ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರದಲ್ಲಿ ಆ.28ಕ್ಕೆ ಸಾಧನಾ ಸಮಾವೇಶ

ಬಿಜೆಪಿ ರಾಜ್ಯಮಟ್ಟದ ಚಿಂತನ ಸಭೆಯಲ್ಲಿ ನಿರ್ಧಾರ
Last Updated 16 ಜುಲೈ 2022, 17:39 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ವರ್ಷ ಪೂರೈಸುತ್ತಿರುವ ಪ್ರಯುಕ್ತ ಆಗಸ್ಟ್‌ 28ರಂದು ದೊಡ್ಡಬಳ್ಳಾಪುರದಲ್ಲಿ ಬೃಹತ್‌ ಸಾಧನಾ ಸಮಾವೇಶ ನಡೆಸಲು ಬಿಜೆಪಿ ನಿರ್ಧರಿಸಿದೆ.

ವಿಧಾನಸಭಾ ಚುನಾವಣಾ ತಯಾರಿ ಕುರಿತಂತೆ ಚರ್ಚಿಸಲು ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ರಾಜ್ಯಮಟ್ಟದ ಚಿಂತನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೊಡ್ಡಬಳ್ಳಾಪುರದಲ್ಲಿ ನಡೆಯುವ ಸಮಾವೇಶಕ್ಕೆ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಅನುಕೂಲ ಪಡೆದಿರುವ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಲು ತೀರ್ಮಾನಿಸಲಾಗಿದೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ, ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 150 ಸ್ಥಾನ ಗಳಿಸುವ ಗುರಿ ಹೊಂದಿದೆ. ಅದಕ್ಕೆ ಪೂರಕವಾಗಿ ಸಮಾವೇಶ ಆಯೋಜಿಸಲಾಗುವುದು. ಪ್ರತಿ ತಿಂಗಳಲ್ಲಿ ಎರಡು ಜಿಲ್ಲೆಗಳಲ್ಲಿ ಸಮಾವೇಶ ನಡೆಸುವುದಕ್ಕೂ ನಿರ್ಧರಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಪ್ರಮುಖ ನಾಯಕರು ಈ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ’ ಎಂದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅಧ್ಯಕ್ಷತೆಯಲ್ಲಿ 39 ಜಿಲ್ಲಾ ಘಟಕಗಳ ವ್ಯಾಪ್ತಿಯಲ್ಲಿ ತಲಾ ಒಂದು ದಿನದ ಸಮಾವೇಶ ಆಯೋಜಿಸಲಾಗುವುದು. ಏಳು ವಲಯಗಳಲ್ಲಿ ಬಿಜೆಪಿ ಯುವ ಮೋರ್ಚಾ ಸಮಾವೇಶ ನಡೆಯಲಿದೆ. ಮುಖ್ಯಮಂತ್ರಿಯವರು 50 ವಿಧಾನಸಭಾ ಕ್ಷೇತ್ರಗಳಲ್ಲಿ ರ‍್ಯಾಲಿ ನಡೆಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವಿವರಿಸಿದರು.

ಬಿಜೆಪಿಯ 312 ಮಂಡಲ ಘಟಕಗಳಲ್ಲಿ ಆ.9ರಿಂದ 15ರವರೆಗೆ ‘ಹರ್‌ ಘರ್‌ ತಿರಂಗಾ’ ಕಾರ್ಯಕ್ರಮ ನಡೆಯಲಿದೆ. ಆ.1ರಿಂದ 15ರವರೆಗೆ ಪಕ್ಷದ ಯುವ ಮೋರ್ಚಾ ನೇತೃತ್ವದಲ್ಲಿ 224 ಕ್ಷೇತ್ರಗಳ ವ್ಯಾಪ್ತಿಯಲ್ಲಿ ತಲಾ 75 ಕಿ.ಮೀ. ಉದ್ದದ ಬೈಕ್‌ ರ‍್ಯಾಲಿ ನಡೆಸಲಾಗುವುದು ಎಂದರು.

ಕಲ್ಯಾಣ ಕರ್ನಾಟಕದ 41 ವಿಧಾನಸಭಾ ಕ್ಷೇತ್ರಗಳ ಪೈಕಿ 15ರಲ್ಲಿ ಬಿಜೆಪಿ ಶಾಸಕರಿದ್ದಾರೆ. ಅದನ್ನು ದ್ವಿಗುಣಗೊಳಿಸುವ ಗುರಿಯೊಂದಿಗೆ ಕೆಲಸ ಮಾಡಲು ತೀರ್ಮಾನಿಸಲಾಗಿದೆ. ಹಳೆ ಮೈಸೂರು ಭಾಗದ 51 ಕ್ಷೇತ್ರಗಳ ಪೈಕಿ ಒಂಬತ್ತರಲ್ಲಿ ಬಿಜೆಪಿ ಗೆದ್ದಿತ್ತು. ಆ ಭಾಗದಲ್ಲೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಮತ್ತು ಹಳೆ ಮೈಸೂರು ಭಾಗದ ಜೆಡಿಎಸ್‌, ಕಾಂಗ್ರೆಸ್‌ನ ಹಲವು ಶಾಸಕರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ. ಆ ಪಕ್ಷಗಳ ಹಲವು ನಾಯಕರೂ ಬಿಜೆಪಿ ಸಂಪರ್ಕದಲ್ಲಿದ್ದಾರೆ. ಅವರೆಲ್ಲರನ್ನೂ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದರು.

ಇಷ್ಟು ದಿನ ಭಾರತ್‌ ತೋಡೋ ಮಾಡಿದ್ದರು: ರವಿಕುಮಾರ್‌

‘ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವುದು, ಜಾತಿ ಹೆಸರಿನಲ್ಲಿ ಸಮಾಜ ಒಡೆಯುವುದು, ಭಯೋತ್ಪಾದನೆಗೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್‌ನವರು ಇಷ್ಟು ದಿನ ಭಾರತ್‌ ತೋಡೋ ಅಭಿಯಾನ ಮಾಡಿದ್ದರು. ಈಗ ಭಾರತ್‌ ಜೋಡೋ ಕಾರ್ಯಕ್ರಮ ಮಾಡಲು ಹೊರಟಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಟೀಕಿಸಿದರು.

‘ಬಾಗಲಕೋಟೆಯ ಕೆರೂರಿನಲ್ಲಿ ಖಾಸಗಿ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ್ದ ಸಿದ್ದರಾಮಯ್ಯ, ಮುಸ್ಲಿಂ ಕುಟುಂಬಕ್ಕೆ ₹ 2 ಲಕ್ಷ ನೀಡಿದ್ದರು. ಹಿಂದೂ ಕುಟುಂಬಕ್ಕೆ ₹ 50 ಸಾವಿರ ಮಾತ್ರ ನೀಡಿದ್ದಾರೆ. ಇದು ಅವರ ದೃಷ್ಟಿಕೋನಕ್ಕೆ ಸಾಕ್ಷಿ. ಈ ನಡೆ ಖಂಡನೀಯ. ಇದಕ್ಕಾಗಿ ಸಿದ್ದರಾಮಯ್ಯ ಅವರು ಜನರ ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT