ಬುಧವಾರ, ಮಾರ್ಚ್ 22, 2023
32 °C

ಬಿಜೆಪಿ ನವಶಕ್ತಿ ಸಮಾವೇಶ: ಜೆ.ಪಿ.ನಡ್ಡಾ, ಅರ್ಜುನ್‌ ಮುಂಡಾ ಭಾಗಿ – ಹವಾಲ್ದಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಎಸ್‌ಟಿ ಮೋರ್ಚಾದ ‘ನವಶಕ್ತಿ ಸಮಾವೇಶ’ ಇದೇ 20 ರಂದು ಬಳ್ಳಾರಿಯಲ್ಲಿ ನಡೆಯಲಿದೆ ಎಂದು ಎಸ್‌.ಟಿ ಮೋರ್ಚಾ ರಾಜ್ಯ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್‌ ಅವರು ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ಕಾರ್ಯಕ್ರಮವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸಲಿದ್ದು, ಸಮಾವೇಶದಲ್ಲಿ 10 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

ಈ ಸಮಾವೇಶದಲ್ಲಿ ಎಲ್ಲ ಎಸ್‌ಟಿ ಸಮುದಾಯದವರು ಭಾಗವಹಿಸಿ ಮೀಸಲಾತಿ ಹೆಚ್ಚಳಕ್ಕೆ ಸಂತಸ ಸೂಚಿಸಿ, ವಿಜಯೋತ್ಸವ ಆಚರಿಸಲಿದ್ದಾರೆ. 68 ಕ್ಕೂ ಹೆಚ್ಚು ಬುಡಕಟ್ಟು ಕಲಾ ತಂಡಗಳು ಪಾಲ್ಗೊಳ್ಳಲಿವೆ. ಕೊಪ್ಪಳ, ರಾಯಚೂರು, ಯಾದಗಿರಿ, ಚಿತ್ರದುರ್ಗ, ಬಳ್ಳಾರಿ, ಹಳೆ ಮೈಸೂರು, ಮಧ್ಯಕರ್ನಾಟಕದ ಸುತ್ತಲಿನ ಪ್ರದೇಶಗಳಿಂದ ಆರು ಲಕ್ಷ ಜನರನ್ನು ನಿರೀಕ್ಷಿಸಲಾಗಿದೆ. ರಾಜ್ಯದ ಇತರ ಜಿಲ್ಲೆಗಳಿಂದ 4 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕಾಗಿ 6,200 ಬಸ್‌ ವ್ಯವಸ್ಥೆ ಮಾಡಲಾಗಿದ್ದು, 15 ರಿಂದ 18 ಸಾವಿರ ಕ್ರೂಸರ್‌ ವಾಹನಗಳ ವ್ಯವಸ್ಥಡ ಮಾಡಲಾಗಿದೆ. ಬಳ್ಳಾರಿಯಲ್ಲಿ 28 ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷವು ಬಿಜೆಪಿಯ ಮುಖಂಡರು ಮತ್ತು ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳಕ್ಕೆ ವಿರೋಧಿಗಳು ಎಂಬ ಸುಳ್ಳು ಮಾಹಿತಿಯನ್ನು ಜನರ ಮನಸ್ಸಿನಲ್ಲಿ ಬಿತ್ತುವ ಕೆಲಸ ಮಾಡಿದ್ದಾರೆ. ಅದನ್ನು ಹೋಗಲಾಡಿಸುವ ಮಾದರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೀಸಲಾತಿ ಹೆಚ್ಚಿಸಿದೆ. ಇದು ಬಿಜೆಪಿಯ ಬದ್ಧತೆಗೆ ಸ್ಪಷ್ಟ ನಿದರ್ಶನ ಎಂದರು.

ಸುಮಾರು ಆರು ದಶಕ ಆಡಳಿತ ನಡೆಸಿದ ಕಾಂಗ್ರೆಸ್‌ ಮತ್ತು ಅವರ ಮಿತ್ರಪಕ್ಷಗಳು ಮೀಸಲಾತಿ ಸಂಬಂಧ ಕ್ರಮಕೈಗೊಂಡಿರಲಿಲ್ಲ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಅವಕಾಶವಿದ್ದರೂ ಅದನ್ನು ಮಾಡಿಲ್ಲ. ಬಿಜೆಪಿ ನಮ್ಮ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದರಿಂದ 2023 ರ ಚುನಾವಣೆಯಲ್ಲಿ ಬಿಜೆಪಿ ಋಣ ತೀರಿಸಲು ಸಂಕಲ್ಪ ಮಾಡಿದ್ದೇವೆ ಎಂದು ಅವರು ಹೇಳಿದರು.

ನವಶಕ್ತಿ ಸಮಾವೇಶದಲ್ಲಿ ಕೇಂದ್ರ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅದ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಅವರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು