ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್‌ ಕುರಿತು ಸಮಗ್ರ ವರದಿ ಪಡೆಯಲು ಸೂಚಿಸಿದ್ದೇನೆ: ಸಿಎಂ ಬೊಮ್ಮಾಯಿ

Last Updated 4 ಡಿಸೆಂಬರ್ 2021, 7:34 IST
ಅಕ್ಷರ ಗಾತ್ರ

ಬೆಂಗಳೂರು: ಓಮೈಕ್ರಾನ್‌ ತಳಿಯ ಕೊರೊನಾ ವೈರಾಣುವಿನ ಸ್ವಭಾವ, ಸೋಂಕಿತರ ಚಿಕಿತ್ಸಾ ವಿಧಾನಗಳ ಕುರಿತು ಹೆಚ್ಚಿನ ವರದಿಗಳನ್ನು ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಬೆಳಿಗ್ಗೆ ಸಾರ್ವಜನಿಕರ ಅಹವಾಲು ಆಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಓಮೈಕ್ರಾನ್‌ ತಳಿಯ ಕೊರೊನಾ ವೈರಾಣು ಕುರಿತು ಪ್ರಾಥಮಿಕ ಹಂತದ ವರದಿಯಷ್ಟೇ ನಮಗೆ ಲಭಿಸಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಓಮೈಕ್ರಾನ್‌ ತಳಿಯ ವೈರಾಣುವಿನಿಂದ ಸೋಂಕಿತರಾದವರಿಗೆ ನೀಡುತ್ತಿರುವ ಚಿಕಿತ್ಸಾ ವಿಧಾನದ ಬಗ್ಗೆಯೂ ಮಾಹಿತಿ ಸಂಗ್ರಹಿಸಲು ಸೂಚಿಸಲಾಗಿದೆ ಎಂದರು.

ಸದ್ಯ ಡೆಲ್ಟಾ ತಳಿಯ ವೈರಾಣುವಿನಿಂದ ಸೋಂಕಿತರಾದವರಿಗೆ ನೀಡುತ್ತಿದ್ದ ಚಿಕಿತ್ಸೆಯ ವಿಧಾನವನ್ನೇ ಅನುಸರಿಸಲಾಗುತ್ತಿದೆ. ವಿವಿಧ ರಾಷ್ಟ್ರಗಳಲ್ಲಿ ಅನುಸರಿಸುತ್ತಿರುವ ಕ್ರಮಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೊರೊನಾ ಸೋಂಕಿನ ಹೆಚ್ಚು ಪ್ರಕರಣಗಳು ಪತ್ತೆಯಾಗುವ ಕ್ಲಸ್ಟರ್‌ಗಳ ನಿರ್ವಹಣೆಗೆ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಿಂದೆ 10 ಪ್ರಕರಣಗಳಿದ್ದರೆ ಕ್ಲಸ್ಟರ್‌ ಎಂದು ನಿರ್ಧರಿಸಲಾಗುತ್ತಿತ್ತು. ಇನ್ನು ಮುಂದೆ 100 ಪ್ರಕರಣಗಳು ಒಂದು ಕಡೆ ಪತ್ತೆಯಾದರೆ ಮಾತ್ರ ಕ್ಲಸ್ಟರ್‌ ಎಂದು ಗುರುತಿಸುವಂತೆ ಶುಕ್ರವಾರ ನಡೆದ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಹೇಳಿದರು.

ಸೋಂಕು ಪತ್ತೆಯಾಗಿರುವ ಶಾಲೆ, ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳು, ಬೋಧಕರು ಮತ್ತು ಸಿಬ್ಬಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ. ಎಲ್ಲರಿಗೂ ಎರಡು ಡೋಸ್‌ ಲಸಿಕೆ ನೀಡಲು ಅಭಿಯಾನ ಆಯೋಜಿಸಲು ಸೂಚಿಸಲಾಗಿದೆ. ಅಪಾರ್ಟ್‌ಮೆಂಟ್‌ಗಳಲ್ಲಿ ಕೋವಿಡ್‌ ಪತ್ತೆಯಾದಲ್ಲಿ ಅಲ್ಲಿನ ಜನರು ಪದೇ ಪದೇ ಒಂದೆಡೆ ಸೇರುವುದನ್ನು ನಿಯಂತ್ರಿಸುವುದಕ್ಕೂ ನಿರ್ದೇಶನ ನೀಡಲಾಗಿದೆ ಎಂದರು.

ಮುನ್ನೆಚ್ಚರಿಕೆಯಿಂದ ಅಧಿವೇಶನ: ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲೇ ನಡೆಯಲಿದೆ. ಕೋವಿಡ್‌ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಎಲ್ಲ ಪೊಲೀಸರನ್ನೂ ನಿಂಧಿಸಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರ ವಿರುದ್ಧ ಕೆಟ್ಟದಾಗಿ ಮಾತನಾಡಿರುವ ವಿಡಿಯೊ ವೈರಲ್‌ ಆಗಿರುವ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಗೃಹ ಸಚಿವರು ಎಲ್ಲ ಪೊಲೀಸರಿಗೂ ಸಾರ್ವತ್ರಿಕವಾಗಿ ಆ ರೀತಿ ಮಾತನಾಡಿಲ್ಲ. ನಿರ್ದಿಷ್ಟ ಪ್ರಕರಣವೊಂದರಲ್ಲಿ ಹಾಗೆ ಹೇಳಿರುವುದಾಗಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT