ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಖಂಡ ದಲಿತ ಎಂದ ಸಂತೋಷ್‌ ವಿರುದ್ಧ ಸಿದ್ದರಾಮಯ್ಯ ಕಿಡಿ

Last Updated 13 ಆಗಸ್ಟ್ 2020, 22:10 IST
ಅಕ್ಷರ ಗಾತ್ರ

ಬೆಂಗಳೂರು: ‘ಹಿಂದೂಗಳೆಲ್ಲಾ ಒಂದು ಎಂದು ಭಜನೆ ಮಾಡ್ತೀರಿ. ಜಾತಿ ಮೂಲದ ತಾರತಮ್ಯದ ಜೊತೆ ಗುದ್ದಾಡಿ, ದಲಿತರೊಬ್ಬರು ಶಾಸಕರಾದರೂ ಅವರನ್ನು ದಲಿತರೆಂದು ಹಂಗಿಸುತ್ತೀರಿ. ನಿಮ್ಮನ್ನೂ ನಿಮ್ಮ ಜಾತಿಯಿಂದಲೇ ಕರೆಯೋಣವೇ’ ಎಂದು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರನ್ನು ಛೇಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಅವರು ಹಿಂದುತ್ವದ ಜಪ ನಿಲ್ಲಿಸಿ 'ದಲಿತ' ಜಪ ಶುರು ಮಾಡಿದ್ದಾರೆ’ ಎಂದಿದ್ದಾರೆ.

‘ತಮ್ಮದೇ ಪಕ್ಷದ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ದಾಳಿ ನಡೆದರೂ ಕಾಂಗ್ರೆಸ್‌ ಮೌನವಾಗಿತ್ತು’ ಎಂದು ಟೀಕಿಸಿ ಬುಧವಾರ ಬೆಳಿಗ್ಗೆ ಸಂತೋಷ್‌ ಮಾಡಿದ್ದ ಟ್ವೀಟ್‌ಗೆ ಗುರುವಾರ ಸರಣಿ ಟ್ವೀಟ್‌ ಮೂಲಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ರಾಜ್ಯದಲ್ಲಿ ನಿಮ್ಮದೇ ಪಕ್ಷ‌ ಅಧಿಕಾರದಲ್ಲಿರುವಾಗ ಒಬ್ಬ ದಲಿತ ಶಾಸಕನ ಮನೆಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗಿಲ್ಲ. ಇನ್ನು ಕೋಟ್ಯಂತರ ಸಂಖ್ಯೆಯ ಬಡ-ಅಸಹಾಯಕ ದಲಿತರ ಮನೆಗಳಿಗೆ ರಕ್ಷಣೆ ನೀಡಲು ಹೇಗೆ ಸಾಧ್ಯ. ಇದು ತಲೆತಗ್ಗಿಸುವಂಥ ವೈಫಲ್ಯ ಎಂದು ನಿಮಗೆ ಅನಿಸುವುದಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

‘ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ. ಸತ್ತ ದನದ ಚರ್ಮ ಸುಲಿದಿದ್ದಕ್ಕೆ, ಗೋಮಾಂಸ ತಿಂದಿದ್ದಕ್ಕೆ, ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ, ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ ದಲಿತರ ಬೆನ್ನತ್ತಿ ಹಿಂಸಿಸಿ, ಸಾಯಿಸಿದ್ದು ಯಾರ ಆಡಳಿತದಲ್ಲಿ’ ಎಂದೂ ಕೇಳಿದ್ದಾರೆ.

‘ದಲಿತರು ನಾಯಿಗಳೆಂದು ತುಚ್ಛೀಕರಿಸಿದವರು, ಸಂವಿಧಾನವನ್ನು ಬದಲಾಯಿಸಬೇಕೆನ್ನುವವರು, ಡಾ. ಅಂಬೇಡ್ಕರ್ ಅವರನ್ನು ಅವಮಾನಿಸುವವರು ಯಾವ ಪಕ್ಷದವರು. ಇಂಥ ಮನುಷ್ಯ ವಿರೋಧಿಗಳ ವಿರುದ್ಧ ನಿಮ್ಮ ಪಕ್ಷವೇನಾದರೂ ಕ್ರಮ ಕೈಗೊಂಡಿದೆಯೇ? ಇದು ದಲಿತರ ಮೇಲಿನ ನಿಮ್ಮ ಕಾಳಜಿಯಲ್ಲವೇ’ ಎಂದಿದ್ದಾರೆ.

‘ದಿವಂಗತ ಬಂಗಾರು ಲಕ್ಷ್ಮಣ್ ಅವರನ್ನು ನಿಮ್ಮ ಪಕ್ಷದ ಏಕೈಕ ಭ್ರಷ್ಟನೆಂಬ ರೀತಿಯಲ್ಲಿ ಬಲಿಗೊಟ್ಟಿದ್ದು ಯಾರು‌. ದಲಿತರು ಜಾಗೃತರಾಗಿದ್ದಾರೆ, ಹಿತೈಷಿಗಳು ಯಾರು, ಹಿತಶತ್ರುಗಳು ಯಾರು ಎನ್ನುವುದು ಅವರಿಗೆ ಗೊತ್ತಿದೆ. ಉರಿಯುವ ಮನೆಯಲ್ಲಿ ಗಳ ಇರಿಯುವ ಕೆಲಸ ಮಾಡಬೇಡಿ’ ಎಂದೂ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT