ಶುಕ್ರವಾರ, ಡಿಸೆಂಬರ್ 2, 2022
21 °C

ಲಂಚ ಪ್ರಕರಣ: ಹೆಡ್‌ ಕಾನ್‌ಸ್ಟೆಬಲ್‌ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ₹ 1.53 ಕೋಟಿ ಪಡೆದು ವಂಚಿಸಿದ ಪ್ರಕರಣದ ತನಿಖೆಯಲ್ಲಿ ಆರೋಪಿಗಳಿಗೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ₹ 3.70 ಲಕ್ಷ ಲಂಚ ಪಡೆದಿದ್ದು, ಇನ್ನೂ ₹ 5 ಲಕ್ಷ ಲಂಚಕ್ಕೇ ಬೇಡಿಕೆ ಇಟ್ಟಿದ್ದ ಚಿಕ್ಕಜಾಲ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ರವಿ ಎಸ್‌. ಎಂಬುವವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ರವಿ ಎರಡನೇ ಆರೋಪಿಯಾಗಿದ್ದು, ಚಿಕ್ಕಜಾಲ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಪ್ರವೀಣ್‌ ಮೊದಲ ಆರೋಪಿ. ಇನ್‌ಸ್ಪೆಕ್ಟರ್‌ ಪರವಾಗಿ ಹೆಡ್‌ ಕಾನ್‌ಸ್ಟೆಬಲ್‌ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಮತ್ತು ಹಣ ಪಡೆದುಕೊಂಡಿರುವುದಕ್ಕೆ ಲಭ್ಯವಿರುವ ಸಾಕ್ಷ್ಯಗಳನ್ನು ಆಧರಿಸಿ ಅವರನ್ನು ಬಂಧಿಸಲಾಗಿದೆ. ಹೆಡ್‌ ಕಾನ್‌ಸ್ಟೆಬಲ್‌ ಬಂಧನವಾಗುತ್ತಿದ್ದಂತೆ ಇನ್‌ಸ್ಪೆಕ್ಟರ್‌ ಪ್ರವೀಣ್‌ ತಲೆಮರೆಸಿಕೊಂಡಿದ್ದಾರೆ.

ಪೊಲೀಸ್‌ ಇಲಾಖೆ, ಬೆಂಗಳೂರು ಜಲಮಂಡಳಿ ಸೇರಿದಂತೆ ವಿವಿಧೆಡೆ ಸರ್ಕಾರಿ ನೌಕರಿ ಕೊಡಿಸುವ ಭರವಸೆ ನೀಡಿ ಹಲವು ಮಂದಿಯಿಂದ ₹ 1.53 ಕೋಟಿ ಪಡೆದು ವಂಚಿಸಿದ ಆರೋಪದ ಮೇಲೆ ತುಮಕೂರು ಜಿಲ್ಲೆ ಕುಣಿಗಲ್‌ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿ ಮಾಚೋನಹಳ್ಳಿ ಗ್ರಾಮದ ಪ್ರಕಾಶ್‌ ಮತ್ತು ಇತರರ ವಿರುದ್ಧ ಇದೇ ಜೂನ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಯಲಹಂಕ ತಾಲ್ಲೂಕಿನ ತರಹುಣಸೆ ನಿವಾಸಿ ಟಿ.ಪಿ. ಮುನಿರಾಜು ಎಂಬುವವರು ನೀಡಿದ್ದ ದೂರನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಿದ್ದ ಚಿಕ್ಕಜಾಲ ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದರು.

‘ಈ ಪ್ರಕರಣದಲ್ಲಿ ಆರೋಪಪಟ್ಟಿಯಲ್ಲಿ ಆರೋಪಿಗಳ ಹೆಸರು ಕೈಬಿಡುವ ಭರವಸೆ ನೀಡಿ ಚಿಕ್ಕಜಾಲ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಮತ್ತು ಹೆಡ್‌ ಕಾನ್‌ಸ್ಟೆಬಲ್‌ ₹ 3.70 ಲಕ್ಷ ಲಂಚ ಪಡೆದುಕೊಂಡಿದ್ದರು. ಮತ್ತೆ ₹ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಪ್ರಕಾಶ್‌ ಅವರ ಮಾವ ಎಚ್‌.ಎನ್‌. ದೇವರಾಜು, ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್‌ ವಿಭಾಗಕ್ಕೆ ದೂರು ಸಲ್ಲಿಸಿದ್ದರು’ ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.

ಲಂಚಕ್ಕೆ ಬೇಡಿಕೆ ಇಟ್ಟಿರುವ ಸಾಕ್ಷ್ಯಗಳನ್ನು ಆಧರಿಸಿ ರವಿ ಅವರನ್ನು ಬಂಧಿಸಲಾಗಿದೆ. ಪ್ರವೀಣ್‌ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು