ಸೋಮವಾರ, ಜನವರಿ 24, 2022
29 °C

ಕೆಪಿಎಸ್‌ಸಿ: 362 ಅಭ್ಯರ್ಥಿಗಳ ರಕ್ಷಣೆಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2011ನೇ ಸಾಲಿನಲ್ಲಿ ನಡೆಸಿದ್ದ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ 362 ಅಭ್ಯರ್ಥಿಗಳಿಗೆ ರಕ್ಷಣೆ ನೀಡಲು ಅಗತ್ಯ ಕ್ರಮವಹಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಈ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ‘ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಸಂಪುಟ ತೀರ್ಮಾನಿಸಿದೆ. ಅದಕ್ಕೆ ಪೂರಕವಾಗಿ ಕಡತಗಳನ್ನು ಅಧ್ಯಯನ ಮಾಡಿ, ಪ್ರಸ್ತಾವ ಸಿದ್ಧಪಡಿಸುವಂತೆ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡಿದ್ದಾರೆ’ ಎಂದರು.

2011ರಲ್ಲಿ 362 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ, ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಸಿಐಡಿ ತನಿಖೆಯೂ ನಡೆದಿತ್ತು. 362 ಅಭ್ಯರ್ಥಿಗಳ ನೇಮಕಾತಿ ರದ್ದುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿತ್ತು. ಈ ಪ್ರಕರಣದಲ್ಲಿ ಕೆಪಿಎಸ್‌ಸಿಯ ಆಗಿನ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ಸರ್ಕಾರ ನಿರಾಕರಿಸಿತ್ತು.

ಎಲ್ಲ 362 ಜನರಿಗೂ ಮರುನೇಮಕಾತಿ ಆದೇಶ ನೀಡಬೇಕೆಂಬ ಆಗ್ರಹ ಕೇಳಿಬಂದಿತ್ತು. ರಕ್ಷಣೆ ನೀಡುವುದಾಗಿ ಸರ್ಕಾರ ವಿಧಾನಮಂಡಲದಲ್ಲೇ ಭರವಸೆ ನೀಡಿತ್ತು. ತುಮಕೂರು ಸಿದ್ಧಗಂಗಾಮಠದ ಸಿದ್ಧಲಿಂಗ ಸ್ವಾಮೀಜಿ ಮತ್ತು ಸಿರಿಗೆರೆಯ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇತ್ತೀಚೆಗೆ ಪತ್ರ ಬರೆದು ಇದೇ ಬೇಡಿಕೆ ಮುಂದಿಟ್ಟಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು