ಬೆಂಗಳೂರು: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.
ಎಸ್. ಅಬ್ದುಲ್ ನಜೀರ್ ಅವರು ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
‘ನೂತನವಾಗಿ ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ, ನಂತರ ಸುಪ್ರಿಂ ಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ, ನಿವೃತ್ತರಾಗಿದ್ದರು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
‘ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ನಮ್ಮ ಮಂಗಳೂರಿನ ಬೆಳುವಾಯಿ ಗ್ರಾಮದ ಎಸ್.ಅಬ್ದುಲ್ ನಜೀರ್ ಅವರಿಗೆ ಅಭಿನಂದನೆಗಳು. ಇವರು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.
‘ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರಾಗಿ ಉತ್ತಮ ಸೇವೆ ಸಲ್ಲಿಸಿ, ಪ್ರಸ್ತುತ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿರುವ ಎಸ್. ಅಬ್ದುಲ್ ನಜೀರ್ ಅವರಿಗೆ ಹಾರ್ದಿಕ ಅಭಿನಂದನೆಗಳು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವೀಟ್ ಮಾಡಿದ್ದಾರೆ.
ನಜೀರ್ ಸೇರಿದಂತೆ ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ನಾಯಕರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ, ಸಿ.ಪಿ.ರಾಧಾಕೃಷ್ಣನ್, ಶಿವ ಪ್ರತಾಪ್ ಶುಕ್ಲಾ ಮತ್ತು ರಾಜಸ್ಥಾನದ ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರನ್ನು ಕ್ರಮವಾಗಿ ಸಿಕ್ಕಿಂ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಮಹಾರಾಷ್ಟ್ರಕ್ಕೆ ರಮೇಶ್ ಬೈಸ್, ಲಡಾಖ್‌ಗೆ ಲೆಫ್ಟಿನೆಂಟ್ ಗವರ್ನರ್ ಆಗಿ ಬಿ.ಡಿ ಮಿಶ್ರಾ ಅವರನ್ನು ನೇಮಿಸಲಾಗಿದೆ. ಈ ಹಿಂದೆ ರಮೇಶ್ ಬೈಸ್ ಅವರು ಜಾರ್ಖಂಡ್, ಬಿ.ಡಿ.ಮಿಶ್ರಾ ಅವರು ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿದ್ದರು.
ಅರುಣಾಚಲ ಪ್ರದೇಶಕ್ಕೆ ಕೆ.ಟಿ.ಪರ್ನಾಯಕ್ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.