ಶುಕ್ರವಾರ, ಮೇ 27, 2022
27 °C

ಸಂಪೂರ್ಣ ಸಿಸಿಟಿವಿ ಕಣ್ಗಾವಲಿನಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ: ಬಿ.ಸಿ.ನಾಗೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ‌ ಶಾಲೆಗಳಿಗೆ 15,000 ಪದವೀಧರ ಶಿಕ್ಷಕರ ನೇಮಕಾತಿಗೆ ಮೇ 21 ಮತ್ತು 22 ರಂದು ಸಂಪೂರ್ಣ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಾದ್ಯಂತ 435 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 1.06 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಯಾವುದೇ ಹಂತದಲ್ಲೂ ಪರೀಕ್ಷಾ ಅಕ್ರಮಗಳಿಗೆ ಅವಕಾಶವಾಗದಂತೆ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಎಲ್ಲ ಪರೀಕ್ಷಾ ಕೊಠಡಿಗಳಿಗೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ನಿರಂತರವಾಗಿ ಸಿಸಿಟಿವಿ ಕ್ಯಾಮೆರಾ  ದೃಶ್ಯಾವಳಿಗಳನ್ನು ವೀಕ್ಷಣೆ ಮಾಡಲು ಅಧಿಕಾರಿಗಳ ತಂಡಗಳನ್ನು ನೇಮಿಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ‌ ಮೊಬೈಲ್, ಕೈಗಡಿಯಾರ ತರುವಂತಿಲ್ಲ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ತರಲು ಅವಕಾಶವಿಲ್ಲ. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಲೋಹಶೋಧಕ‌ ಅಳವಡಿಸಲಾಗುವುದು ಎಂದು ತಿಳಿಸಿದರು.

ಮೂರು ಹಂತದ ತಪಾಸಣೆ: ಪರೀಕ್ಷಾ ಕೇಂದ್ರಗಳಲ್ಲಿ ಮೂರು ಹಂತದ ತಪಾಸಣೆ ನಡೆಸಲಾಗುವುದು. ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನ ಪೊಲೀಸರು ತಪಾಸಣೆ ಮಾಡುತ್ತಾರೆ. ಪರೀಕ್ಷಾ ಕೊಠಡಿ ಪ್ರವೇಶಿಸುವಾಗ ಶಿಕ್ಷಣ ಇಲಾಖೆ ಅಧಿಕಾರಿಗಳ ತಂಡ ತಪಾಸಣೆ ನಡೆಸಲಿದೆ. ಪರೀಕ್ಷೆ ಆರಂಭಕ್ಕೂ ಮೊದಲು ಮೂರನೇ ಹಂತದ ತಪಾಸಣೆ ನಡೆಸಲಾಗುವುದು ಎಂದು ನಾಗೇಶ್ ವಿವರಿಸಿದರು.

ಈ ಹಿಂದೆ ಎಲ್ಲ ನೇಮಕಾತಿ ಪರೀಕ್ಷೆಗಳಲ್ಲೂ ಅಭ್ಯರ್ಥಿಗಳು ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರ ಪ್ರವೇಶಿಸಬೇಕಿತ್ತು. ಈ ಬಾರಿ ಹೆಚ್ಚಿನ ತಪಾಸಣೆ ಇರುವುದರಿಂದ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಬರುವುದು ಕಡ್ಡಾಯ ಎಂದರು.

ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ಭದ್ರತಾ ವ್ಯವಸ್ಥೆ ಕುರಿತು ಚರ್ಚಿಸಲಾಗಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ತಂಡ ಎಲ್ಲ ಜಿಲ್ಲೆಗಳಲ್ಲೂ ಪರೀಕ್ಷಾ ಮೇಲುಸ್ತುವಾರಿ ವಹಿಸಲಿದೆ. ಪ್ರಶ್ನೆ ಪತ್ರಿಕೆ ರವಾನೆ, ವಿತರಣೆ ಸೇರಿದಂತೆ ಪರೀಕ್ಷೆಯ ಎಲ್ಲ ಪ್ರಕ್ರಿಯೆಗಳಿಗೂ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಹೇಳಿದರು.

ಖಾಸಗಿ ಮತ್ತು ಅನುದಾನಿತ ಶಾಲಾ ಕಟ್ಟಡಗಳನ್ನೂ ಪರೀಕ್ಷಾ ಕೇಂದ್ರವಾಗಿ ಬಳಸಲಾಗುತ್ತಿದೆ. ಮೂರು ದಿನ ಮುಂಚಿತವಾಗಿ ಅಂತಹ ಶಾಲಾ ಕಟ್ಟಡಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು. ಆ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವುದಿಲ್ಲ. ತಹಶೀಲ್ದಾರ್‌ ಮತ್ತು ಅದಕ್ಕಿಂತ ಹಿರಿಯ ಅಧಿಕಾರಿಗಳನ್ನೇ ಪರೀಕ್ಷಾ ಕೇಂದ್ರಗಳಿಗೆ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ನಿಗದಿಯಂತೆ ಮೇ 21 ಮತ್ತು 22ರಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಯಾವುದೇ ಬದಲಾವಣೆ ಇರುವುದಿಲ್ಲ. ಈ ವಿಚಾರದಲ್ಲಿ ವದಂತಿಗಳಿಗೆ ಕಿವಿಗೊಡಬಾರದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು