ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಬಿಎಸ್‌ವೈ ಬೆಂಬಲಿಸಿ ಸಮಾವೇಶ: 500ಕ್ಕೂ ಹೆಚ್ಚು ಮಠಾಧೀಶರು ಹಾಜರು

Last Updated 25 ಜುಲೈ 2021, 13:15 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬೆಂಬಲಿಸಿ ನಗರದ ಅರಮನೆ ಮೈದಾನದಲ್ಲಿ ರಾಜ್ಯದ ವಿವಿಧ ಮಠಾಧೀಶರ ಸಮಾವೇಶ ಆರಂಭವಾಗಿದೆ. ರಾಜ್ಯದ ವಿವಿಧ ಮಠಗಳ 500ಕ್ಕೂ ಹೆಚ್ಚು ಮಠಾಧೀಶರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ತಿಪಟೂರಿನ ರುದ್ರಮುನಿ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ತೀರ್ಮಾನ ಕೈಗೊಳ್ಳದಂತೆ ಬಿಜೆಪಿ ಹೈಕಮಾಂಡ್‌ ಮೇಲೆ ಒತ್ತಡ ತರುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ.

ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳು ಈ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಬಿಜೆಪಿ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಬೆಂಬಲ ಕಳೆದುಕೊಳ್ಳುತ್ತದೆ ಎಂಬ ಸಂದೇಶವನ್ನು ಬಿಜೆಪಿ ವರಿಷ್ಠರಿಗೆ ರವಾನಿಸುವುದು ಈ ಸಮಾವೇಶದ ಪ್ರಮುಖ ಉದ್ದೇಶ.

ಸಮಾವೇಶದಲ್ಲಿ ಮಾತನಾಡಿದ ದಿಂಗಾಲೇಶ್ವರ ಶ್ರೀ, ʼಈ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸರಿಯಲ್ಲ. ಯಡಿಯೂರಪ್ಪಮ ಅವರಿಗೆ ಧೈರ್ಯ ತುಂಬುವುದಕ್ಕಾಗಿ ಮಠಾಧೀಶರು ಸೇರಿದ್ದಾರೆ. ನಾವು ಯಾರ ಪರವೂ ಅಲ್ಲ, ಯಾರ ವಿರುದ್ಧವೂ ಅಲ್ಲ. ಉತ್ತಮವಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿ ಎಂಬುದು ನಮ್ಮ ಅಭಿಪ್ರಾಯ" ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT