ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಸಂಕಷ್ಟ ಪರಿಹಾರಕ್ಕೆ ಯೋಜನೆ ರೂಪಿಸಲು ಬಸವರಾಜ ಬೊಮ್ಮಾಯಿ ಸೂಚನೆ

Last Updated 21 ಜನವರಿ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಿಂದ ಬರಬೇಕಿರುವ ಬಾಕಿ, ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ವೆಚ್ಚ ಮತ್ತಿತರ ಕಾರಣಗಳಿಂದ ಇಂಧನ ಇಲಾಖೆ ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಪರಿಹರಿಸಲು ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಇಂಧನ ಇಲಾಖೆಯ ಆರ್ಥಿಕ ಸ್ಥಿತಿ ಕುರಿತು ಪರಿಶೀಲನೆ ನಡೆಯಿತು. ಇಂಧನ ಸಚಿವ ವಿ. ಸುನೀಲ್‌ ಕುಮಾರ್‌ ಅವರ ಕೋರಿಕೆಯಂತೆ ಇಲಾಖೆಯನ್ನು ಆರ್ಥಿಕ ಸಂಕಷ್ಟದಿಂದ ಪಾರುಮಾಡಲು ತುರ್ತಾಗಿ ಪ್ರಸ್ತಾವಗಳನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ₹ 12,000 ಕೋಟಿಗೂ ಹೆಚ್ಚು ವಿದ್ಯುತ್‌ ಬಿಲ್‌ ಬಾಕಿ ಇರುವುದು, ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿರುವ ವಿದ್ಯುತ್‌ ಬಾಬ್ತು ಸಹಾಯಧನ ಬಾಕಿ, ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಬರಬೇಕಿರುವ ಬಾಕಿ ಮತ್ತು ಈ ಕಂಪನಿಗಳಿಂದ ಕರ್ನಾಟಕ ವಿದ್ಯುತ್‌ ಪ್ರಸರಣ (ಕೆಪಿಟಿಸಿಎಲ್‌) ನಿಗಮಕ್ಕೆ ಪಾವತಿಸಬೇಕಿರುವ ಬಾಕಿ ಮೊತ್ತದ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆದಿದೆ.

‘ಇಂಧನ ಮತ್ತು ಹಣಕಾಸು ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು. ಇಂಧನ ಇಲಾಖೆಯನ್ನು ಆರ್ಥಿಕ ಸಂಕಷ್ಟದಿಂದ ಪಾರುಮಾಡಲು ಅಲ್ಪಾವಧಿ ಮತ್ತು ದೀರ್ಘಾವಧಿಯ ಕ್ರಮಗಳನ್ನು ಸೂಚಿಸುವ ಪ್ರತ್ಯೇಕ ಪ್ರಸ್ತಾವಗಳನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು. ಇಂಧನ ಇಲಾಖೆ ಈಗಾಗಲೇ ಸಿದ್ಧಪಡಿಸಿರುವ ಸಂಕಷ್ಟ ಪರಿಹಾರ ಯೋಜನೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು’ ಎಂದು ಮೂಲಗಳು ತಿಳಿಸಿವೆ.

ಸರ್ಕಾರದ ವಿವಿಧ ಇಲಾಖೆಗಳಿಂದ ಹಂತ ಹಂತವಾಗಿ ಬಾಕಿ ವಸೂಲಿ ಮಾಡುವುದು ಮತ್ತು ಪ್ರಸಕ್ತ ವರ್ಷದ ಬಿಲ್‌ ಮೊತ್ತವನ್ನು ಒಂದೇ ಬಾರಿಗೆ ವಸೂಲಿ ಮಾಡುವ ಕುರಿತು ಚರ್ಚಿಸಲಾಗಿದೆ. ಸಾಲ ಪಡೆಯುವ ಬಗ್ಗೆಯೂ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌. ಪ್ರಸಾದ್‌, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್‌ ನಾಯ್ಕ್ ಮತ್ತು ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕಿ ಎನ್‌. ಮಂಜುಳಾ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT