ಸೋಮವಾರ, ಮೇ 23, 2022
21 °C
ದೊರೆಯದ ಅನುಮತಿ; ಆಕಾಂಕ್ಷಿಗಳಲ್ಲಿ ನಿರಾಸೆ

ಬೊಮ್ಮಾಯಿ ಸಂಪುಟ ಪುನರ್ ರಚನೆಗೆ ಬಿಜೆಪಿ ವರಿಷ್ಠರ ನಿರಾಸಕ್ತಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯ ಸಚಿವ ಸಂಪುಟದ ವಿಸ್ತರಣೆ ಅಥವಾ ಪುನರ್ ರಚನೆ ಕುರಿತು ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ರಾತ್ರಿ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸಿದರಾದರೂ ಈ ಸಂಬಂಧ ಒಪ್ಪಿಗೆ ದೊರೆಯಲಿಲ್ಲ.

ಕೆಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಪ್ರಸ್ತಾವಕ್ಕೆ ತೆರೆ ಬೀಳುವ ಸಾಧ್ಯತೆಗಳು ಸದ್ಯಕ್ಕೆ ಗೋಚರಿಸುತ್ತಿಲ್ಲ ಎಂದು ಪಕ್ಷದ ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಪಕ್ಷದ ಕೇಂದ್ರ ಕಚೇರಿಯಲ್ಲಿ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಬೊಮ್ಮಾಯಿ ಭೇಟಿ ಮಾಡಿದರಾದರೂ, ಕೇವಲ 5 ನಿಮಿಷಗಳಲ್ಲಿ ಚರ್ಚೆ ಮುಕ್ತಾಯವಾಯಿತು.

ಸಂಪುಟದ ಕುರಿತು ಇತರ ಮುಖಂಡರೊಂದಿಗೆ ಚರ್ಚೆ ನಡೆಸದ ಹೊರತು ಯಾವುದೇ ರೀತಿಯ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಈ ಭೇಟಿಯ ವೇಳೆ ನಡ್ಡಾ ತಿಳಿಸಿದ್ದಾಗಿ ಮೂಲಗಳು ಹೇಳಿವೆ.

ಏಪ್ರಿಲ್‌ 3ನೇ ವಾರ ಹೊಸಪೇಟೆಯಲ್ಲಿ ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯ ನಂತರವೇ ಸಂಪುಟ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾತ್ರಿ 8.30ಕ್ಕೆ ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ, ಅವರ ಮೂಲಕವೇ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಭೇಟಿಗೆ ನಡೆಸಿದ ಯತ್ನ ಫಲ ನೀಡಲಿಲ್ಲ. ಈ ಸಂಬಂಧ ಪ್ರತಿಕ್ರಿಯೆಗೆ ಬೊಮ್ಮಾಯಿ ಲಭ್ಯವಾಗಲಿಲ್ಲ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ ನಡೆದ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಬೊಮ್ಮಾಯಿ, ಸಂಪುಟ ಕುರಿತು ಚರ್ಚಿಸುವ ನಿಟ್ಟಿನಲ್ಲಿ ನಡ್ಡಾ ಅವರ ಸಮಯಾವಕಾಶ ಕೊರಿದ್ದರು.

ಆಕಾಂಕ್ಷಿಗಳ ಒತ್ತಡ: ಕಳೆದ ಎರಡು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿನ ಖಾಸಗಿ ಹೋಟೆಲ್‌ಗಳಲ್ಲಿ ಬೀಡುಬಿಟ್ಟಿರುವ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡು, ತಮ್ಮನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ವರಿಷ್ಠರ ಮೇಲೆ ಒತ್ತಡ ಹೇರುತ್ತಿದೆ.

ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಆರ್‌.ಶಂಕರ್‌, ಅರವಿಂದ ಬೆಲ್ಲದ್‌, ಬಸನಗೌಡ ಪಾಟೀಲ ಯತ್ನಾಳ, ಎಂ.ಪಿ. ರೇಣುಕಾಚಾರ್ಯ, ಶಿವನಗೌಡ ನಾಯಕ್, ರಾಜು ಗೌಡ ಮತ್ತಿತರರು ದೆಹಲಿಗೆ ದೌಡಾಯಿಸಿದ್ದು, ಪಕ್ಷದ ಮುಖಂಡರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಬೇಡಿಕೆ ಸಲ್ಲಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಒಂದು ವರ್ಷ ಮಾತ್ರ ಬಾಕಿ ಇದ್ದು, ಕೂಡಲೇ ಸಂಪುಟವನ್ನು ವಿಸ್ತರಿಸಬೇಕು, ಇಲ್ಲವೇ ಪುನರ್‌ ರಚಿಸುವ ಮೂಲಕ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸುತ್ತಿದ್ದಾರೆ.

ಸಂಪುಟ ಉಪಸಮಿತಿ ರಚನೆ
ಬೆಂಗಳೂರು:
ಅಕ್ರಮ ಗಣಿಗಾರಿಕೆಗಳ ಕುರಿತು ಲೋಕಾಯುಕ್ತದಲ್ಲಿ ಅಸ್ತಿತ್ವದಲ್ಲಿರುವ ವಿಶೇಷ ತನಿಖಾ ತಂಡದ ಕಾರ್ಯಾವಧಿ ಮುಂದುವರೆಸುವ ಅಥವಾ ಮುಕ್ತಾಯಗೊಳಿಸುವ ಬಗ್ಗೆ ಪರಾಮರ್ಶೆ ನಡೆಸಲು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಲಾಗಿದೆ.

ಈ ಉಪಸಮಿತಿಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಮೀನುಗಾರಿಕೆ ಸಚಿವ ಎಸ್‌.ಅಂಗಾರ, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತ ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ಸದಸ್ಯರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು