ಶನಿವಾರ, ಫೆಬ್ರವರಿ 27, 2021
30 °C
ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ವರದಿ

ಬಿಎಸ್‌ವೈ ಪ್ರಕರಣ: ಮುಕ್ತಾಯಕ್ಕೆ ಕೋರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐ.ಟಿ ಕಾರಿಡಾರ್‌ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿ–ನೋಟಿಫೈ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧದ ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ವರದಿ ಸಲ್ಲಿಸಿದ್ದಾರೆ.

2008ರಿಂದ 2011ರ ಅವಧಿಯಲ್ಲಿ ನಡೆದಿದ್ದ 8 ಎಕರೆ 10 ಗುಂಟೆ ಜಮೀನುಗಳ ಡಿ–ನೋಟಿಫೈ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಗರದ  ವಾಸುದೇವ ರೆಡ್ಡಿ ಎಂಬುವವರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ 2013ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದಂತೆ 2015ರ ಫೆಬ್ರುವರಿ 21ರಂದು ಎಫ್‌ಐಆರ್‌ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ತನಿಖೆ ನಡೆಸುತ್ತಿದ್ದರು.

ಈ ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್‌, ವಿಶೇಷ ನ್ಯಾಯಾಲಯದಲ್ಲಿ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸುವಂತೆ 2020ರ ಡಿಸೆಂಬರ್‌ 22ರಂದು ಆದೇಶಿಸಿತ್ತು. ಅರ್ಜಿದಾರರು ಸಂಜ್ಞೇಯ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಸಾಕ್ಷ್ಯಗಳು ಮೇಲ್ನೋಟದಲ್ಲೇ ಕಾಣಿಸುತ್ತಿರುವುದರಿಂದ ಪ್ರಕರಣ ರದ್ದು ಮಾಡ
ಲಾಗದು ಎಂದು ನ್ಯಾಯಮೂರ್ತಿ ಜಾನ್‌ ಮೈಕಲ್‌ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ಡಿ.22ರ ಆದೇಶದಲ್ಲಿ ತಿಳಿಸಿತ್ತು.

10,000 ಪುಟಗಳ ದಾಖಲೆ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೂ ಆಗಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಪ್ರಕರಣ ವಿಚಾರಣೆಗೆ ಬಂತು. ಆಗ, 27 ಸಂಪುಟಗಳಲ್ಲಿ 10,000 ಪುಟಗಳ ದಾಖಲೆ ಮತ್ತು ವರದಿ ಸಲ್ಲಿಸಿದ ಲೋಕಾಯುಕ್ತ ಪೊಲೀಸರು ಪ್ರಕರಣ ಮುಕ್ತಾಯಗೊಳಿಸುವಂತೆ ಮನವಿ ಸಲ್ಲಿಸಿದರು.

ನ್ಯಾಯಾಲಯದ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಹೈಕೋರ್ಟ್‌ ಆದೇಶಿಸಿದ ಬಳಿಕ ಪ್ರಕರಣ ಮುಕ್ತಾಯಗೊಳಿಸುವಂತೆ ವರದಿ ಸಲ್ಲಿಸಿರುವ ಲೋಕಾಯುಕ್ತ ಪೊಲೀಸರ ನಿರ್ಧಾರಕ್ಕೆ ಆಕ್ಷೇಪಣೆ ಸಲ್ಲಿಸುವುದಾಗಿ ಅರ್ಜಿದಾರರ ಪರ ಹಾಜರಾಗಿದ್ದ ಸುಪ್ರೀಂಕೋರ್ಟ್‌ ವಕೀಲ ಕೆ.ವಿ. ಧನಂಜಯ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಅರ್ಜಿದಾರರ ಆಕ್ಷೇಪಣೆ ಹಾಗೂ ಲೋಕಾಯುಕ್ತ ಪೊಲೀಸರ ಕೋರಿಕೆ ಎರಡನ್ನೂ ಕುರಿತು ಫೆಬ್ರುವರಿ 2ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ಮುಂದೂಡಿದರು.

ಈ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ತನಿಖೆ ನಡೆಸದೇ ಪ್ರಕರಣವನ್ನು ಬಾಕಿ ಇರಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರ ನಡೆ ಕುರಿತು ಹೈಕೋರ್ಟ್‌ ಡಿ.22ರ ಆದೇಶದಲ್ಲಿ ಕಟುವಾದ ಮಾತುಗಳಿಂದ ಆಕ್ಷೇಪಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು