ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಲಾಕ್ಡೌನ್ ಸಂಕಷ್ಟದಲ್ಲಿರುವ ಕಲಾವಿದರಿಗೆ ಆರ್ಥಿಕ ನೆರವು ನೀಡುವ ಯೋಜನೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ಕೋವಿಡ್ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ ₹3,000 ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ಡಿ.ಬಿ.ಟಿ. ಮೂಲಕ ಒಟ್ಟು ₹ 6.23 ಕೋಟಿ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.
ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟಕ್ಕೀಡಾದ ದುರ್ಬಲ ವರ್ಗದವರಿಗೆ ಒಟ್ಟು ₹2,050 ಕೋಟಿಗೂ ಅಧಿಕ ಮೊತ್ತದ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ್ದು, ಈಗಾಗಲೇ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಬೀದಿಬದಿ ವ್ಯಾಪಾರಿಗಳು ಮೊದಲಾದವರಿಗೆ ಡಿ.ಬಿ.ಟಿ. ಮೂಲಕ ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗಿದೆ ಎಂದರು.
ಉಳಿದ ವರ್ಗಗಳಿಗೂ ಶೀಘ್ರವೇ ನೆರವು ನೀಡಲು ಕ್ರಮ ವಹಿಸಲಾಗುತ್ತಿದೆ. ಮೊದಲ ಅಲೆಯ ಸಂದರ್ಭದಲ್ಲಿಯೂ ಕಲಾವಿದರಿಗೆ ನೆರವು ನೀಡಲಾಗಿತ್ತು. ಈ ಬಾರಿಯೂ ಸರ್ಕಾರ ಅವರ ನೆರವಿಗೆ ಧಾವಿಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿ, ಕಲಾವಿದರ ದಾಖಲೆಗಳನ್ನು ಪರಿಶೀಲಿಸಿ, ಅತ್ಯಂತ ಪಾರದರ್ಶಕವಾಗಿ ನೆರವು ನೀಡಲು ಮಂಜೂರಾತಿ ನೀಡಲಾಗಿದೆ.
ಫಲಾನುಭವಿಗಳು ಡಿ.ಬಿ.ಟಿ. ಆಪ್ ಮುಖಾಂತರ ತಮ್ಮ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಗೆ ನೆರವು ವರ್ಗಾವಣೆ ಆಗಿರುವುದನ್ನು ಖಾತರಿ ಪಡಿಸಿಕೊಳ್ಳಬಹುದು ಎಂದು ಯಡಿಯೂರಪ್ಪ ತಿಳಿಸಿದರು.
ಇದೀಗ ವಿವಿಧ ಜಿಲ್ಲೆಗಳಲ್ಲಿ ನಿರ್ಬಂದಗಳನ್ನು ತೆರವು ಗೊಳಿಸಲಾಗಿದೆ. ಆದರೆ ಕಲಾವಿದರು ಮುನ್ನೆಚ್ಚರಿಕೆಯ ಕ್ರಮಗಳನ್ನು ತಪ್ಪದೆ ಪಾಲಿಸಬೇಕು. ಜೊತೆಗೆ ಲಸಿಕೆಯನ್ನು ಸಹ ಸರ್ಕಾರ ಉಚಿತವಾಗಿ ನೀಡುತ್ತಿದ್ದು, ತಪ್ಪದೆ ಹಾಕಿಸಿಕೊಳ್ಳುವ ಮೂಲಕ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದರು.
ಸಮಾರಂಭದಲ್ಲಿ ಮಾತನಾಡಿದ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಮೊದಲ ಅಲೆಯ ಸಂದರ್ಭದಲ್ಲಿಯೂ 17 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೆರವು ನೀಡಲಾಗಿತ್ತು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.