ಬುಧವಾರ, ಜನವರಿ 20, 2021
17 °C

ಚರ್ಚೆಗೆ ಗ್ರಾಸವಾದ ಬಿಎಸ್‌ವೈ– ಸಂತೋಷ್‌ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಮತ್ತು ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಈ ಮಾತುಕತೆ ನಡೆಯಿತು. ಆ ಬಳಿಕ ಬಿ.ವೈ.ವಿಜಯೇಂದ್ರ ಅವರೂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಸಂತೋಷ್‌, ನಳಿನ್‌ ಭೇಟಿ ಮತ್ತು ಮಾತುಕತೆ ವಿವಿಧ ರೀತಿಯ ಚರ್ಚೆಗಳಿಗೂ ಕಾರಣವಾಗಿದೆ. ಇದರಿಂದ ನಾಯಕತ್ವ ಬದಲಾವಣೆ ವಿಚಾರವೂ ಮುನ್ನೆಲೆಗೆ ಬಂದಿದೆ ಎಂದೂ ವಿಶ್ಲೇಷಿಸಲಾಗಿದೆ.

ಇದೇ 25 ರಂದು ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದ್ದು, ಈ ಕಾರಣದಿಂದಲೂ ಸಂತೋಷ್‌ ಭೇಟಿ ಮಾಡಿರಬಹುದು. ಇದರ ಬೆನ್ನಲ್ಲೇ ಸಚಿವಾಕಾಂಕ್ಷಿ ಶಾಸಕರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಲು ಬಂದಿದ್ದರು. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರೂ ಭೇಟಿ ಮಾಡಿದರು.

ಸಚಿವ ಸಂಪುಟ ವಿಸ್ತರಣೆ ವರಿಷ್ಠರ ತೀರ್ಮಾನ: ಕಟೀಲ್
‘ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆಯ ಬಗ್ಗೆ ವರಿಷ್ಠರೇ ತೀರ್ಮಾನ ತೆಗೆದುಕೊಳ್ಳಲಿದ್ದು, ನಾಯಕತ್ವದ ಬಗ್ಗೆ ಯಾವುದೇ ಗೊಂದಲವಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಿಂದ ಕಾರ್ಯಕರ್ತರು ಹಾಗೂ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ವಿಚಾರದಲ್ಲಿ ವರಿಷ್ಠರು ಸೂಕ್ತ ಕಾಲದಲ್ಲಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ಮತ್ತು ಪ್ರದೇಶವಾರು ಪ್ರಾತಿನಿಧ್ಯವನ್ನು ಗಮನದಲ್ಲಿ ಇಟ್ಟುಕೊಳ್ಳುತ್ತೇವೆ. ಸಂಪುಟ ವಿಸ್ತರಣೆ ತಡವಾಗಿರುವುದಕ್ಕೆ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ನಳಿನ್‌ ಕುಮಾರ್‌ ಹೇಳಿದರು.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್ ಅವರು ಡಿ.5 ಕ್ಕೆ ಬೆಳಗಾವಿ ಬರಲಿದ್ದಾರೆ ಎಂದೂ ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು