ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ: ರಾಜ್ಯ ಗೆಲ್ಲಲು ಗುಜರಾತ್‌, ಉ.ಪ್ರ ಮಾದರಿ ಪ್ರಯೋಗ –ಸಿ.ಟಿ.ರವಿ

ಪ್ರತಿ ಜಿಲ್ಲೆಯಲ್ಲೂ ಫಲಾನುಭವಿಗಳ ಸಮಾವೇಶ * 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ
Last Updated 3 ಫೆಬ್ರುವರಿ 2023, 19:31 IST
ಅಕ್ಷರ ಗಾತ್ರ

ಬೆಂಗಳೂರು: ಪ್ರತಿ ಜಿಲ್ಲೆಯಲ್ಲೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳ ಸಮಾವೇಶಗಳು ಮತ್ತು ನಾಲ್ಕು ತಂಡಗಳಲ್ಲಿ ವಿಜಯಸಂಕಲ್ಪ ಯಾತ್ರೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.

ಚುನಾವಣೆಯಲ್ಲಿ ಗೆಲ್ಲಲೇಬೇಕಾದರೆ ಮೊದಲಿಗೆ ಫಲಾನುಭವಿಗಳ ಮನಸ್ಸು ಗೆಲ್ಲಬೇಕಾಗಿದೆ. ಆದ್ದರಿಂದ ಫಲಾನುಭವಿಗಳ ಜತೆ ನಿಕಟ ಸಂಪರ್ಕ ಹೊಂದಲು ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ನಡೆಸಬೇಕು ಎಂದು ಶುಕ್ರವಾರ ರಾತ್ರಿ ನಡೆದ ಪ್ರಮುಖ ನಾಯಕರ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸುದ್ದಿಗಾರರಿಗೆ ತಿಳಿಸಿದರು.

ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳ ಚುನಾವಣೆಗಳ ಸಂದರ್ಭದಲ್ಲೂ ಫಲಾನುಭವಿಗಳ ಸಮಾವೇಶಗಳನ್ನು ವ್ಯಾಪಕವಾಗಿ ನಡೆಸಲಾಗಿತ್ತು. ಅದರಿಂದಾಗಿ ಆ ರಾಜ್ಯಗಳ ಚುನಾವಣೆಗಳಲ್ಲಿ ಭರ್ಜರಿ ಗೆಲುವು ಪಡೆಯಲು ಸಾಧ್ಯವಾಯಿತು. ಅದೇ ಪ್ರಯೋಗವನ್ನು ಇಲ್ಲೂ ನಡೆಸಲಾಗುವುದು ಎಂದು ಹೇಳಿದರು.

‘ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಒಂದಲ್ಲ ಒಂದು ಕಾರ್ಯಕ್ರಮಗಳ ಫಲಾನುಭವಿಗಳು ಶೇ 70‌ ರಷ್ಟು ಇದ್ದಾರೆ. ಅವರನ್ನು ಬಿಜೆಪಿ ಮತದಾರರನ್ನಾಗಿ ಪರಿವರ್ತಿಸಲು ಪ್ರಯತ್ನ ಹಾಕುತ್ತೇವೆ’ ಎಂದರು.

ಅಲ್ಲದೆ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಮತ್ತು ದಕ್ಷಿಣ ಭಾಗದಲ್ಲಿ ಎರಡು ಸೇರಿ ಒಟ್ಟು ನಾಲ್ಕು ಯಾತ್ರೆಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದ್ದು, ಈ ಯಾತ್ರೆಯ ರೂಪು ರೇಷೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಯಾತ್ರೆಗಳ ಮಹಾ ಸಂಗಮ ದಾವಣಗೆರೆಯಲ್ಲಿ ನಡೆಯಲಿದೆ. ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದು. ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಇದೇ ತಿಂಗಳು ಎರಡರಿಂದ ಮೂರು ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಅದರ ತಯಾರಿಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದರು. ರವಿ ತಿಳಿಸಿದರು.

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ಸಿ.ಎಂ ಬಸವರಾಜ ಬೊಮ್ಮಾಯಿ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಸೇರಿ ಪ್ರಮುಖ ನಾಯಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT