ಗುರುವಾರ , ಮೇ 26, 2022
29 °C

ರಾಜ್ಯದಲ್ಲಿ ಓಮೈಕ್ರಾನ್‌ ಪ್ರಕರಣಗಳ ಏರಿಕೆ: ಇಂದು ಸಿ.ಎಂ ಬೊಮ್ಮಾಯಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ರೂಪಾಂತರಿ ಸೋಂಕು ಓಮೈಕ್ರಾನ್‌ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿರುವ ಕಾರಣ, ಇದರ ತಡೆಗೆ ತೆಗೆದುಕೊಂಡಿರುವ ಕ್ರಮಗಳು ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ (ಡಿ.26) ಉನ್ನತಮಟ್ಟದ ಸಭೆ ನಡೆಸಲಿದ್ದಾರೆ.

ಬೆಳಿಗ್ಗೆ 9ಕ್ಕೆ ಮುಖ್ಯಮಂತ್ರಿಯ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಕಂದಾಯ ಸಚಿವ ಆರ್‌.ಅಶೋಕ, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯರು,  ಆರೋಗ್ಯ ಕ್ಷೇತ್ರದ ತಜ್ಞರು, ಕಂದಾಯ, ಆರೋಗ್ಯ, ಗೃಹ ಇಲಾಖೆಯ ಅಧಿಕಾರಿಗಳು ಭಾಗವಹಿಸುವರು. 

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಭಾನುವಾರ ಬೆಳಿಗ್ಗೆ ಮಾತನಾಡಿದ ಮುಖ್ಯಮಂತ್ರಿ, ‘ದೇಶದಲ್ಲಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರ, ಕೇರಳ ಹಾಗೂ ತಮಿಳುನಾಡಿನಲ್ಲಿ ಹೆಚ್ಚಾಗಿರುವುದು ರಾಜ್ಯದ ಆತಂಕ ಹೆಚ್ಚಿಸಿದೆ. ಈ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದರು.

ರಾಜ್ಯದಲ್ಲಿ ಓಮೈಕ್ರಾನ್‌ ಸ್ಥಳೀಯವಾಗಿ ಹರಡುತ್ತಿರುವ ಬಗ್ಗೆ ಈಗಾಗಲೇ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ, ತಜ್ಞರ ಜೊತೆ ಚರ್ಚಿಸಿದ ಬಳಿಕ ಕೆಲವು ಕಠಿಣ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.‌

ರಾತ್ರಿ ಕರ್ಫ್ಯೂ ಮತ್ತೆ ಹೇರುವ ಬಗ್ಗೆ ಈ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ. ಅಲ್ಲದೆ, ಬಾರ್‌ ಮತ್ತು ರೆಸ್ಟೋರೆಂಟ್‌, ಪಬ್‌, ಹೋಟೆಲ್‌ಗಳಲ್ಲಿ ಒಟ್ಟು ಆಸನದ ಶೇ 50ರಷ್ಟು ಮಂದಿಗೆ ಮಾತ್ರ ಅವಕಾಶ ಕಲ್ಪಿಸುವ ನಿಯಮ ಜಾರಿ ಬಗ್ಗೆಯೂ ಸಭೆಯಲ್ಲಿ ತೀರ್ಮಾನ ಆಗಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು