ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಗತ್ಯ ನಿರ್ಬಂಧ ಹೇರದಂತೆ ಪ್ರಧಾನಿ ಸೂಚನೆ: ಸಿಎಂ ಬೊಮ್ಮಾಯಿ

Last Updated 27 ಏಪ್ರಿಲ್ 2022, 9:31 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಅನಗತ್ಯ ನಿರ್ಬಂಧಗಳನ್ನು ಹೇರಬಾರದು ಎಂಬ ಸೂಚನೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್‌ ನಾಲ್ಕನೇ ಅಲೆ ನಿಯಂತ್ರಿಸುವ ಸಂಬಂಧ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಬುಧವಾರ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ʼಅಗತ್ಯ ಇರುವಷ್ಟು ನಿರ್ಬಂಧಗಳನ್ನು ಮಾತ್ರ ಜಾರಿಗೊಳಿಸುವಂತೆ ಪ್ರಧಾನಿ ನಿರ್ದೇಶನ ನೀಡಿದ್ದಾರೆʼ ಎಂದರು.

ಕೋವಿಡ್‌ ಲಸಿಕೆ ನೀಡುವುದನ್ನು ಚುರುಕುಗೊಳಿಸಲು ಪ್ರಧಾನಿ ಸೂಚಿಸಿದ್ದಾರೆ. 6 ವರ್ಷದಿಂದ 12 ವರ್ಷದೊಳಗಿನ ಮಕ್ಕಳಿಗೆ ಶಾಲೆಗಳಲ್ಲಿ ಲಸಿಕಾ ಅಭಿಯಾನಕ್ಕೆ ಸೂಚನೆ ನೀಡಿದ್ದಾರೆ. 15ರಿಂದ 18 ವರ್ಷದೊಳಗಿನವರು ಮತ್ತು 60 ವರ್ಷ ಮೇಲ್ಪಟ್ಟವರಿಗೂ ಹೆಚ್ಚಿನ ಆದ್ಯತೆ ಮೇಲೆ ಲಸಿಕೆ ನೀಡಲು ಸೂಚಿಸಿದ್ದಾರೆ. ಪ್ರಧಾನಿಯವರ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳಲ್ಲಿ ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ. ಆಸ್ಪತ್ರೆಗಳಲ್ಲಿ ಅಗ್ನಿ ಅವಘಡಗಳನ್ನು ತಪ್ಪಿಸಲು ಅಗ್ನಿಶಮನ ಸೌಲಭ್ಯಗಳ ಕುರಿತು ತಪಾಸಣೆಗೆ ಸೂಚಿಸಿದ್ದಾರೆ. ಈ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ರಾಜ್ಯದಲ್ಲಿ ಪ್ರತಿ ದಿನ 30,000 ಪರೀಕ್ಷೆ ನಡೆಸಲಾಗುತ್ತಿದೆ. ಅದರಲ್ಲಿ 20,000 ಬೆಂಗಳೂರಿನಲ್ಲಿ ಹಾಗೂ ಉಳಿದ ಕಡೆ 10,000 ಮಾದರಿಗಳ ಪರೀಕ್ಷೆ ನಡೆಯುತ್ತಿದೆ. ಅಂತರರಾಷ್ಟ್ರೀಯ ಪ್ರಯಾಣಿಕರಲ್ಲಿ ಶೇಕಡ 2ರಷ್ಟು ಮಂದಿಗೆ ಪರೀಕ್ಷೆ ಮಾಡಲಾಗುತ್ತದಿದೆ. ಈ ಎಲ್ಲ ವಿವರಗಳನ್ನು ಪ್ರಧಾನಿಯವರಿಗೆ ನೀಡಲಾಯಿತು ಎಂದು ತಿಳಿಸಿದರು.

ರಾಜ್ಯದ ಆಸ್ಪತ್ರೆಗಳಲ್ಲಿನ ಆಮ್ಲಜನಕ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಇನ್ನೂ 1,100 ಟನ್‌ ಆಮ್ಲಜನಕ ಸಂಗ್ರಹಿಸುವ ಸಾಮರ್ಥ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 50,000 ಹಾಸಿಗೆಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1 ಲಕ್ಷ ಹಾಸಿಗೆಗಳು ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಲಭ್ಯವಿವೆ ಎಂದರು.

ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ವಸತಿ ಸಚಿವ ವಿ. ಸೋಮಣ್ಣ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌, ಆಯುಕ್ತ ಡಿ. ರಂದೀಪ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT