ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ವರ್ಚಸ್ಸು ಹೆಚ್ಚಿಸಿ: ಅಮಿತ್‌ ಶಾ ಸೂಚನೆ

ಬಿಜೆಪಿ ಪ್ರಮುಖರ ಸಮಿತಿ ಸಭೆ
Last Updated 16 ಜನವರಿ 2021, 19:33 IST
ಅಕ್ಷರ ಗಾತ್ರ

ಬೆಂಗಳೂರು: ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲು ಅನುಕೂಲವಾಗುವಂತೆ ಪಕ್ಷ ಮತ್ತು ಸರ್ಕಾರದ ವರ್ಚಸ್ಸು ಹೆಚ್ಚಿಸಲು ಕೆಲಸ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಜೆಪಿಯ ರಾಜ್ಯ ಘಟಕಕ್ಕೆ ಸೂಚನೆ ನೀಡಿದ್ದಾರೆ.

ರಾಜ್ಯ ಪ್ರವಾಸ ಕೈಗೊಂಡಿರುವ ಶಾ, ಶನಿವಾರ ರಾತ್ರಿ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿಯ ಸಭೆ ನಡೆಸಿದರು. ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದ್ದು, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳು ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲೂ ಗೆಲವು ಸಾಧಿಸಲು ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

ಕೋವಿಡ್‌ ಅವಧಿಯಲ್ಲಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದ್ದರೂ ವಿರೋಧ ಪಕ್ಷಗಳು ಟೀಕಿಸುತ್ತಿವೆ. ಇದರಿಂದ ಜನರಲ್ಲಿ ತಪ್ಪು ಅಭಿಪ್ರಾಯ ಮೂಡುವ ಸಾಧ್ಯತೆ ಇದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷಕ್ಕೆಜನಬೆಂಬಲ ವ್ಯಕ್ತವಾಗಿದೆ. ಅದನ್ನು ಮತ್ತಷ್ಟು ಹೆಚ್ಚಿಸಲು ಪೂರಕವಾಗಿ ಎಲ್ಲ ಸಚಿವರು ಜಿಲ್ಲೆಗಳಿಗೆ ತೆರಳಿ ಗ್ರಾಮೀಣ ಪ್ರದೇಶದ ಜನರ ಅಹವಾಲು ಆಲಿಸಲು ಮುಂದಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳ ಕುರಿತು ಅರಿವು ಮೂಡಿಸಬೇಕು ಎಂದು ಶಾ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಪ್ರಲ್ಹಾದ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಸಚಿವರಾದ ಜಗದೀಶ ಶೆಟ್ಟರ್, ಆರ್. ಅಶೋಕ, ಅರವಿಂದ ಲಿಂಬಾವಳಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‌ ಕುಮಾರ್‌ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT