ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಹಾನಿ: ಪರಿಹಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಸಂವಾದ
Last Updated 8 ಜುಲೈ 2022, 18:25 IST
ಅಕ್ಷರ ಗಾತ್ರ

ಬೆಂಗಳೂರು: ಮಳೆ ಮತ್ತು ಪ್ರವಾಹದಿಂದ ಜೀವಹಾನಿಯಾದ ಕುಟುಂಬಗಳಿಗೆ ಹಾಗೂ ಮನೆಗಳ ಹಾನಿಗೆ ತಕ್ಷಣವೇ ಪರಿಹಾರ ನೀಡಬೇಕು. ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡಗಳನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಶುಕ್ರವಾರ ವಿಡಿಯೊ ಸಂವಾದ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ತಿಂಗಳಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ 12 ಮಂದಿ ಮೃತಪಟ್ಟಿದ್ದು, 65 ಜಾನುವಾರುಗಳ ಜೀವ ಹಾನಿಯಾಗಿದೆ’ ಎಂದು ಹೇಳಿದರು.

ಪ್ರವಾಹ ಪೀಡಿತ ಜಿಲ್ಲೆಗಳ ಸಂಪೂರ್ಣ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಅವರು, ‘ಮನೆ ಹಾನಿ ಆದವರಿಗೆತಕ್ಷಣವೇ ತಲಾ ₹10 ಸಾವಿರ ತುರ್ತು ಪರಿಹಾರ ನೀಡಬೇಕು’ ಎಂದು ಅವರು ನಿರ್ದೇಶನ ನೀಡಿದರು.

‘ರಕ್ಷಣೆ ಮತ್ತು ಪರಿಹಾರ ಕಾರ್ಯ
ಗಳಿಗೆ ಜಿಲ್ಲಾಧಿಕಾರಿಗಳ ಬಳಿ ಒಟ್ಟು ₹735.59 ಕೋಟಿ ಲಭ್ಯವಿದೆ. ಅಲ್ಲದೆ, ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಸದ್ಬಳಕೆ ಮಾಡಬೇಕು. ಪರಿಹಾರ ಕಾರ್ಯದಲ್ಲಿ ತೊಡಕುಗಳಾದರೆ, ವಿಪತ್ತು ನಿರ್ವಹಣೆ ವಿಭಾಗದ ಅಧಿಕಾರಿಗಳ ಮಾರ್ಗದರ್ಶನದೊಂದಿಗೆ ಕಾರ್ಯ ನಿರ್ವಹಿಸಬೇಕು’ ಎಂದು ಬೊಮ್ಮಾಯಿ ತಿಳಿಸಿದರು.

‘ಗ್ರಾಮಗಳ ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸುವುದರ ಜತೆಗೆ ನಿಯಂತ್ರಣ ಕೊಠಡಿಯನ್ನೂ ಸ್ಥಾಪಿಸಬೇಕು. ಈ ಮೂಲಕ ಗ್ರಾಮಗಳ ಜತೆಗೆ ನೇರ ಸಂಪರ್ಕವನ್ನು ಹೊಂದಬೇಕು. ಪೊಲೀಸರು ಸೇವೆಗೆ ದಿನದ 24 ಗಂಟೆಯೂ ಲಭ್ಯರಿರಬೇಕು’ ಎಂದರು.

‘ಮನೆಗಳಿಗೆ ಆಗಿರುವ ಹಾನಿಯ ಪ್ರಮಾಣವನ್ನು ನಿಯಮಾನುಸಾರ ಅಂದಾಜು ಮಾಡಿ, ವರ್ಗೀಕರಿಸಿ, ರಾಜೀವ್‌ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಿ ಪರಿಹಾರವನ್ನು ವಿತರಿಸಲು ಕ್ರಮ ತೆಗೆದುಕೊಳ್ಳಬೇಕು. ಬೆಳೆ ನಷ್ಟ, ಮೂಲ ಸೌಕರ್ಯಗಳ ಹಾನಿಯನ್ನು ಮಳೆ ನಿಂತ ಕೂಡಲೇ ಸಮೀಕ್ಷೆ ಮಾಡಿ ವರದಿ ಸಲ್ಲಿಸಬೇಕು’ ಎಂದು ಬೊಮ್ಮಾಯಿ ತಿಳಿಸಿದರು.

ರೆಡ್‌ ಅಲರ್ಟ್‌: ಜನರ ತೆರವಿಗೆ ಸೂಚನೆ

‘ಕಳೆದ ವರ್ಷ ಭೂಕುಸಿತ ಆದ ಪ್ರದೇಶಗಳಲ್ಲಿ ಈಗ ವಾಸವಿರುವ ಜನರನ್ನು ತಕ್ಷಣವೇ ತೆರವುಗೊಳಿಸಬೇಕು. ಮುಂದಿನ ಕೆಲವು ದಿನಗಳಲ್ಲಿ ಈ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅನಾಹುತ ತಪ್ಪಿಸಲು ಸಮರೋಪಾದಿಯಲ್ಲಿ ತೆರವುಗೊಳಿಸಬೇಕು’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ರಸ್ತೆಗಳ ಮೇಲೆ ಭೂಕುಸಿತವಾದಲ್ಲಿ ಮಣ್ಣು–ಬಂಡೆಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT