ರೈತರ ಆದಾಯ ದ್ವಿಗುಣಕ್ಕೆ ಕ್ರಮ: ಯಡಿಯೂರಪ್ಪ

ಬೆಂಗಳೂರು: ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿವರ್ತಿಸುವ ಮೂಲಕ ರೈತರ ಆದಾಯ ದ್ವಿಗುಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ‘ತೋಟಗಾರಿಕಾ ಮೇಳ’ವನ್ನು ಶನಿವಾರ ಆನ್‌ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ‘ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ ಮತ್ತು ಪ್ಯಾಕೇಜಿಂಗ್ ಕೆಲಸಕ್ಕೆ ಪೂರಕವಾಗಿ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸುವ ಯೋಜನೆ ಇದೆ. ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ಮತ್ತು ಭಾರತೀಯ ತೋಟಗಾರಿಕಾ ಸಂಸ್ಥೆಗಳ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ’ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ 100ನೇ ‘ಕಿಸಾನ್ ರೈಲು’ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ 27,000 ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ರಾಜ್ಯದಿಂದ ದಾಳಿಂಬೆ, ಕಿತ್ತಳೆ ಮತ್ತು ಇತರ ತೋಟಗಾರಿಕಾ ಉತ್ಪನ್ನಗಳನ್ನು ಸಾಗಿಸಲು ಈ ರೈಲುಗಳನ್ನು ಬಳಸಿಕೊಳ್ಳಲಾಗುವುದು. ತೋಟಗಾರಿಕಾ ಕ್ಷೇತ್ರದ ಅಭಿವೃದ್ಧಿ ಪೂರಕವಾಗಿ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನೂ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ತೋಟಗಾರಿಕಾ ಸಚಿವ ಕೆ. ನಾರಾಯಣ ಗೌಡ ಮಾತನಾಡಿದರು. ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ. ಇಂದ್ರೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.