ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ, ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಅನುದಾನ: ಸಿಎಂ ಬಿ.ಎಸ್. ಯಡಿಯೂರಪ್ಪ

ಕೋವಿಡ್ ಪರಿಶೀಲನಾ ಸಭೆ
Last Updated 4 ಜೂನ್ 2021, 13:35 IST
ಅಕ್ಷರ ಗಾತ್ರ

ಬೆಳಗಾವಿ: ‘ಕೋವಿಡ್ ಸಮರ್ಪಕ ನಿರ್ವಹಣೆಗೆ ಆಮ್ಲಜನಕ, ಲಸಿಕೆ ಪೂರೈಕೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಬಲವರ್ಧನೆಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕೋವಿಡ್ ನಿರ್ವಹಣೆ ಹಾಗೂ ಇತರ ಅಭಿವೃದ್ಧಿ ವಿಷಯಗಳ ಕುರಿತು ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಒದಗಿಸಲು ನಿರ್ಧರಿಸಲಾಗಿದೆ. ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ. ಕೋವಿಡ್ ನಿರ್ವಹಣೆ ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರು ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಚರ್ಚಿಸಿ ಸ್ಥಳೀಯವಾಗಿ ಬಗೆಹರಿಸಿಕೊಳ್ಳಬೇಕು’ ಎಂದರು.

ಪರಿಹಾರ ಬಿಡುಗಡೆಗೆ ಕ್ರಮ:‘ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳ ನಿರ್ಮಾಣಕ್ಕೆ ಬಿಡುಗಡೆಯಾದ ಹಣ ಬಳಸಿಕೊಂಡು ಪ್ರಮಾಣಪತ್ರ ನೀಡಿದರೆ 24 ಗಂಟೆಗಳಲ್ಲಿ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

‘20 ಕೆ.ಎಲ್. ಆಮ್ಲಜನಕ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಆಸ್ಪತ್ರೆಗಳ ಮೂಲ ಸೌಕರ್ಯಗಳನ್ನು ಒದಗಿಸಲು ಬದ್ಧವಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ತಾಲ್ಲೂಕು ಆಸ್ಪತ್ರೆಗಳಲ್ಲಿ ಇರುವ ವೆಂಟಿಲೇಟರ್‌ಗಳ ಬಳಕೆಗೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ‘ಸಂಭವನೀಯ 3ನೇ ಅಲೆಯ ವೇಳೆ ಉಂಟಾಗುವ ಸಮಸ್ಯೆ ಎದುರಿಸಲು ₹ 8 ಲಕ್ಷ ವೆಚ್ಚದಲ್ಲಿ ಆಮ್ಲಜನಕ ಹಾಸಿಗೆ ಹೊಂದಿರುವ ಹಾಸಿಗೆಗಳ ವ್ಯವಸ್ಥೆಯುಳ್ಳ ಬಸ್‌ ಸಜ್ಜುಗೊಳಿಸಲಾಗಿದೆ. ತುರ್ತು ಚಿಕಿತ್ಸೆಗೆ ಅನುಕೂಲ ಆಗುವಂತೆ ಶಾಸಕರು ಹಾಗೂ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿದಿಯಲ್ಲಿ ತಾಲ್ಲೂಕುಗಳಲ್ಲಿ ಇಂತಹ ಬಸ್ ಸೌಲಭ್ಯಗಳನ್ನು ಕಲ್ಪಿಸಬಹುದು’ ಎಂದು ತಿಳಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ಉಪಸ್ಥಿತರಿದ್ದರು.

ಸಭೆಗೆ ಮಾಧ್ಯಮ ಪ್ರತಿನಿಧಿಗಳಿಗೆ ಅವಕಾಶವಿರಲಿಲ್ಲ.

ಬೆಳಗಾವಿಗೆ 144 ವೈದ್ಯರ ನೇಮಕ: ಸುಧಾಕರ್
‘ಜಿಲ್ಲೆಗೆ ಏಳು ಆಮ್ಲಜನಕ ಘಟಕಗಳನ್ನು ಮುಖ್ಯಮಂತ್ರಿ ಮಂಜೂರು ಮಾಡಿದ್ದಾರೆ. ಆದಷ್ಟು ಬೇಗ ಇವು ಕಾರ್ಯಾರಂಭಿಸಲಿವೆ. ಜಿಲ್ಲೆಗೆ ಒಟ್ಟು 144 ವೈದ್ಯರನ್ನು ನೇಮಿಸಲಾಗಿದೆ. ಇದರಲ್ಲಿ 54 ಜನರು ತಜ್ಞರನ್ನು ನಿಯೋಜಿಸಲಾಗಿದೆ. ದೇಶದಲ್ಲಿಯೇ ಅತಿ ಹೆಚ್ಚು ಕೋವಿಡ್ ಪರೀಕ್ಷೆಯನ್ನು ರಾಜ್ಯದಲ್ಲಿ ಮಾಡಲಾಗುತ್ತಿದೆ. ಇದುವರೆಗೆ ಮೂರು ಕೋಟಿ ಮಾದರಿ ಪರೀಕ್ಷೆ ಮಾಡಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

‘ರಾಜ್ಯಕ್ಕೆ ಜೂನ್ ಅಂತ್ಯದ ವೇಳೆಗೆ 58 ಲಕ್ಷ ಲಸಿಕೆಗಳು ಪೂರೈಕೆಯಾಗಲಿವೆ. ಆಗ ಲಸಿಕೆ ಕೊರತೆಯ ಸಮಸ್ಯೆ ಪರಿಹಾರಗೊಳ್ಳಲಿದೆ’ ಎಂದು ಹೇಳಿದರು.

ಪರೀಕ್ಷೆ ಹೆಚ್ಚಿಸಲು ಆಗ್ರಹ:‘ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು. ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯಗೊಳಿಸಬೇಕು. ಎಲ್ಲ ಹೊಸ ತಾಲ್ಲೂಕುಗಳಿಗೆ ನೂರು ಹಾಸಿಗೆ ಆಸ್ಪತ್ರೆ ಮಂಜೂರು ಮಾಡಬೇಕು. ಆಯುಷ್ಮಾನ್-ಆರೋಗ್ಯ ಭಾರತ ಯೋಜನೆಯಡಿ ಸೇವೆ ಒದಗಿಸಿದ ಖಾಸಗಿ ಆಸ್ಪತ್ರೆಗಳ ಬಿಲ್ ಪಾವತಿಸಬೇಕು. ಆರ್.ಎಂ.ಪಿ. ವೈದ್ಯರಿಗೂ ಚಿಕಿತ್ಸೆಗೆ ಅವಕಾಶ ಕಲ್ಪಿಸಬೇಕು’ ಎಂದು ಶಾಸಕ ಸತೀಶ ಜಾರಕಿಹೊಳಿ ಒತ್ತಾಯಿಸಿದರು.

‘ಚಿಕ್ಕೋಡಿಯಲ್ಲೂ ಕೋವಿಡ್ ಪರೀಕ್ಷೆಗೆ ಪ್ರಯೋಗಾಲಯ ಹಾಗೂ ಜಿಲ್ಲಾ ಆಸ್ಪತ್ರೆ ಸ್ಥಾಪಿಸಬೇಕು’ ಎಂದು ವಿಧಾನಪರಿಷತ್ತಿನ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಕೋರಿದರು.

‘ಜಿಲ್ಲೆಗೆ ಮಂಜೂರಾದ 7 ಆಮ್ಲಜನಕ ಘಟಕ ಶೀಘ್ರ ಆರಂಭಿಸಬೇಕು’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯಿಸಿದರು.

‘ಜಿಲ್ಲೆಗೆ ನೇಮಕಗೊಂಡ ವೈದ್ಯರನ್ನು ತಕ್ಷಣವೇ ಕರ್ತವ್ಯಕ್ಕೆ ನಿಯೋಜಿಸಬೇಕು’ ಎಂದು ಸಂಸದೆ ಮಂಗಲಾ ಅಂಗಡಿ ಕೋರಿದರು.

ಶಾಸಕರಾದ ಮಹೇಶ ಕುಮಠಳ್ಳಿ, ದುರ್ಯೋಧನ ಐಹೊಳೆ ಅವರು ತಮ್ಮ ಕ್ಷೇತ್ರದಲ್ಲಿ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT