ಶನಿವಾರ, ಜುಲೈ 2, 2022
26 °C

ಮೇಕೆದಾಟು ವಿಚಾರದಲ್ಲಿ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ: ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕಾದ ಕೇಂದ್ರ ಸರ್ಕಾರವೇ ಅದನ್ನು ಒಂದು ವಿವಾದ ಎಂದು ಬಿಂಬಿಸುವ ಮೂಲಕ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಮೇಕೆದಾಟು ಯೋಜನೆ ಕುರಿತಂತೆ ಶನಿವಾರ ನೀಡಿದ್ದ ಹೇಳಿಕೆಗೆ ಭಾನುವಾರ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಕೇಂದ್ರ ಸಚಿವರೇ ‘ವಿವಾದ’ ಎನ್ನುವ ಮೂಲಕ ನಮ್ಮ ಕುಡಿಯುವ ನೀರಿನ ಯೋಜನೆಗೆ ಬಿಕ್ಕಟ್ಟಿನ ಲೇಪನ ಹಚ್ಚಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಮೇಕೆದಾಟು ಯೋಜನೆಯ ಪ್ರಸ್ತಾವ ಈಗ ಕೇಂದ್ರ ಸರ್ಕಾರದ ಅಧೀನದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಕೊಳೆಯುತ್ತಿದೆ. ಅದಕ್ಕೆ ಒಪ್ಪಿಗೆ ನೀಡುವುದನ್ನು ಬಿಟ್ಟು, ಕರ್ನಾಟಕ ಮತ್ತು ತಮಿಳುನಾಡು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದಿದ್ದಾರೆ. ಹಾಗಾದರೆ, ಯೋಜನೆಗೆ ಒಪ್ಪಿಗೆ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲವೆ’ ಎಂದು ಪ್ರಶ್ನಿಸಿದ್ದಾರೆ.

‘ಮೇಕೆದಾಟು ಯೋಜನೆಗೆ ₹ 1,000 ಕೋಟಿ ಅನುದಾನ ನೀಡಿರುವುದಾಗಿ ಬಿಜೆಪಿ ಬೀಗುತ್ತಿದೆ. ನಮ್ಮ ಪಾದಯಾತ್ರೆಯಿಂದಲೇ ಅನುದಾನ ದೊರಕಿದೆ ಎಂದು ಕಾಂಗ್ರೆಸ್‌ನವರು ಕುಣಿಯುತ್ತಿದ್ದಾರೆ. ಇಬ್ಬರೂ ಈಗ ಕೇಂದ್ರ ಸಚಿವರ ಹೇಳಿಕೆ ಕುರಿತು ಏನು ಪ್ರತಿಕ್ರಿಯೆ ನೀಡುತ್ತಾರೆ’ ಎಂದು ಕೇಳಿದ್ದಾರೆ.

ಕೇಂದ್ರ ಸಚಿವರ ಹೇಳಿಕೆಯು ಮೇಕೆದಾಟು ವಿಚಾರದಲ್ಲಿ ಬಿಜೆಪಿಯ ನಿಲುವಿನ ಕುರಿತು ಸಂಶಯ ಮೂಡಿಸಿದೆ. ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ಡಿಎಂಕೆಯ ಮಿತ್ರ ಪಕ್ಷವಾಗಿರುವ ಕಾಂಗ್ರೆಸ್‌ ಕೂಡ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಅವರು ತಮಿಳುನಾಡು ಸರ್ಕಾರವನ್ನು ಒಪ್ಪಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು