ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗೊಂದು ಅಂತರರಾಷ್ಟ್ರೀಯ ಕ್ರೀಡಾಂಗಣ: ಬಸವರಾಜ ಬೊಮ್ಮಾಯಿ

Last Updated 3 ಸೆಪ್ಟೆಂಬರ್ 2021, 20:02 IST
ಅಕ್ಷರ ಗಾತ್ರ

ಬೆಂಗಳೂರು: ಪ್ರತಿ ಜಿಲ್ಲೆಯಲ್ಲೂ ಒಂದು ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲಾಗುವುದು. ಈಗಾಗಲೇ ಇರುವ ಜಿಲ್ಲಾ ಕ್ರೀಡಾಂಗಣಗಳನ್ನು ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಟೋಕಿಯೊ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನದ ಚೆಕ್‌ ವಿತರಿಸಿ ಅವರು ಮಾತನಾಡಿದರು.

ಶಾಲೆಗಳ ಹಂತದಲ್ಲೇ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲಾಗುವುದು. ತಾಲ್ಲೂಕು ಮಟ್ಟದಲ್ಲೂ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುವುದು. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ರಾಜ್ಯದಿಂದ 75 ಕ್ರೀಡಾಪಟುಗಳನ್ನು ಕಳುಹಿಸುವ ಗುರಿ ಇದೆ. ಅದಕ್ಕೆ ಪೂರಕವಾಗಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಯೋಜನೆಗಳನ್ನು ಪ್ರಕಟಿಸಲಾಗುವುದು ಎಂದರು.

ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರು ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುತ್ತಿರುವುದು ಸ್ವಾಗತಾರ್ಹ ನಡೆ. ಇದು ರಾಜ್ಯಪಾಲರಲ್ಲಿರುವ ಕ್ರೀಡಾ ಸ್ಫೂರ್ತಿ ಮತ್ತು ಕ್ರೀಡಾ ಮನೋಭಾವಕ್ಕೆ ಸಾಕ್ಷಿ ಎಂದು ಹೇಳಿದರು.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳಾದ ಅದಿತಿ ಅಶೋಕ್‌ (ಗಾಲ್ಫ್‌), ಶ್ರೀಹರಿ ನಟರಾಜ್‌ (ಈಜು), ಫವಾದ್ ಮಿರ್ಜಾ (ಈಕ್ವೆಸ್ಟ್ರಿಯನ್‌) ಮತ್ತು ಭಾರತ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಅಂಕಿತಾ ಬಿ.ಎಸ್‌. ಅವರನ್ನು ಸನ್ಮಾನಿಸಿ, ತಲಾ ₹ 1 ಲಕ್ಷ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು.

ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ, ಕರ್ನಾಟಕ ಒಲಿಂಪಿಕ್‌ ಸಂಸ್ಥೆ ಅಧ್ಯಕ್ಷ ಕೆ. ಗೋವಿಂದರಾಜು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT