ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸರ್ಕಾರಕ್ಕೆ ಸರ್ಕಾರಿ ಶಾಲೆಗಳನ್ನು ನಡೆಸುವ ಯೋಗ್ಯತೆ ಇಲ್ಲ: ಡಿಕೆಶಿ

Last Updated 21 ಅಕ್ಟೋಬರ್ 2022, 11:24 IST
ಅಕ್ಷರ ಗಾತ್ರ

ಬೆಂಗಳೂರು: ಖರ್ಚು ವೆಚ್ಚಗಳನ್ನು ಸರಿದೂಗಿಸಲು ಸರ್ಕಾರಿ ಶಾಲೆ ಮಕ್ಕಳು ಪ್ರತಿ ತಿಂಗಳು ಪೋಷಕರಿಂದ ₹100 ಸಂಗ್ರಹಿಸಿ ಶಾಲಾಭಿವೃದ್ಧಿ - ಮೇಲುಸ್ತುವಾರಿ ಸಮಿತಿಗಳಿಗೆ ನೀಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯು ಅನ್ಯಾಯದ ಪರಮಾವಧಿ. ರಾಜ್ಯ ಬಿಜೆಪಿಗೆ ಸರ್ಕಾರಿ ಶಾಲೆಗಳನ್ನು ನಡೆಸುವ ಯೋಗ್ಯತೆ ಇಲ್ಲ ಎಂಬುದನ್ನು ಈ ನಿರ್ಧಾರ ದೃಢಪಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯದ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅಗತ್ಯವಿರುವ ಖರ್ಚುವೆಚ್ಚ ಗಳಿಗಾಗಿ ಮಕ್ಕಳ ಪೋಷಕರಿಂದ ದೇಣಿಗೆ ರೂಪದಲ್ಲಿ ಪ್ರತಿ ತಿಂಗಳು ₹ 100 ಸಂಗ್ರಹಿಸಲು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ (ಎಸ್‌ಡಿಎಂಸಿ) ಅನುಮತಿ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ ಈ ನಡೆ ಶಿಕ್ಷಣದ ಮೂಲಭೂತ ಹಕ್ಕಿನ ಉಲ್ಲಂಘನೆ, ಕಡ್ಡಾಯ ಶಿಕ್ಷಣ ಹಕ್ಕು ಮೊಟಕುಗೊಳಿಸುವ ಹುನ್ನಾರ ಎಂದು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.‌

ಈ ಬಗ್ಗೆ ಪ್ರಜಾವಾಣಿಯು ಶುಕ್ರವಾರದ ಸಂಚಿಕೆಯಲ್ಲಿ ‘ಸರ್ಕಾರಿ ಶಾಲೆ: ತಿಂಗಳಿಗೆ ₹100 ದೇಣಿಗೆ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.

ಪತ್ರಿಕಾ ವರದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಡಿ.ಕೆ ಶಿವಕುಮಾರ್‌ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‌

‘ಕೋವಿಡ್‌ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಸಾವಿರಾರು ಸರ್ಕಾರಿ ಶಾಲೆಗಳು ದುಸ್ಥಿತಿಯಲ್ಲಿದ್ದು, ಪೋಷಕರು ಆರ್ಥಿಕ ಸಂಕಷ್ಟದಲ್ಲಿರುವಾಗ ಶಾಲೆಯ ಖರ್ಚು ವೆಚ್ಚಗಳನ್ನು ಅವರ ಮೇಲೆ ಹೊರಿಸುವುದು ಯಾವ ನ್ಯಾಯ? ಸಂವಿಧಾನ ವಿಧಿ 21ಎ ಹಾಗೂ ಶಿಕ್ಷಣದ ಹಕ್ಕಿನ ನಿಯಮಗಳನ್ನೂ ಉಲ್ಲಂಘಿಸಿ ಈ ರೀತಿಯ ಅವೈಜ್ಞಾನಿಕ ನಿರ್ಧಾರ ಹೊರಡಿಸಿರುವುದು ಸರಿಯಲ್ಲ’ ಎಂದಿದ್ದಾರೆ.

‘ಸರ್ಕಾರ ಹೊರಡಿಸಿರುವ ಸುತ್ತೋಲೆಯು ಸರ್ಕಾರಿ ಶಾಲೆಗಳನ್ನು ಶಾಶ್ವತವಾಗಿ ಮುಚ್ಚಿಸುವ ಒಂದು ಹುನ್ನಾರ. ಸರ್ಕಾರಿ ಶಾಲೆ ಮಕ್ಕಳಿಗೆ ಅನ್ಯಾಯವಾಗುವುದನ್ನು ಕಾಂಗ್ರೆಸ್‌ ಪಕ್ಷವು ಎಂದಿಗೂ ಸಹಿಸುವುದಿಲ್ಲ. 2023ಕ್ಕೆ ಅಧಿಕಾರಕ್ಕೆ ಬಂದನಂತರ ಇಂಥ ಶಿಕ್ಷಣ ವಿರೋಧಿ ನೀತಿಗಳನ್ನು ಹಿಂಪಡೆಯುತ್ತೇವೆ’ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT