ಶುಕ್ರವಾರ, ಜನವರಿ 22, 2021
20 °C
ಶಾಸಕರಿಗೆ ಪ್ರಮುಖ ನಾಯಕರ ಸಮಿತಿ ಸಭೆ ಎಚ್ಚರಿಕೆ

‘ಬಾಯಿಗೆ ಬಂದಂತೆ ಮಾತನಾಡಿದರೆ ಶಿಸ್ತು ಕ್ರಮ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ:‘ಸಚಿವ ಸಂಪುಟ‌ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಶಾಸಕರು ಅಥವಾ ಮುಖಂಡರು  ಬಾಯಿಗೆ ಬಂದಂತೆ ಬಹಿರಂಗವಾಗಿ ಮಾತನಾಡುವುದನ್ನು ಪಕ್ಷ‌ ಗಂಭೀರವಾಗಿ ಪರಿಗಣಿಸುತ್ತದೆ. ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದರು.

ಇಲ್ಲಿ ಶುಕ್ರವಾರ ರಾತ್ರಿ ಎರಡು ತಾಸಿಗೂ ಹೆಚ್ಚು ಸಮಯ ನಡೆದ ಬಿಜೆಪಿ ಪ್ರಮುಖ ನಾಯಕರ ಸಮಿತಿಯ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆ ಆಗಿಲ್ಲ. ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರಿಗೆ ಇರುವ ಪರಮಾಧಿಕಾರ. ಈ ವಿಷಯದಲ್ಲಿ ಅವರು ಕೇಂದ್ರದ ನಾಯಕರೊಂದಿಗೆ ‌ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಆದ್ದರಿಂದ ಶಾಸಕರು ಬಹಿರಂಗ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.

‘ಯಾರು ಮಂತ್ರಿ ಆಗಬೇಕು ಎನ್ನುವ ಬಗ್ಗೆಯೂ ಚರ್ಚೆಯಾಗಿಲ್ಲ. ವಿಸ್ತರಣೆ ಹಾಗೂ ದಿನಾಂಕ ನಿಗದಿ ಮಾಡುವ ಅಧಿಕಾರವೂ  ಮುಖ್ಯಮಂತ್ರಿಯವರಿಗಿದೆ’ ಎಂದರು.

ಇವತ್ತಿನ ಸಭೆ ಮುಖ್ಯಮಂತ್ರಿಯವರಿಗೆ ಆ ಅಧಿಕಾರ ಕೊಟ್ಟಿದೆಯೇ ಎಂಬ ಪ್ರಶ್ನೆಗೆ, ‘ಈಗಾಗಲೇ ಅವರಿಗೆ ಆ ಅಧಿಕಾರ ಇದೆ’ ಎಂದು ಪ್ರತಿಕ್ರಿಯಿಸಿದರು.

ಇಂದಿನ ಸಭೆಯಲ್ಲಿ ಪ್ರಮುಖವಾಗಿ ನಾಲ್ಕಾರು ವಿಷಯಗಳ ಬಗ್ಗೆ ಚರ್ಚೆಯಾಯಿತು. ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಕ್ಷದ ಉಸ್ತುವಾರಿಗಳು ಚುನಾವಣೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಬಗ್ಗೆ ಕಾರ್ಯತಂತ್ರ ರೂಪಿಸಲು ಚರ್ಚಿಸಲಾಯಿತು ಎಂದು ಹೇಳಿದರು.

ಡಿ.5 ರಂದು ನಡೆಯುವ ರಾಜ್ಯ ಕಾರ್ಯಕಾರಿಣಿಯಲ್ಲಿ ಎರಡು ಮಹತ್ವದ ವಿಷಯಗಳ ಬಗ್ಗೆ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಲಾಗುವುದು. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ‘ಲವ್ ಜಿಹಾದ್’ ತಡೆಗೆ ಕಾಯ್ದೆ ಮಾಡುವಂತೆ ನಿರ್ಣಯಿಸಲಾಗುವುದು ಎಂದು ತಿಳಿಸಿದರು.

ಸಭೆ ಮುಗಿಸಿ ಹೊರ ಬಂದ ಯಡಿಯೂರಪ್ಪ ಕೆಲಕಾಲ ಏಕಾಂಗಿಯಾಗಿ ನಿಂತಿದ್ದರು. ಅವರ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು