ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ ಮೇಲ್ದಂಡೆ ಯೋಜನೆ: ಅಧಿಸೂಚನೆ ಶೀಘ್ರವೇ ಪ್ರಕಟ -ಬಸವರಾಜ ಬೊಮ್ಮಾಯಿ

Last Updated 22 ಡಿಸೆಂಬರ್ 2021, 19:43 IST
ಅಕ್ಷರ ಗಾತ್ರ

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅಧಿಸೂಚನೆ ಆದಷ್ಟು ಶೀಘ್ರ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ಬುಧವಾರ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಕುರಿತ ಚರ್ಚೆಯಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ನಲ್ಲಿ ಕೃಷ್ಣಾ ನದಿ ನೀರಿನ ತಕರಾರು ಕುರಿತು ವಿಚಾರಣೆ ನಡೆಯುತ್ತಿದ್ದು, ಮುಂದಿನ ವಿಚಾರಣೆ ಜನವರಿ 10 ಕ್ಕೆ ನಿಗದಿಯಾಗಿದೆ ಎಂದು ಅವರು ತಿಳಿಸಿದರು.

ಅಧಿಸೂಚನೆಯನ್ನು ಪ್ರಕಟಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಕರ್ನಾಟಕ ಮತ್ತು ಮಹಾರಾಷ್ಟ್ರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿವೆ. ಸ್ಪಷ್ಟನೆ ನೀಡಲು ಸುಪ್ರೀಂಕೋರ್ಟ್‌, ಕೇಂದ್ರ ಸರ್ಕಾರಕ್ಕೂ ಸೂಚಿಸಿದೆ ಎಂದರು.

ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನುತೆಲಂಗಾಣ ಹಿಂದಕ್ಕೆ ಪಡೆದಿದೆ. ಇದರಿಂದ ರಾಜ್ಯದ ಹಾದಿ ಸುಗಮವಾಗಿದೆ. ಕೇಂದ್ರವು ಆದಷ್ಟು ಬೇಗ ಸುಪ್ರೀಂಕೋರ್ಟ್‌ನಲ್ಲಿ ತನ್ನ ನಿಲುವು ಪ್ರಕಟಿಸಲಿದೆ ಎಂದೂ ಹೇಳಿದರು.

ಕಳಸಾ ಮತ್ತು ಬಂಡೂರಿ ಕುಡಿಯುವ ನೀರು ಪೂರೈಕೆ ಯೋಜನೆಗೆ 7.50 ಟಿಎಂಸಿ ಅಡಿ ನೀರಿನ ಅಗತ್ಯವಿದ್ದು, ಸದ್ಯಕ್ಕೆ 3.90 ಟಿಎಂಸಿ ಅಡಿ ನೀರು ಹಂಚಿಕೆಯಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಈ ಕುರಿತು ವ್ಯಾಜ್ಯ ಇದ್ದರೂ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ನೀಡಿದೆ. ಆದರೆ, 3.90 ಟಿಎಂಸಿ ಅಡಿ ಅಥವಾ 7.50 ಟಿಎಂಸಿ ಅಡಿ ನೀರಿನ ಬಳಕೆಗೆ ಯೋಜನೆ (ಡಿಪಿಎಆರ್‌) ರೂಪಿಸಬೇಕೋ ಎಂಬ ಗೊಂದಲ ನಿವಾರಿಸಿಕೊಳ್ಳಲು ಸ್ವಲ್ಪ ಕಾಲಾವಕಾಶ ಬೇಕಾಯಿತು. ಈಗ ಆ ಗೊಂದಲ ನಿವಾರಣೆಯಾಗಿದ್ದು, ಪರಿಷ್ಕೃತ ವಿಸ್ತೃತ ಯೋಜನಾ ವರದಿ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪರಿಸರ ಇಲಾಖೆಯ ಒಪ್ಪಿಗೆ ಸಿಗುವ ನಿರೀಕ್ಷೆಯಲ್ಲಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT