ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ರಾತ್ರಿ ಕರ್ಫ್ಯೂ: ಏಳು ಜಿಲ್ಲಾ ಕೇಂದ್ರ, ಮಣಿಪಾಲದಲ್ಲಿ ಜಾರಿ

Last Updated 9 ಏಪ್ರಿಲ್ 2021, 20:32 IST
ಅಕ್ಷರ ಗಾತ್ರ

ಬೆಂಗಳೂರು: ಶನಿವಾರದಿಂದ (ಏ. 10) ಇದೇ 20ರವರೆಗೆ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ಜಾರಿಗೆ ಬರಲಿರುವ ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಎಲ್ಲ ವಾಣಿಜ್ಯ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ.

ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ– ಮಣಿಪಾಲ, ಬೀದರ್‌, ಕಲಬುರ್ಗಿ ಮತ್ತು ತುಮಕೂರು ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ಬರಲಿದೆ.

‘ಕೊರೊನಾ ಕರ್ಪ್ಯೂ’ ಅವಧಿಯಲ್ಲಿ ಈ ನಗರಗಳಲ್ಲಿ ವೈದ್ಯಕೀಯ ಸೇವೆ ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದೆ. ಅಲ್ಲದೆ, ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚರಿಸಲು ಕೂಡ ಅನುಮತಿ ನೀಡಲಾಗಿದೆ.

ಜೊತೆಗೆ, ಅಗತ್ಯ ಸೇವೆಗಳನ್ನು ಒದಗಿಸುವ ಹಾಗೂ ಸರಕು ಸಾಗಣೆ ವಾಹನಗಳು, ಹೋಮ್‌ ಡೆಲಿವರಿ, ಇ– ಕಾಮರ್ಸ್‌ ಮತ್ತು ಖಾಲಿ ವಾಹನಗಳ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗಿದೆ. ಬಸ್ಸು, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಆದರೆ, ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ ತೋರಿಸಿ ಆಟೊ, ಕ್ಯಾಬ್‌ ಮತ್ತಿತರ ವಾಹನದ ಮೂಲಕ ಸಂಚರಿಸಬಹುದು ಎಂದೂ ಆದೇಶದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.

ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಕಾರ್ಖಾನೆಗಳು, ಕಂಪನಿಗಳು ಹಾಗೂ ಸಂಸ್ಥೆಗಳು ಯಥಾ ರೀತಿಯಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ, ಸಂಬಂಧಿಸಿದ ಕಾರ್ಮಿಕರು, ನೌಕರರು ಕರ್ಫ್ಯೂ ಅವಧಿಗೆ ಮೊದಲೇ ತಮ್ಮ ಸಂಸ್ಥೆಗಳಲ್ಲಿ ಕರ್ತವ್ಯಕ್ಕೆ ಹಾಜರಿರಬೇಕು ಎಂಬ ಷರತ್ತು ವಿಧಿಸಲಾಗಿದೆ.

ಈ ಆದೇಶವನ್ನು ಬಿಬಿಎಂಪಿ, ಪೊಲೀಸ್‌ ಆಯುಕ್ತರು ಮತ್ತು ಸಂಬಂಧಿಸಿದ ನಗರಗಳ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಆದೇಶ ಪಾಲಿಸುವ ವಿಷಯದಲ್ಲಿ ಲೋಪವಾದರೆ ಅಂಥವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT