ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಹಾರ ಸಿಗದ ವರ್ಗಕ್ಕೆ ನೆರವು: ಯಡಿಯೂರಪ್ಪ

ಕಲಾವಿದರಿಗೆ ₹6.23 ಕೋಟಿ ಪರಿಹಾರ
Last Updated 22 ಜೂನ್ 2021, 23:13 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಮತ್ತು ಈವರೆಗೂ ಪರಿಹಾರ ಸಿಗದ ವರ್ಗಗಳಿಗೆ ನೆರವು ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಚಲನಚಿತ್ರ ಕಲಾವಿದರಿಗೆ ತಲಾ ₹3,000 ಆರ್ಥಿಕ ನೆರವು ನೀಡುವ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಒಟ್ಟು 20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ಡಿಬಿಟಿ ಮೂಲಕ ಒಟ್ಟು ₹6.23 ಕೋಟಿ ನೆರವು ನೀಡಲಾಗುವುದು. ಮೊದಲ ಅಲೆಯ ಸಂದರ್ಭದಲ್ಲಿಯೂ ಕಲಾವಿದರಿಗೆ ನೆರವು ನೀಡಲಾಗಿತ್ತು. ಈ ಬಾರಿಯೂ ಸರ್ಕಾರ ಅವರ ನೆರವಿಗೆ ಧಾವಿಸಿತ್ತು. ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಆಹ್ವಾನಿಸಿ, ಕಲಾವಿದರ ದಾಖಲೆಗಳನ್ನು ಪರಿಶೀಲಿಸಿ, ಅತ್ಯಂತ ಪಾರದರ್ಶಕವಾಗಿ ಮಂಜೂರು ನೀಡಲಾಗಿದೆ ಎಂದು ಹೇಳಿದರು.

ಕಲಾವಿದರು ಮುನ್ನೆಚ್ಚರಿಕೆಯ ಕ್ರಮಗಳನ್ನು ತಪ್ಪದೆ ಪಾಲಿಸಬೇಕು. ಜೊತೆಗೆ ಲಸಿಕೆಯನ್ನು ಸಹ ಸರ್ಕಾರ ಉಚಿತವಾಗಿ ನೀಡುತ್ತಿದ್ದು, ತಪ್ಪದೆ ಹಾಕಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದರು.

ಕೋವಿಡ್‌ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ದುರ್ಬಲ ಮತ್ತು ಶ್ರಮಿಕ ವರ್ಗಕ್ಕೆ ಈವರೆಗೆ ₹2,050 ಕೋಟಿ ಮೊತ್ತದ ಆರ್ಥಿಕ ನೆರವಿನ ಪ್ಯಾಕೇಜ್‌ ಘೋಷಿಸಲಾಗಿದೆ. ಈಗಾಗಲೇ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಬೀದಿಬದಿ ವ್ಯಾಪಾರಿಗಳು ಮೊದಲಾದವರಿಗೆ ಡಿ.ಬಿ.ಟಿ ಮೂಲಕ ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಮಾತನಾಡಿ, ಮೊದಲ ಅಲೆಯ ಸಂದರ್ಭದಲ್ಲಿಯೂ 17 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೆರವು ನೀಡಲಾಗಿತ್ತು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT