ಗುರುವಾರ , ಆಗಸ್ಟ್ 11, 2022
27 °C
ಸ್ಥಳೀಯ ಚುನಾಯಿತ ಪ್ರತಿನಿಧಿಗಳ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ

ಅಂಜನಾದ್ರಿಗೆ ರೋಪ್‌ವೇ: 2 ತಿಂಗಳೊಳಗೆ ಟೆಂಡರ್‌ ಮುಗಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊಪ್ಪಳ ಜಿಲ್ಲೆಯ ಕಿಷ್ಕಿಂದೆಯ ಅಂಜನಾದ್ರಿ ಬೆಟ್ಟಕ್ಕೆ ರೋಪ್‌ವೇ ನಿರ್ಮಿಸುವ ಕಾಮಗಾರಿಯ ಟೆಂಡರ್‌ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕುರಿತು ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಅಂಜನಾದ್ರಿಗೆ ಭೇಟಿನೀಡುವ ಪ್ರವಾಸಿಗರಿಗೆ ಹೆಚ್ಚಿನ ಸೌಕರ್ಯ ಒದಗಿಸಬೇಕು. ಶೀಘ್ರವಾಗಿ ರೋಪ್‌ವೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಅದಕ್ಕೆ ಪೂರಕವಾಗಿ ತ್ವರಿತ ನಿರ್ಧಾರ ಕೈಗೊಳ್ಳಬೇಕು’ ಎಂದರು.

430 ಮೀಟರ್ ಉದ್ದದ ರೋಪ್‌ವೇ ನಿರ್ಮಿಸುವ ಪ್ರಸ್ತಾವವಿದೆ. ರೋಪ್‌ವೇ ಆರಂಭವಾಗುವ ಸ್ಥಳದಲ್ಲಿ ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ವಾಹನ ನಿಲುಗಡೆಗೆ ಸ್ಥಳಾವಕಾಶ, ಸರದಿಯಲ್ಲಿ ಕಾಯುವ ಪ್ರವಾಸಿಗರಿಗೆ ಅಗತ್ಯವಿರುವ ಸೌಲಭ್ಯಗಳನ್ನೂ ಕಲ್ಪಿಸಬೇಕು ಎಂದು ಸೂಚಿಸಿದರು.

ಅಂಜನಾದ್ರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 60 ಎಕರೆ ಜಮೀನು ಅಗತ್ಯವಿದೆ. ಅದರಲ್ಲಿ 58 ಎಕರೆ ಖಾಸಗಿಯವರ ಜಮೀನು. ತ್ವರಿತವಾಗಿ ಈ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಬೇಕು. ರೈತರ ಒಪ್ಪಿಗೆ ಮೇರೆಗೆ ಅಥವಾ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿ, ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

ಬೆಟ್ಟದ ಸಂಪರ್ಕ ರಸ್ತೆ, ಪರ್ಯಾಯ ಮಾರ್ಗಗಳನ್ನು ಗುರುತಿಸಿ ಅಭಿವೃದ್ಧಿಪಡಿಸಬೇಕು. ರಾಷ್ಟ್ರೀಯ ಹೆದ್ದಾರಿಯಿಂದ ಗಂಗಾವತಿವರೆಗಿನ ರಾಜ್ಯ ಹೆದ್ದಾರಿ ವಿಸ್ತರಣೆ ಮಾಡಬೇಕಿದೆ. ಈ ಸಂಬಂಧ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಿ, ಅನುಮೋದನೆಗೆ ಸಲ್ಲಿಸಬೇಕು. ಕಾಮಗಾರಿಗಳಿಗೆ ಅಗತ್ಯವಿರುವ ಅನುದಾನ ಮಂಜೂರಾತಿಗೆ ಪ್ರಸ್ತಾವ ಸಲ್ಲಿಸಬೇಕು ಎಂದು ಸೂಚಿಸಿದರು.

ಸಚಿವರಾದ ಆನಂದ್ ಸಿಂಗ್, ಹಾಲಪ್ಪ ಆಚಾರ್, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸವರಾಜ ದಡೆಸೂಗೂರ, ಪರಣ್ಣ ಮುನವಳ್ಳಿ, ಅಮರೇಗೌಡ ಬಯ್ಯಾಪೂರ, ರಾಘವೇಂದ್ರ ಹಿಟ್ನಾಳ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್‌, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕ್‍ರೂಪ್ ಕೌರ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪ್ರಸಾದ್‍ ಸಭೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.