ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕೂಟ ವ್ಯವಸ್ಥೆ ದುರ್ಬಲಕ್ಕೆ ಯತ್ನ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆರೋಪ

ಕೇಂದ್ರದ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆರೋಪ
Last Updated 1 ನವೆಂಬರ್ 2020, 16:34 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂವಿಧಾನದ ತಳಹದಿಯ ಮೇಲೆ ರೂಪುಗೊಂಡಿದ್ದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ, ಆರ್ಥಿಕ, ಆಡಳಿತಾತ್ಮಕ ಮತ್ತು ಸಾಂಸ್ಕೃತಿಕವಾಗಿ ರಾಜ್ಯಗಳ ಮೇಲೆ ಸವಾರಿ ಮಾಡಲು ಯತ್ನಿಸುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜ್ಯೋತ್ಸವದ ಪ್ರಯುಕ್ತ ಭಾನುವಾರ ಸುದೀರ್ಘ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸಂವಿಧಾನದಲ್ಲಿ ‘ಕೇಂದ್ರ ಸರ್ಕಾರ’ ಎಂಬ ಪದವೇ ಇಲ್ಲ. ‘ಒಕ್ಕೂಟ ರಾಜ್ಯ ವ್ಯವಸ್ಥೆ’ ಎಂದೇ ಕರೆಯಲಾಗಿದೆ. ಆದರೆ, ನಿಧಾನಕ್ಕೆ ಒಕ್ಕೂಟ ವ್ಯವಸ್ಥೆಯ ಕೇಂದ್ರೀಕೃತ ವ್ಯವಸ್ಥೆಯಾಗಿ ಬದಲಾಗುತ್ತಿದೆ. ಕರ್ನಾಟಕವಂತೂ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಗಳಿಂದ ಸೊರಗುತ್ತಿದೆ’ ಎಂದು ಹೇಳಿದ್ದಾರೆ.

‘ಕೇಂದ್ರದ ತೆರಿಗೆಯಲ್ಲಿನ ರಾಜ್ಯದ ಪಾಲು, ಹಣಕಾಸು ಆಯೋಗಗಳ ನಿಗದಿಯಂತೆ ದೊರಕಬೇಕಾದ ಅನುದಾನದ ಪ್ರಮಾಣವನ್ನು ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಕಡಿತ ಮಾಡುತ್ತಿದೆ. 2014–15ರಿಂದ 2019–20ರ ಅವಧಿಯಲ್ಲಿ ಹಣಕಾಸು ಆಯೋಗಗಳು ಅಂದಾಜಿಸಿದ್ದ ಮೊತ್ತದಲ್ಲಿ ₹ 37,076 ಕೋಟಿಯಷ್ಟನ್ನು ಕೇಂದ್ರ ನೀಡಿಲ್ಲ. 2019–20ರ ಬಜೆಟ್‌ ಗಾತ್ರದ ಶೇಕಡ 62ರಿಂದ 65ರಷ್ಟನ್ನು ಕೇಂದ್ರ ಸರ್ಕಾರ ತನ್ನ ಬಳಿಯೇ ಉಳಿಸಿಕೊಂಡಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದಲ್ಲಿನ ಪಾಲನ್ನೂ ರಾಜ್ಯಕ್ಕೆ ಸರಿಯಾಗಿ ನೀಡುತ್ತಿಲ್ಲ’ ಎಂದು ದೂರಿದ್ದಾರೆ.

‘ಕೇಂದ್ರದ ಆರ್ಥಿಕ ಧೋರಣೆಯ ಫಲವಾಗಿ ಮುಂದಿನ ಕೆಲವು ವರ್ಷಗಳಲ್ಲಿ ಕರ್ನಾಟಕವು ಅತ್ಯಂತ ಹಿಂದುಳಿದ ಅಥವಾ ಬಡ ರಾಜ್ಯಗಳ ಸಾಲಿಗೆ ಸೇರುವುದರಲ್ಲಿ ಯಾವ ಅನುಮಾನವೂ ಇಲ್ಲ. ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕವನ್ನು ವ್ಯವಸ್ಥಿತವಾಗಿ ನಾಶ ಮಾಡುವ ಹುನ್ನಾರ ಮಾಡುತ್ತಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಭಾಷಿಕ ಮತ್ತು ಸಾಂಸ್ಕೃತಿಕ ತಾರತಮ್ಯವನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ. ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ಕಲ್ಪಿಸಿಲ್ಲ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಸಂಸ್ಕೃತ ಹೇರಿಕೆಗೆ ಯತ್ನಿಸಲಾಗುತ್ತಿದೆ. ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆಗೆ ಕೇಂದ್ರ ಸರ್ಕಾರ ನಿರಂತರ ಪ್ರಯತ್ನಿಸುತ್ತಿದೆ. ರಾಜ್ಯ ಪಟ್ಟಿ ಮತ್ತು ಸಮವರ್ತಿ ಪಟ್ಟಿಯಲ್ಲಿರುವ ವಿಷಯಗಳಲ್ಲೂ ಹಸ್ತಕ್ಷೇಪ ಮಾಡುವ ಮೂಲಕ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸುತ್ತಿದೆ’ ಎಂದು ಆರೋಪಿಸಿದ್ದಾರೆ.

ಮೌನ ವಹಿಸುವುದು ಸರಿಯಲ್ಲ

‘ಒಂದು ರಾಜ್ಯ ಅಥವಾ ಒಂದು ಭಾಷೆ ಎಂದರೆ ಗಡಿ, ಭೂಪಟ, ಧ್ವಜ ಮಾತ್ರವಲ್ಲ. ರಾಜ್ಯೋತ್ಸವ ನವೆಂಬರ್‌ಗೆ ಸೀಮಿತವಾಗಬಾರದು. ಕನ್ನಡ ನಾಡಿನ ಮಕ್ಕಳು ನಿರ್ಭೀತಿಯಿಂದ ಕಲಿಯುವ ಮತ್ತು ಕೆಲಸ ಮಾಡುವ ವಾತಾವರಣ ಕಲ್ಪಿಸಬೇಕು. ಇದಕ್ಕಾಗಿ ಕೇಂದ್ರದ ದೊಡ್ಡಣ್ಣನಂತಹ ನೀತಿಗಳ ವಿರುದ್ಧ ಧ್ವನಿ ಎತ್ತಲೇಬೇಕು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT