ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕಿಂಗ್ ಪರೀಕ್ಷೆ: ಕನ್ನಡದಲ್ಲಿ ನಡೆಸಲು ಕಸಾಪ ಆಗ್ರಹ

Last Updated 30 ಅಕ್ಟೋಬರ್ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಈ ಸಂಬಂಧ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

‘ಕೇಂದ್ರ ಸರ್ಕಾರವು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸಿಬ್ಬಂದಿ ನೇಮಿಸಿಕೊಳ್ಳಲು ಸ್ಪರ್ಧಾತ್ಮಕ ಐಬಿಪಿಎಸ್ ಪ‍ರೀಕ್ಷೆ ನಡೆಸುತ್ತಿದೆ. 2021–22ನೇ ಸಾಲಿಗೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದ ಸಂವಿಧಾನದಲ್ಲಿ ಸಮಾನ ಸ್ಥಾನಮಾನ ಹೊಂದಿದ ಕನ್ನಡವೂ ಸೇರಿದಂತೆ ಎಲ್ಲ ಪ್ರಾದೇಶಿಕ ಭಾಷೆಗಳಿಗೆ ಹಾಗೂ ಭಾಷಿಕರಿಗೆ ತೀವ್ರ ಅನ್ಯಾಯವಾಗಲಿದೆ. ಹಿಂದಿ ಭಾಷಿಕರಿಗೆ ಅನುಕೂಲ ಮಾಡಿಕೊಡಲು ಈ ರೀತಿ ಮಾಡಲಾಗುತ್ತಿದೆ ಎಂಬ ನಿರ್ಧಾರಕ್ಕೆ ಬರಬೇಕಾಗುತ್ತದೆ’ ಎಂದು ತಿಳಿಸಿದ್ದಾರೆ.

‘ಈಗಾಗಲೇ ಕರ್ನಾಟಕದ ಬ್ಯಾಂಕುಗಳಲ್ಲಿ ಹಿಂದಿ ಭಾಷಿಕರು ತುಂಬಿಕೊಳ್ಳುತ್ತಿದ್ದಾರೆ. ಪ್ರಾದೇಶಿಕ ಭಾಷೆ ಬಲ್ಲವರೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನೇಮಕಗೊಳ್ಳಬೇಕು ಎಂಬ ನಿಯಮವನ್ನು ಗಾಳಿಗೆ ತೂರಿದಂತೆ ಆಗಿದೆ. ಹಾಗಾಗಿ ಈ ಬಗ್ಗೆ ಗಂಭೀರವಾಗಿ ಗಮನಹರಿಸಿ, ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಐಬಿಪಿಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆ: ಕನ್ನಡದಲ್ಲಿ ಅವಕಾಶಕ್ಕೆ ಆಗ್ರಹ

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸಿಬ್ಬಂದಿ ನೇಮಿಸಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಐಬಿಪಿಎಸ್ ಪ‍ರೀಕ್ಷೆಯನ್ನು ಕನ್ನಡದಲ್ಲಿಯೂ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಅವರು, ಪರೀಕ್ಷೆಯನ್ನು ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ನಡೆಸಲು ನಿರ್ಧರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘2014ಕ್ಕೂ ಮೊದಲು ಇದ್ದ ಐಬಿಪಿಎಸ್ ಅಧಿಸೂಚನೆಯನ್ನು ಮತ್ತೆ ಪರಿಗಣಿಸಿ, ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಿ ಎಂಬ ನನ್ನ ಮನವಿಯನ್ನು 2019ರ ಜು.4ರಂದು ಸಂಸತ್ ಅಧಿವೇಶನದಲ್ಲಿ ಪುರಸ್ಕರಿಸಲಾಗಿತ್ತು. ಪರಿಣಾಮ ಸ್ಥಳೀಯ ಗ್ರಾಮೀಣ ಬ್ಯಾಂಕ್‌ಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳಿಗೆ ಭಾಷೆಗಳ ಆಯ್ಕೆ ನೀಡಿ, 2019ರ ಆ.27ರಂದು ಅಧಿಕೃತ ಆದೇಶ ಹೊರಡಿಸಲಾಗಿತ್ತು’ ಎಂದು ತಿಳಿಸಿದ್ದಾರೆ.

‘ 2014ಕ್ಕಿಂತ ಮೊದಲು ಇದ್ದ ಅಧಿಸೂಚನೆ ಪ್ರಕಾರ ಗ್ರಾಮೀಣ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿವರೆಗೆ ಕಡ್ಡಾಯವಾಗಿ ಆಯಾ ರಾಜ್ಯದ ಅಧಿಕೃತ ಭಾಷೆಯನ್ನು ಒಂದು ವಿಷಯವನ್ನಾಗಿ ಓದಿರಬೇಕಿತ್ತು. ಅಂತಹ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿತ್ತು. ಇದೀಗ ಈ ‍ಪ್ರಕ್ರಿಯೆ ರಾಷ್ಟ್ರಮಟ್ಟದಲ್ಲಿ ಕೇಂದ್ರೀಕೃತವಾದ ಪರಿಣಾಮ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT