ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ: ಇನ್ನೂ ಎರಡು ಎಸ್‌ಡಿಆರ್‌ಎಫ್ ತಂಡ

ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
Last Updated 7 ಆಗಸ್ಟ್ 2022, 7:45 IST
ಅಕ್ಷರ ಗಾತ್ರ

ಬೆಂಗಳೂರು: ಅತಿವೃಷ್ಟಿ, ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದಕ್ಕಾಗಿ ರಾಜ್ಯ ವಿಕೋಪ ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್) ಇನ್ನೂ ಎರಡು ತಂಡಗಳನ್ನು ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್‌ ದೃಢಪಟ್ಟಿದ್ದರಿಂದ ಮನೆಯಲ್ಲೇ ಪ್ರತ್ಯೇಕ ವಾಸ ಇರುವ ಅವರು, ಪ್ರವಾಹಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಶನಿವಾರ ವಿಡಿಯೊ ಕಾನ್ಫರೆನ್ಸ್‌ ನಡೆಸಿದರು.

‘ರಾಷ್ಟ್ರೀಯ ವಿಕೋಪ ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ರಾಜ್ಯದಲ್ಲಿ ಪ್ರವಾಹ, ಭೂಕುಸಿತದಿಂದ ತೊಂದರೆಯಾಗಿರುವ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ರಕ್ಷಣೆ ಮತ್ತು ಸ್ಥಳಾಂತರ ಕಾರ್ಯಾಚರಣೆ ಚುರುಕುಗೊಳಿಸಲು ಎಸ್‌ಡಿಆರ್‌ಎಫ್‌ನ ಇನ್ನೆರಡು ತಂಡಗಳನ್ನು ತ್ವರಿತವಾಗಿ ರಚಿಸಿ, ಕಾರ್ಯಾಚರಣೆಗೆ ನಿಯೋಜಿಸಬೇಕು’ ಎಂದರು.

ಅತಿವೃಷ್ಟಿಯಿಂದ ಹಾನಿಯಾದ ರಸ್ತೆ ಮತ್ತು ಸೇತುವೆಗಳನ್ನು ತುರ್ತಾಗಿ ದುರಸ್ತಿ ಮಾಡಬೇಕು. ವಿದ್ಯುತ್‌ ಕಂಬ, ವಿದ್ಯುತ್‌ ಪರಿವರ್ತಕಗಳ ಬದಲಾವಣೆಯನ್ನೂ ತ್ವರಿತವಾಗಿ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್‌ ಮಾರ್ಗಗಳು ಹಾನಿಗೀಡಾದ ಪ್ರದೇಶದಲ್ಲಿ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿ, ವಿದ್ಯುತ್‌ ಪೂರೈಕೆ ಮಾಡುವುದಕ್ಕೆ ಆದ್ಯತೆ ನೀಡಬೇಕು. ಜಿಲ್ಲಾಧಿಕಾರಿಗಳು ಮತ್ತು ವಿದ್ಯುತ್‌ ಸರಬರಾಜು ಕಂಪನಿಗಳ ಅಧಿಕಾರಿಗಳು ಸಮನ್ವಯದಿಂದ ಈ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಸ್ಥಳಾಂತರಕ್ಕೆ ಸೂಚನೆ: ಗದಗ ಜಿಲ್ಲೆಯ ಬೆಣ್ಣಿಹಳ್ಳ, ಹಾವೇರಿ ಜಿಲ್ಲೆಯ ವರದಾ ನದಿ ಪ್ರದೇಶ ಸೇರಿದಂತೆ ದಿಢೀರ್‌ ಪ್ರವಾಹ ಉಂಟಾಗುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅಣೆಕಟ್ಟೆಗಳಿಂದ ನೀರು ಬಿಡುಗಡೆ ಮಾಡುವ ಮುನ್ನ ಕೆಳಭಾಗದ ಜನರಿಗೆ ಎಚ್ಚರಿಕೆ ನೀಡಬೇಕು. ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಣ್ಣಿನ ಕುಸಿತ, ಭೂಕುಸಿತದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಅಲ್ಲಿನ ಜನರನ್ನು ಕಡ್ಡಾಯವಾಗಿ ಸ್ಥಳಾಂತರ ಮಾಡಬೇಕು. ಭೂಕುಸಿತದಿಂದ ರಸ್ತೆ ಸಂಪರ್ಕ ಬಂದ್‌ ಆಗುವುದನ್ನು ತಪ್ಪಿಸಲು ಪರಿಹಾರ ಕಾರ್ಯಾಚರಣೆಗೆ ತಂಡಗಳನ್ನು ಸನ್ನದ್ಧವಾಗಿ ಇರಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಕೆ.ಸಿ. ನಾರಾಯಣಗೌಡ, ಕೆ. ಗೋಪಾಲಯ್ಯ, ಬಿ.ಎ. ಬಸವರಾಜ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT