂದಾಗಿ ಪರಿಹಾರ ದೊರೆತಿಲ್ಲ. ಇದು ಗಮನಕ್ಕೆ ಬಂದಿದೆ. ತಾಂತ್ರಿಕ ಸಮಸ್ಯೆ ಪರಿಹರಿಸಿ, ಎಲ್ಲರಿಗೂ ಪರಿಹಾರ ಸಿಗುವಂತೆ ಮಾಡಲಾಗುವುದು’ ಎಂದು ತಿಳಿಸಿದರು.

‘ಖಾಸಗಿ ಆಸ್ಪತ್ರೆಗಳು ಕೋವಿಡ್‌ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನಷ್ಟೇ ಪಡೆಯಬೇಕು. ಇದನ್ನು ಉಲ್ಲಂಘಿಸಿದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT