ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ ಕುರಿತು ಮುಖ್ಯಮಂತ್ರಿ ಸಭೆ

ಕೇಂದ್ರದ ಪೂರ್ವಾನುಮತಿ ಪಡೆಯಲು ಸೂಚನೆ
Last Updated 23 ಸೆಪ್ಟೆಂಬರ್ 2021, 16:38 IST
ಅಕ್ಷರ ಗಾತ್ರ

ಬೆಂಗಳೂರು: ಲಿಂಗನಮಕ್ಕಿ ಅಣೆಕಟ್ಟೆ ನಿರ್ಮಾಣದ ಸಂದರ್ಭದಲ್ಲಿ ಒಕ್ಕಲೆಬ್ಬಿಸಲಾದ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಅವರು ನೆಲೆಸಿರುವ ಅರಣ್ಯ ಜಮೀನುಗಳಲ್ಲೇ ಪುನರ್ವಸತಿ ಕಲ್ಪಿಸಿ, ಹಕ್ಕುಪತ್ರ ವಿತರಿಸಲು 1978ರ ಅರಣ್ಯ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಪೂರ್ವಾನಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ, ಶರಾವತಿ ಅಭಯಾರಣ್ಯ ಪ್ರದೇಶದ ನಿವಾಸಿಗಳ ಸಮಸ್ಯೆಗಳು, ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ಹಾಗೂ ‘ಸಿ’ ಮತ್ತು ‘ಡಿ’ ದರ್ಜೆಯ ಜಮೀನುಗಳನ್ನು ಅರಣ್ಯ ಇಲಾಖೆಯಿಂದ ಹಿಂಪಡೆಯುವ ಕುರಿತು ಅವರು ಶಿವಮೊಗ್ಗ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದರು.

ಶರಾವತಿ ಮುಳುಗಡೆ ಸಂತ್ರಸ್ತರು ನೆಲೆಸಿರುವ ಮತ್ತು ಸಾಗುವಳಿ ಮಾಡುತ್ತಿರುವ ಅರಣ್ಯ ಜಮೀನುಗಳನ್ನು ಡಿನೋಟಿಫೈ ಮಾಡುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಈಗ ಅರಣ್ಯ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ಮುಂದುವರಿಯುವಂತಿಲ್ಲ. ಅದಕ್ಕೆ ಪೂರಕವಾಗಿ ತ್ವರಿತವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ, ಪೂರ್ವಾನುಮತಿ ಪಡೆಯಲು ಪ್ರಯತ್ನಿಸಬೇಕು ಎಂದು ಬೊಮ್ಮಾಯಿ ನಿರ್ದೇಶನ ನೀಡಿದರು.

ಮುಳುಗಡೆ ಸಂತ್ರಸ್ತರ ಜಮೀನುಗಳನ್ನು ಗುರುತಿಸಲು ಮತ್ತು ಜಂಟಿ ಸರ್ವೆ ನಡೆಸಲು ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಚಿಸಿದ್ದ ಕಾರ್ಯಪಡೆಯನ್ನು ಚುರುಕುಗೊಳಿಸಲಾಗುವುದು. ಅದಕ್ಕೆ ಅಗತ್ಯವಿರುವ ಹೆಚ್ಚಿನ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದು ಹೇಳಿದರು.

ತ್ವರಿತ ಇತ್ಯರ್ಥಕ್ಕೆ ಸೂಚನೆ: ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಅರಣ್ಯದ ಗಡಿ ಭಾಗದಲ್ಲಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸಭೆ ನಡೆಸಿ, ಪರಿಹಾರ ಒದಗಿಸಬೇಕು. ಕುವೆಂಪು ವಿಶ್ವವಿದ್ಯಾಲಯಕ್ಕೆ ನೀಡಿರುವ ಅರಣ್ಯ ಜಮೀನಿನ ಗುತ್ತಿಗೆ ನವೀಕರಣಕ್ಕೆ ಸಂಬಂಧಿಸಿದಂತೆಯೂ ಅರಣ್ಯ ಮತ್ತು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಜರುಗಿಸಬೇಕು ಎಂದು ನಿರ್ದೇಶನ ನೀಡಿದರು.

ಶಿವಮೊಗ್ಗ, ಶಿಕಾರಿಪುರ– ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗ ಸೇರಿದಂತೆ ಹಲವು ಯೋಜನೆಗಳು ಅರಣ್ಯ ಇಲಾಖೆಯಿಂದ ವಿಳಂಬವಾಗುತ್ತಿರುವ ಕುರಿತು ಯಡಿಯೂರಪ್ಪ ಪ್ರಸ್ತಾಪಿಸಿದರು. ಈ ರೀತಿಯ ಸಮಸ್ಯೆಗಳ ಪರಿಹಾರಕ್ಕೆ ಅರಣ್ಯ ಇಲಾಖೆಯ ವಿಶೇಷ ಅಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿ ಸೂಚಿಸಿದರು.

ಸಚಿವರಾದ ಅರಬೈಲ್‌ ಶಿವರಾಂ ಹೆಬ್ಬಾರ್, ಆರಗ ಜ್ಞಾನೇಂದ್ರ, ಉಮೇಶ ಕತ್ತಿ, ವಿ. ಸುನೀಲ್‌ ಕುಮಾರ್‌, ಸಾಗರ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ್‌, ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT