ಬಸವ ಕಲ್ಯಾಣ ಕ್ಷೇತ್ರ: ವಿಜಯೇಂದ್ರಗೆ ಟಿಕೆಟ್ ಸಾಧ್ಯತೆ

ಬೆಂಗಳೂರು: ಉಪಚುನಾವಣೆ ನಡೆಯಲಿರುವ ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಗ, ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಪ್ರಮುಖರ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗಿದೆ.
ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಡಿ.ವಿ ಸದಾನಂದಗೌಡ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಜಗದೀಶ ಶೆಟ್ಟರ್ ಸಮ್ಮುಖದಲ್ಲಿ ಪ್ರಮುಖರ ಸಮಿತಿ ಸಭೆ ಶನಿವಾರ ಬೆಳಿಗ್ಗೆ ನಡೆಯಿತು.
‘ಬಸವ ಕಲ್ಯಾಣ ಕ್ಷೇತ್ರದಲ್ಲಿ ಅನೇಕರು ಆಕಾಂಕ್ಷಿಗಳಿರುವ ಬಗ್ಗೆ ಚರ್ಚೆ ನಡೆಯಿತು. ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್‌ನ ಇತ್ತೀಚೆಗೆ ನಿಧನರಾದ ಬಿ. ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರನ್ನು ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಿಸಿದೆ. ಅನುಕಂಪದ ಅಲೆಯನ್ನು ಎದುರಿಸಿ ಪಕ್ಷಕ್ಕೆ ಗೆಲುವು ತಂದುಕೊಡಬೇಕಾದರೆ ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸುವುದು ಸೂಕ್ತ ಎಂದು ಕೆಲವು ಸದಸ್ಯರು ಅಭಿಪ್ರಾಯ ಪಟ್ಟರು’ ಎಂದು ಮೂಲಗಳು ಹೇಳಿವೆ.
‘ಮರಾಠಾ ನಿಗಮ ರಚನೆ ಮಾಡಿದ್ದರಿಂದಾಗಿ ಕ್ಷೇತ್ರದಲ್ಲಿ ಪ್ರಮುಖವಾಗಿರುವ ಈ ಸಮುದಾಯದವರ ಮತಗಳ ಜತೆ, ವೀರಶೈವ–ಲಿಂಗಾಯತ ಮತಗಳು ಬಿಜೆಪಿಗೆ ಬೀಳಲಿವೆ. ಇಂತಹ ಸಂದರ್ಭದಲ್ಲಿ ವಿಜಯೇಂದ್ರ ಅವರನ್ನು ಅಭ್ಯರ್ಥಿಯಾಗಿಸಿದರೆ ಗೆಲುವು ಸುಲಭವಾಗಬಹುದು ಎಂಬ ಅಭಿಪ್ರಾಯಯವೂ ವ್ಯಕ್ತವಾಯಿತು’ ಎಂದು ಮೂಲಗಳು ತಿಳಿಸಿವೆ.
ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪಗೌಡ ಪಾಟೀಲ ಅವರು ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದಾರೆ. ನಂಬಿಕೊಂಡು ಬಂದ ಅವರಿಗೆ ಟಿಕೆಟ್ ನೀಡಬೇಕು ಎಂದು ಯಡಿಯೂರಪ್ಪ ಸಭೆಯಲ್ಲಿ ಪ್ರಸ್ತಾಪಿಸಿದರು. ಅದಕ್ಕೆ ಸಹಮತ ವ್ಯಕ್ತಪಡಿಸಿದ ಸಭೆ, ಈ ಕ್ಷೇತ್ರದಿಂದ ಒಂದೇ ಹೆಸರು ಕಳಿಸಬೇಕೆಂಬ ನಿರ್ಣಯಕ್ಕೆ ಸಭೆ ಬಂದಿತು ಎಂದು ಗೊತ್ತಾಗಿದೆ.
ಸಭೆ ಬಳಿಕ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿ ಪ್ರತಾಪಗೌಡ ಪಾಟೀಲರಿಗೆ ಸ್ವಾಭಾವಿಕವಾಗಿ ನ್ಯಾಯ ಕೊಡಬೇಕಾಗಿದೆ. ಎರಡು ವರ್ಷದ ಅವರ ಅಜ್ಞಾತವಾಸಕ್ಕೆ ಮುಕ್ತಿ ಕೊಡಬೇಕಿದೆ’ ಎಂದು ಪ್ರತಿಪಾದಿಸಿದರು.
ಉಪ ಚುನಾವಣೆ ನಡೆಯಲಿರುವ ಎರಡು ವಿಧಾನಸಭೆ ಮತ್ತು ಒಂದು ಲೋಕಸಭೆ ಕ್ಷೇತ್ರಗಳ ಸಂಭವನೀಯ ಹಾಗೂ ಆಕಾಂಕ್ಷಿಗಳ ಬಗ್ಗೆ ಚರ್ಚೆ ನಡೆಯಿತು. ಪಕ್ಷದ ಸ್ಥಳೀಯ ನಾಯಕರು ಹಾಗೂ ಘಟಕಗಳ ಅಭಿಪ್ರಾಯ ಸಂಗ್ರಹಿಸಿ ಅಂತಿಮ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡುವ ಹೊಣೆಯನ್ನು ನಳಿನ್ ಕುಮಾರ್ ಕಟೀಲ್ ಅವರಿಗೆ ವಹಿಸಲಾಗಿದೆ ಎಂದು ರವಿ ವಿವರಿಸಿದರು.
‘ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾವಣೆಗೆ ಕ್ಷೇತ್ರಗಳ ಮೀಸಲಾತಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬ ಕುರಿತು ಚರ್ಚೆ ನಡೆಸಲಾಗಿದೆ’ ಎಂದರು.
* ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. ಭಾನುವಾರವೇ ಅಂತಿಮಪಟ್ಟಿ ಹೊರಬೀಳಲಿದೆ.
-ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.