ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ– 500ವರೆಗಿನ ರ್‍ಯಾಂಕಿಂಗ್‌ನಲ್ಲಿ ವ್ಯತ್ಯಾಸ ಇಲ್ಲ: ಅಶ್ವತ್ಥನಾರಾಯಣ

Last Updated 1 ಅಕ್ಟೋಬರ್ 2022, 20:35 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ರ್‍ಯಾಂಕಿಂಗ್‌ ಅನ್ನು ಹೈಕೋರ್ಟ್ ಆದೇಶದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪರಿಷ್ಕರಿಸಿ ಶನಿವಾರ ಪ್ರಕಟಿಸಿದೆ.

ಜುಲೈ 30ರಂದು ಪ್ರಕಟಿಸಿದ್ದ ರ್‍ಯಾಂಕಿಂಗ್ ಪಟ್ಟಿಗೆ ಹೋಲಿಸಿದರೆ, ಪರಿಷ್ಕೃತ ಪಟ್ಟಿಯಲ್ಲಿ ಮೊದಲ 500ವರೆಗಿನ ರ್‍ಯಾಂಕಿಂಗ್‌ನಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ.

ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ, ‘2020–21ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿ, ಈ ವರ್ಷವೂ ಸಿಇಟಿ ಬರೆದಿದ್ದ 24 ಸಾವಿರ ಅಭ್ಯರ್ಥಿಗಳು 2021ರಲ್ಲಿ ಗಳಿಸಿದ್ದ ಅಂಕಗಳಲ್ಲಿ ಶೇ 6ರಷ್ಟನ್ನು ಕಡಿತಗೊಳಿಸಿದ ನಂತರ ಆ ವರ್ಷದ ಅಂಕಗಳ ಶೇ 50ರಷ್ಟು ಮತ್ತು ಸಿಇಟಿಯಲ್ಲಿ ಪಡೆದ ಅಂಕಗಳ ಶೇ 50ರಷ್ಟನ್ನು ಪರಿಗಣಿಸಿ ಪರಿಷ್ಕೃತ ಪಟ್ಟಿ ಸಿದ್ಧಪಡಿಸಲಾಗಿದೆ. ಹೊಸ ಪಟ್ಟಿಯಲ್ಲಿ 501ರಿಂದ 1,000ನೇ ರ್‍ಯಾಂಕ್ ಮಧ್ಯೆ ಹೋದ ವರ್ಷದ 14 ವಿದ್ಯಾರ್ಥಿಗಳು ಮಾತ್ರ ಸ್ಥಾನ ಪಡೆದಿದ್ದಾರೆ’ ಎಂದು ಹೇಳಿದರು.

‘1001ರಿಂದ 10 ಸಾವಿರವರೆಗಿನ ರ್‍ಯಾಂಕಿಂಗ್‌ನಲ್ಲಿ ಹೋದ ವರ್ಷದ 2,063 ಅಭ್ಯರ್ಥಿಗಳು, 10,001ದಿಂದ 1 ಲಕ್ಷದವರೆಗಿನ ರ್‍ಯಾಂಕಿಂಗ್‌ನಲ್ಲಿ ಹೋದ ವರ್ಷದ 22,022 ಅಭ್ಯರ್ಥಿಗಳು ಸ್ಥಾನ ಪಡೆದಿದ್ದಾರೆ. ಪರಿಷ್ಕೃತ ಪಟ್ಟಿಯು ಎಂಜಿನಿಯರಿಂಗ್, ಕೃಷಿ, ಯೋಗ, ನ್ಯಾಚುರೋಪಥಿ ಕೋರ್ಸುಗಳಿಗೆ ಮಾತ್ರ ಅನ್ವಯ ಆಗಲಿದೆ. ಪಶು ವೈದ್ಯಕೀಯ ಮತ್ತು ಫಾರ್ಮಸಿ ಕೋರ್ಸುಗಳಿಗೆ ಈ
ಹಿಂದೆ ನೀಡಿರುವಂತೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಿ ರ್‍ಯಾಂಕಿಂಗ್ ನಿರ್ಧರಿಸಲಾಗಿದೆ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಕೋವಿಡ್‌ ಕಾರಣದಿಂದಾಗಿ 2021ರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿರಲಿಲ್ಲ. ಆ ಸಾಲಿನ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪಡೆದ ಅಂಕ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಪರಿಗಣಿಸಿ ತೇರ್ಗಡೆಗೊಳಿಸಲಾಗಿತ್ತು. ಬಳಿಕ, ದ್ವಿತೀಯ ಪಿಯುಸಿ ಅಂಕಗಳನ್ನು ಮಾತ್ರ ಪರಿಗಣಿಸಿ ಅವರಿಗೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ನೀಡಲಾಗಿತ್ತು. ಅಂಥವರ ಪೈಕಿ, 24 ಸಾವಿರ ವಿದ್ಯಾರ್ಥಿಗಳು ಈ ವರ್ಷವೂ ಸಿಇಟಿ ಬರೆದಿದ್ದರು. ತಮ್ಮ ಸಿಇಟಿ ಅಂಕವನ್ನೂ ಪರಿಗಣಿಸಬೇಕೆಂದು ಕೋರಿ ವಿದ್ಯಾರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT