ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೋವಿ ಅಭಿವೃದ್ಧಿ ನಿಗಮದ ನಾಗರಾಜಪ್ಪ ನ್ಯಾಯಾಂಗ ಬಂಧನಕ್ಕೆ

Last Updated 2 ಜುಲೈ 2022, 19:49 IST
ಅಕ್ಷರ ಗಾತ್ರ

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ವಿವಿಧ ಯೋಜನೆಗಳ ಕೋಟ್ಯಂತರ ರೂಪಾಯಿ ಹಣವನ್ನು ದುರ್ಬಳಕೆ ಮಾಡಿರುವ ಆರೋಪ ಎದುರಿಸುತ್ತಿರುವ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಕೆ. ನಾಗರಾಜಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬೆಂಗಳೂರು ನಗರ ಘಟಕದ ಅಧಿಕಾರಿಗಳು ಶುಕ್ರವಾರ ಸಂಜೆ ಬಂಧಿಸಿದ್ದರು. ತನಿಖಾ ತಂಡ ಸೆರೆ ಹಿಡಿಯುತ್ತಿದ್ದಂತೆಯೇ ಎದೆ ನೋವು ಎಂದು ನಾಗರಾಜಪ್ಪ ಗೋಳಾಟ ಆರಂಭಿಸಿದ್ದರು. ತಕ್ಷಣ ಅವರನ್ನು ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರ ಶಿಫಾರಸಿನಂತೆ ಜಯದೇವ ಹೃದ್ರೋಗ ಸಂಸ್ಥೆಗೆ ಕರೆದೊಯ್ಯಲಾಗಿತ್ತು.

‘ಶುಕ್ರವಾರ ರಾತ್ರಿಯಿಂದ ಜಯದೇವ ಹೃದ್ರೋಗ ಸಂಸ್ಥೆಯ ವೈದ್ಯರು ಆರೋಪಿಯ ಆರೋಗ್ಯ ತಪಾಸಣೆ ನಡೆಸಿದ್ದರು. ಶನಿವಾರ ಬೆಳಿಗ್ಗೆಯಿಂದ ‍ಪುನಃ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಪಿಯ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ವರದಿ ನೀಡಿದ ವೈದ್ಯರು, ನಾಗರಾಜಪ್ಪ ಅವರನ್ನು ಒಳರೋಗಿ ವಿಭಾಗದಿಂದ ಬಿಡುಗಡೆ ಮಾಡಿದರು. ಬಳಿಕ ವೈದ್ಯಕೀಯ ವರದಿಯೊಂದಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು’ ಎಂದು ಮೂಲಗಳು ತಿಳಿಸಿವೆ.

ವೈದ್ಯಕೀಯ ವರದಿಯನ್ನು ಪರಿಶೀಲಿಸಿದ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತು. ‘ಅಗತ್ಯ ಕಂಡುಬಂದಲ್ಲಿ ಆರೋಪಿಗೆ ಕಾರಾಗೃಹದ ಒಳಗಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು’ ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯದಿಂದ ಕರೆದೊಯ್ದ ಎಸಿಬಿ ಅಧಿಕಾರಿಗಳು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಶಕ್ಕೆ ಒಪ್ಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT