ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2023ಕ್ಕೆ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಜೆ.ಪಿ ನಡ್ಡಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ, ಪಕ್ಷ ಸಂಘಟನೆಗೆ ಸೂಚನೆ
Last Updated 18 ಜೂನ್ 2022, 15:35 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದೆ. ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕಮಲ ಅರಳಿದರೆ ಇದು ಸುಲಭವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಭಿಪ್ರಾಯಪಟ್ಟರು.

ಇಲ್ಲಿನ ಮುರುಘಾ ಮಠದ ಅನುಭವಮಂಟಪದಲ್ಲಿ ಬಿಜೆಪಿ ಶನಿವಾರ ಏರ್ಪಡಿಸಿದ್ದ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಜನಪರ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಿಸುವ ಜವಾಬ್ದಾರಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಮೇಲಿದೆ ಎಂಬುದನ್ನು ನೆನಪಿಸಿದರು.

ಚಿತ್ರದುರ್ಗದಲ್ಲಿ ಶನಿವಾರ ನಡೆದ ಬಿಜೆಪಿ ಜನಪ್ರತಿನಿಧಿಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ಸಂಸ್ಥೆಗಳ ಸದಸ್ಯರು.
ಚಿತ್ರದುರ್ಗದಲ್ಲಿ ಶನಿವಾರ ನಡೆದ ಬಿಜೆಪಿ ಜನಪ್ರತಿನಿಧಿಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ಸಂಸ್ಥೆಗಳ ಸದಸ್ಯರು.

‘ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಗ್ರಾಮ ವಿಕಾಸ ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಡಿಜಿಟಲ್‌ ಇಂಡಿಯಾ ರೂಪುಗೊಳ್ಳುತ್ತಿದ್ದು, ಹಳ್ಳಿಗಳಲ್ಲಿ ಆಪ್ಟಿಕಲ್‌ ಫೈಬರ್‌ ಕೇಬಲ್‌ ಅಳವಡಿಕೆ ಕಾರ್ಯ ನಡೆಯುತ್ತಿದೆ. ಹಳ್ಳಿಗಳು ಜೋಡಣೆಯಾದರೆ ಗ್ರಾಮ ಪಂಚಾಯಿತಿಗಳು ಸಶಕ್ತಿಕರಣಗೊಳ್ಳುತ್ತವೆ’ ಎಂದರು.

‘ಪ್ರಧಾನಮಂತ್ರಿ ಆವಾಸ್‌ ಯೋಜನೆ, ಆಯುಷ್ಮಾನ್‌, ಗರೀಬ್‌ ಕಲ್ಯಾಣ್‌, ಕಿಸಾನ್‌ ಸಮ್ಮಾನ್‌ ಯೋಜನೆಗಳ ಪ್ರಗತಿ ಕರ್ನಾಟಕದಲ್ಲಿ ಅತ್ಯುತ್ತಮವಾಗಿದೆ. ಬಯಲುಶೌಚ ಮುಕ್ತ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ಹಲವು ಪಿಂಚಣಿ ಸೌಲಭ್ಯ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ನೋಂದಣಿ ಮಾಡಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ’ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಬಾವುಟ ಹಾರಿಸಲು ಸಂಕಲ್ಪ ತೊಡಬೇಕಿದೆ. ಪಕ್ಷ ಸಂಘಟನೆ ಪ್ರಬಲವಾಗಿದ್ದು, ಪ್ರತಿ ಬೂತ್‌ ಕೂಡ ಸಶಕ್ತವಾಗಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ಪಕ್ಷದ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಆನೆ ಬಲ ತುಂಬುತ್ತಿದೆ. ಡಬಲ್‌ ಎಂಜಿನ್‌ ಸರ್ಕಾರದ ಅವಧಿಯಲ್ಲಿ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ’ ಎಂದು ಹೇಳಿದರು.

