ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18,414 ವಿದ್ಯಾರ್ಥಿಗಳಿಗೆ ದ್ವಿತೀಯ ಪಿ.ಯು ಪರೀಕ್ಷೆ: ಸಚಿವ ಬಿ.ಸಿ. ನಾಗೇಶ್‌

Last Updated 13 ಆಗಸ್ಟ್ 2021, 9:44 IST
ಅಕ್ಷರ ಗಾತ್ರ

ಬೆಂಗಳೂರು: ಸರಾಸರಿ ಆಧಾರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿರುವ ಫಲಿತಾಂಶವನ್ನು ತಿರಸ್ಕರಿಸಿರುವ 18,414 ವಿದ್ಯಾರ್ಥಿಗಳು ಆಗಸ್ಟ್‌ 19ರಿಂದ ಸೆಪ್ಟೆಂಬರ್‌ 3ರವರೆಗೆ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ಪರೀಕ್ಷಾ ಸಿದ್ಧತೆ ಕುರಿತು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶುಕ್ರವಾರ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼ5,546 ಕಾಲೇಜುಗಳ 18,414 ವಿದ್ಯಾರ್ಥಿಗಳು ಫಲಿತಾಂಶ ತಿರಸ್ಕರಿಸಿದ್ದಾರೆ. ಅವರಿಗೆ 187 ಕೇಂದ್ರಗಳಲ್ಲಿ ವಾರ್ಷಿಕ ಪರೀಕ್ಷೆ ನಡೆಸಲಾಗುವುದುʼ ಎಂದರು.

ಪರೀಕ್ಷಾ ಸಿದ್ಧತೆಗಳನ್ನು ಇದೇ 17ರೊಳಗೆ ಪೂರ್ಣಗೊಳಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೂ ನಿರ್ದೇಶನ ನೀಡಲಾಗಿದೆ. ದ್ವಿತೀಯ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್‌ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌, ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕಿ ಆರ್‌. ಸ್ನೇಹಲ್‌ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ಹಿರಿಯ ಅಧಿಕಾರಿಗಳ ಸಭೆಗೂ ಮೊದಲು ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದ ಸಚಿವರು, ದ್ವಿತೀಯ ಪಿಯುಸಿ ಪರೀಕ್ಷೆಯ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT