ಬೆಂಗಳೂರು: ಶಿರಾಡಿ ಘಾಟ್‌ನಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಆದಷ್ಟು ಬೇಗ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಕೇಂದ್ರ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಬುಧವಾರ ಗಡ್ಕರಿ ಅವರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ನಾಲ್ಕು ಪಥಗಳ ಹೆದ್ದಾರಿ ಕಾಮಗಾರಿ ಚುರುಕುಗೊಳಿಸಬೇಕು. ಚತುಷ್ಪಥ ನಿರ್ಮಾಣ ಪೂರ್ಣಗೊಳಿಸುವುದು ಆದ್ಯತೆಯಾಗಿದೆ. ಸುರಂಗ ಮಾರ್ಗ ನಿರ್ಮಿಸುವ ವಿಚಾರದಲ್ಲಿ ಕನ್ಸಲ್ಟಂಟ್‌ಗಳ ಜತೆ ಮಾತುಕತೆ ನಡೆದಿದೆ. ಅಲ್ಲದೆ, ರಾಜ್ಯದ ನಾಲ್ಕು ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಪ್ರಸ್ತಾವನೆಯೊಂದನ್ನು ನೀಡಿದ್ದೇವೆ ಎಂದರು.
ವಿಜಯಪುರ–ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ 0 ರಿಂದ 80 ಕಿ.ಮೀವರೆಗೆ ಅಭಿವೃದ್ಧಿಪಡಿಸುವ ಕಾಮಗಾರಿ ನಡೆಯುತ್ತಿದ್ದು, 80 ನೇ ಕಿ.ಮೀ ನಿಂದ 168.90 ಕಿ.ಮೀ.ವರೆಗೆ ಅಭಿವೃದ್ಧಿ ಕಾರ್ಯವನ್ನು ಮುಂದುವರೆಸಲು ಗಡ್ಕರಿಯವರು ಒಪ್ಪಿಗೆ ನೀಡಿದ್ದಾರೆ. ಇವೆಲ್ಲವನ್ನೂ ಭಾರತ್‌ಮಾಲಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಮಳೆ ಮತ್ತು ಭೂಕುಸಿತದಿಂದ ವಿವಿಧ ಘಾಟ್ ರಸ್ತೆಗಳು ಹಾಳಾಗಿದ್ದು, ಇವುಗಳನ್ನು ಕಾಯಂ ಆಗಿ ಸರಿಪಡಿಸಲು ₹184.85 ಕೋಟಿಯ ಅಗತ್ಯವಿದೆ ಎಂದು ಮನವಿ ಮಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.