‘ರಾಜೀವ್‌ ಗಾಂಧಿ ಅವರು ಅಧಿಕಾರ ನಡೆಸುತ್ತಿದ್ದ ಸಂದರ್ಭದಲ್ಲಿ ಸರ್ಕಾರ ₹ 100 ಬಿಡುಗಡೆ ಮಾಡಿದರೆ ಹಳ್ಳಿಯ ಫಲಾನುಭವಿಗೆ ₹ 15 ತಲುಪುತ್ತಿತ್ತು. ಇಂತಹ ವ್ಯವಸ್ಥೆ ಸಂಪೂರ್ಣ ಬದಲಾಗಿದೆ. ಸರ್ಕಾರ ನೀಡಿದ ಸೌಲಭ್ಯ ನೇರವಾಗಿ ಈಗ ಫಲಾನುಭವಿ ತಲುಪುತ್ತಿದೆ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಬಿದ್ದಿದೆ. 75 ವರ್ಷದಲ್ಲಿ ರಾಜ್ಯದಲ್ಲಿ 24 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿತ್ತು. ಒಂದೂವರೆ ವರ್ಷದಲ್ಲಿ ರಾಜ್ಯದ 25 ಲಕ್ಷ ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲಾಗಿದೆ’ ಎಂದು ಹೇಳಿದರು.

ಜನಸಂಘದ ಮುಖಂಡರಾದ ವಾಸುದೇವ ರೆಡ್ಡಿ ಅವರನ್ನು ಸನ್ಮಾನಿಸಲಾಯಿತು. ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಗೈರುಹಾಜರಾಗಿದ್ದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸಾರಿಗೆ ಸಚಿವ ಬಿ.ಶ್ರೀರಾಮುಲು, ಕೃಷಿ ಸಚಿವ ಬಿ.ಸಿ.ಪಾಟೀಲ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಜಿ.ಎಚ್‌.ತಿಪ್ಪಾರೆಡ್ಡಿ, ಕೆ.ಪೂರ್ಣಿಮಾ, ಗೂಳಿಹಟ್ಟಿ ಶೇಖರ್‌, ಎಂ.ಚಂದ್ರಪ್ಪ, ವಿಧಾನಪರಿಷತ್‌ ಸದಸ್ಯರಾದ ಕೆ.ಎಸ್‌.ನವೀನ್‌, ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ, ಲಕ್ಷ್ಮಣ್‌ ಸವದಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ, ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ ಇದ್ದರು.

***

ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳದ ಬೇಡಿಕೆ ಮುಂದಿಡಲಾಗಿದೆ. ಖಂಡಿತವಾಗಿಯೂ ಗೌರವಧನ ಹೆಚ್ಚಾಗಬೇಕು. ಈ ಸಂಬಂಧ ಅತಿಶೀಘ್ರದಲ್ಲಿ ಸಿಹಿ ಸುದ್ದಿಯನ್ನು ನೀಡಲಿದ್ದೇನೆ.

– ಬಸವರಾಜ ಬೊಮ್ಮಾಯಿ,ಮುಖ್ಯಮಂತ್ರಿ

***

ಪರಿಶಿಷ್ಟ ಜಾತಿ, ಪಂಗಡದ ಜನರಲ್ಲಿ ಭರವಸೆ ಮೂಡಿಸಬೇಕಿದೆ. ವಾರ್ಡ್‌, ಬೂತ್‌ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಸಂಕಲ್ಪ ಮಾಡೋಣ. ಅಧಿಕಾರವನ್ನು ಬಡವರ ಸೇವೆಗೆ ಬಳಕೆ ಮಾಡೋಣ.

– ಕೋಟ ಶ್ರೀನಿವಾಸ ಪೂಜಾರಿ,ಸಮಾಜ ಕಲ್ಯಾಣ ಸಚಿವ

***

ಮುಂದಿನ 40 ವರ್ಷ ಬಿಜೆಪಿ ಮುಟ್ಟಲು ಯಾರಿಗೂ ಸಾಧ್ಯವಾಗದ ರೀತಿಯಲ್ಲಿ ಪಕ್ಷ ಕಟ್ಟುವ ಸಂಕಲ್ಪ ಮಾಡಬೇಕಿದೆ. ಪ್ರತಿಯೊಬ್ಬರು ತಮ್ಮ ಬೂತ್‌ಗಳನ್ನು ಬಲಿಷ್ಠಗೊಳಿಸಬೇಕು.

– ಅರುಣ್‌ಕುಮಾರ್‌, ಬಿಜೆಪಿ ಸಂಘಟನಾ ಕಾರ್ಯದರ್ಶಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT