ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿ ಯೋಜನೆಗಳ ಕಾಮಗಾರಿ ತ್ವರಿತಕ್ಕೆ ಸೂಚನೆ

Last Updated 5 ಡಿಸೆಂಬರ್ 2022, 16:34 IST
ಅಕ್ಷರ ಗಾತ್ರ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷ್ಣಾ ಭಾಗ್ಯ ಜಲ ನಿಗಮ (ಕೆಬಿಜೆಎನ್‌ಎಲ್‌) ಮತ್ತು ವಿಶ್ವೇಶ್ವರಯ್ಯ ಜಲ ನಿಗಮಗಳ (ವಿಜೆಎನ್‌ಎಲ್‌) ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಎರಡೂ ನಿಗಮಗಳ ಕೇಂದ್ರ ಕಚೇರಿಗಳಿಗೆ ಸೋಮವಾರ ಭೇಟಿ ನೀಡಿ, ಆಡಳಿತ ಮಂಡಳಿ ಸಭೆ ನಡೆಸಿದ ಅವರು, ಚಾಲ್ತಿಯಲ್ಲಿರುವ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಆಡಳಿತಾತ್ಮಕ ಮತ್ತು ತಾಂತ್ರಿಕ ವಿಷಯಗಳಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಿದರು. ಎರಡೂ ನಿಗಮಗಳ ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ, ಪ್ರಗತಿಯಲ್ಲಿರುವ ಮತ್ತು ಬಾಕಿ ಇರುವ ಕಾಮಗಾರಿಗಳ ವಿವರಗಳನ್ನೂ ಪಡೆದುಕೊಂಡರು.

‘ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಒಂಬತ್ತು ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದರು. ಪರಿಹಾರ ಮತ್ತು ಪುನರ್ವಸತಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿದರು. ಎತ್ತಿನಹೊಳೆ ಯೋಜನೆ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳುವಂತೆ ತಾಕೀತು ಮಾಡಿದರು’ ಎಂದು ಜಲ ಸಂಪನ್ಮೂಲ ಇಲಾಖೆಯ ಮೂಲಗಳು ತಿಳಿಸಿವೆ.

ಡಿಪಿಆರ್‌ಗಳಿಗೆ ಒಪ್ಪಿಗೆ: ಕೃಷ್ಣಾ ಭಾಗ್ಯ ಜಲ ನಿಗಮದ ವ್ಯಾಪ್ತಿಯಲ್ಲಿ ಸುಮಾರು ₹ 1,000 ಕೋಟಿ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮದ ವ್ಯಾಪ್ತಿಯಲ್ಲಿ ಸುಮಾರು ₹ 300 ಕೋಟಿ ವೆಚ್ಚದ ಕಾಮಗಾರಿಗಳ ವಿಸ್ತೃತ ಯೋಜನಾ ವರದಿಗೆ ಆಡಳಿತ ಮಂಡಳಿಗಳ ಸಭೆಗಳಲ್ಲಿ ಅನುಮೋದನೆ ನೀಡಲಾಗಿದೆ. ಚುನಾವಣಾ ನೀತಿಸಂಹಿತೆ ಜಾರಿಯಾಗುವ ಮುನ್ನವೇ ಕಾಮಗಾರಿಗಳನ್ನು ಆರಂಭಿಸುವುದಕ್ಕೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಮುಖ್ಯಮಂತ್ರಿಯವರು ಎರಡೂ ನಿಗಮಗಳ ಕೇಂದ್ರ ಕಚೇರಿಗಳಿಗೆ ತೆರಳಿ ಸಭೆ ನಡೆಸಿದರು. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಕಾರ್ಯದರ್ಶಿ ಕೃಷ್ಣಮೂರ್ತಿ ಬಿ. ಕುಲಕರ್ಣಿ, ಕೆಬಿಜೆಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್‌. ಶಿವಕುಮಾರ್‌, ವಿಜೆಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣರಾವ್‌ ಪೇಶ್ವೆ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT