ಗುರುವಾರ , ಮಾರ್ಚ್ 23, 2023
28 °C

ದೆಹಲಿಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ: ಸಂಜೆ‌ ಪ್ರಧಾನಿ ಮೋದಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಿ ಹಾಗೂ ಪಕ್ಷದ ವರಿಷ್ಠರ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ನವದೆಹಲಿಗೆ ಆಗಮಿಸಿದ‌ರು.

ಸಂಜೆ‌  6.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಇಲ್ಲಿನ ಕರ್ನಾಟಕ‌ ಭವನದಲ್ಲಿ ಅವರು ಸುದ್ದಿಗಾರರಿಗೆ ತಿಳಿಸಿದರು.

ಶನಿವಾರ ಅಮಿತ್ ಶಾ, ರಾಜನಾಥ ಸಿಂಗ್ ಸೇರಿದಂತೆ ಕೇಂದ್ರದ ಕೆಲವು ಪ್ರಮುಖ ಸಚಿವರನ್ನು ಭೇಟಿ ಮಾಡುವುದಾಗಿಯೂ ಅವರು ತಿಳಿಸಿದರು.

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆ ಎದುರಾಗದು.‌ ಈ ವಿಷಯವನ್ನು ತಮಿಳುನಾಡು ಮುಖ್ಯಮಂತ್ರಿಯವರಿಗೂ ಪತ್ರ ಬರೆದು ಮನವರಿಕೆ ಮಾಡಲಾಗಿದೆ. ಆದರೆ, ಅವರು ಹಟ ಬಿಡುತ್ತಿಲ್ಲ ಎಂದು ಅವರು ಹೇಳಿದರು.

‘ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇರುವುದರಿಂದ ನಾವು ಸಮಾನಾಂತರ ಜಲಾಶಯ ನಿರ್ಮಿಸುವುದು  ಶತಸಿದ್ಧ’ ಎಂದು‌ ಯಡಿಯೂರಪ್ಪ ಭರವಸೆ ನೀಡಿದರು.

‘ಸಂಪುಟ ಪುನರ್ ರಚನೆ‌ ಅಥವಾ ವಿಸ್ತರಣೆ‌ ಕುರಿತು ವರಿಷ್ಠರೊಂದಿಗೆ ಚರ್ಚೆ ನಡೆಸಿದಲ್ಲಿ ನಿಮಗೆ‌ ಹೇಳುತ್ತೇನೆ’ ಎಂದು ಅವರು ಸ್ಪಷ್ಟಪಡಿಸಿದರು.

ಸಾಮಾನ್ಯವಾಗಿ ಸಚಿವರೊಂದಿಗೆ ಬರುತ್ತಿದ್ದ ಮುಖ್ಯಮಂತ್ರಿ ‌ಜೊತೆ ಯಾವುದೇ ಸಚಿವರು ಬಂದಿಲ್ಲ. ಬದಲಿಗೆ, ಎಂದಿನಂತೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮತ್ತಿತರರು ಬಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು